ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದಿನಿಂದ ಮಾ.16ರವರೆಗೆ 2ನೇ ಟೆಸ್ಟ್ ಕ್ರಿಕೆಟ್ ಪಂದ್ಯವಿರುವ ಹಿನ್ನೆಲೆ ಸಂಚಾರ ಕಿರಿ-ಕಿರಿ ತಪ್ಪಿಸಲು ಸ್ಟೇಡಿಯಂ ಸುತ್ತಮುತ್ತ ವಾಹನ ನಿಲುಗಡೆ ನಿಷೇಧಿಸಲಾಗಿದೆ ಎಂದು ಸಂಚಾರಿ ಪೊಲೀಸ್ ವಿಭಾಗ ಪ್ರಕಟಣೆಯಲ್ಲಿ ತಿಳಿಸಿದೆ.
ಕ್ರಿಕೆಟ್ ವೀಕ್ಷಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ಬರುವುದರಿಂದ ಸಂಚಾರ ದಟ್ಟಣೆ ಹೆಚ್ಚಾಗುವ ಸಾಧ್ಯತೆಗಳಿವೆ. ಹೀಗಾಗಿ, ಸ್ಟೇಡಿಯಂ ಸುತ್ತಮುತ್ತಲಿನ ಕೆಲ ರಸ್ತೆಗಳಲ್ಲಿ ಮಾರ್ಚ್ 12ರಿಂದ 16ರವರೆಗೆ ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 11.30ರವರೆಗೆ ವಾಹನ ನಿಲುಗಡೆ ನಿಷೇಧಿಸಲಾಗಿದೆ ಎಂದು ಹೇಳಿದೆ.
ಬಾಳೇಕುಂದ್ರಿ ವೃತ್ತದಿಂದ ಕ್ವೀನ್ಸ್ ವೃತ್ತ, ಕ್ವೀನ್ಸ್ ವೃತ್ತದಿಂದ ಕಾವೇರಿ ಎಂಪೋರಿಯಂ ಜಂಕ್ಷನ್, ಎಂ.ಜಿ ರಸ್ತೆಯಿಂದ ಕಬ್ಬನ್ ರಸ್ತೆ, ರಾಜಭವನ ರಸ್ತೆ, ಟಿ.ಚೌಡಯ್ಯ ರಸ್ತೆ, ಸೆಂಟ್ರಲ್ ಸ್ಟ್ರೀಟ್, ಅನಿಲ್ ಕುಂಬ್ಳೆ ವೃತ್ತ, ಶಿವಾಜಿನಗರ ಬಸ್ ನಿಲ್ದಾಣ, ಕಾಮರಾಜ ರಸ್ತೆ ಜಂಕ್ಷನ್‌ನಿಂದ ಡಿಕೆನ್ಸ್‌ನ್ ರಸ್ತೆ ಜಂಕ್ಷನ್‌ವರೆಗೆ ಬಿಎಂಟಿಸಿ ಬಸ್‌ಗಳನ್ನು ಹೊರತುಪಡಿಸಿ ಇತರ ಎಲ್ಲ ತರಹದ ವಾಹನಗಳ ನಿಲುಗಡೆ ನಿಷೇಧಿಸಿದೆ ಎಂದಿದೆ.
ಸೆಂಟ್ ಮಾರ್ಕ್ಸ್ ರಸ್ತೆಯಲ್ಲಿ ಎಸ್‌ಬಿಐ ವೃತ್ತದಿಂದ ಆಶೀರ್ವಾದಂ ವೃತ್ತ, ಎಂ.ಜಿ ರಸ್ತೆಯಿಂದ ಸೆಂಟ್ ಮಾರ್ಕ್ಸ್ ರಸ್ತೆ ಹಾಗೂ ರೆಸಿಡೆನ್ಸಿ ರಸ್ತೆ, ಕ್ವೀನ್ಸ್ ವೃತ್ತದಿಂದ ಹಡ್ಸನ್ ವೃತ್ತದವರೆಗೆ, ಲ್ಯಾವೆಲ್ಲಿ ರಸ್ತೆಯಲ್ಲಿ ಕ್ವೀನ್ಸ್ ವೃತ್ತದಿಂದ ವಿಠ್ಠಲ್ ಮಲ್ಯ ರಸ್ತೆಯ ಜಂಕ್ಷನ್, ಸಿದ್ದಲಿಂಗಯ್ಯ ವೃತ್ತದಿಂದ ವಿಠಲ್ ಮಲ್ಯ ರಸ್ತೆಯಲ್ಲಿ ಬಿಷಪ್ ಕಾಟನ್ ಬಾಲಕಿಯರ ಶಾಲೆಯವರೆಗೆ ವಾಹನ ನಿಲುಗಡೆ ನಿಷೇಧಿಸಲಾಗಿದೆ ಎಂದು ನಗರ ಸಂಚಾರ ವಿಭಾಗ ತಿಳಿಸಿದೆ.
ಇದನ್ನೂ ಓದಿ: ತುಮಕೂರಲ್ಲಿ ರಸ್ತೆ ಗುಂಡಿ ರಿಪೇರಿ: ವರದಿ ಸಲ್ಲಿಸುವಂತೆ ಪಾಲಿಕೆಗೆ ಹೈಕೋರ್ಟ್ ತಾಕೀತು