ಬೆಂಗಳೂರು: ''ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಟ್ಟುಕೊಂಡು ಪರೋಕ್ಷ ವಾಗ್ದಾಳಿ ನಡೆಸಿರುವ ಪಕ್ಷದ ಮುಖಂಡ, ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ಅವರ ನಡೆ ಬಗ್ಗೆ ಪಕ್ಷವು ಗಮನಿಸುತ್ತಿದ್ದು, ಈ ಕುರಿತು ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದೆ'' ಎಂದು ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ತಿಳಿಸಿದ್ದಾರೆ.
ಬೆಂಗಳೂರಲ್ಲಿ ಮಾತನಾಡಿದ ಅವರು, ''ಹರಿಪ್ರಸಾದ್ ಪಕ್ಷದ ಹಿರಿಯ ನಾಯಕರು. ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿ, ರಾಜ್ಯಸಭಾ ಸದಸ್ಯರಾಗಿದ್ದರು, ಹಾಲಿ ವಿಧಾನ ಪರಿಷತ್ತಿನಲ್ಲಿ ಪಕ್ಷದ ನಾಯಕರಾಗಿ ಕೆಲಸ ಮಾಡುತ್ತಿದ್ದಾರೆ. ಅವರಿಂದ ಇಂತಹ ಮಾತು ಬರಬಾರದಿತ್ತು. ಅವರ ಮಾತುಗಳನ್ನು ಕೇಳಿಸಿಕೊಂಡು ಪಕ್ಷದ ರಾಷ್ಟ್ರೀಯ ನಾಯಕರು ಸುಮ್ಮನೆ ಕೂರುವುದಿಲ್ಲ'' ಎಂದಿದ್ದಾರೆ.
''ಹರಿಪ್ರಸಾದ್ ಅವರಿಗೆ ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸುರ್ಜೇವಾಲಾ, ವೇಣುಗೋಪಾಲ್ ಎಲ್ಲರೂ ಆತ್ಮೀಯರು. ಹೀಗಿರುವಾಗ ಅವರು ಎಲ್ಲ ವಿಚಾರಗಳನ್ನೂ ಪಕ್ಷದ ಒಳಗೇ ಮಾತನಾಡಬೇಕಿತ್ತು. ಆದರೆ, ಅವರು ಬೀದಿಗೆ ಹೋಗಿದ್ದಾರೆ. ಇದು ಸರಿಯಲ್ಲ. ಇದರ ಪರಿಣಾಮಗಳನ್ನು ಅವರು ಎದುರಿಸಬೇಕಾಗುತ್ತದೆ'' ಎಂದು eಂ ಬಿ ಪಾಟೀಲ್ ಎಚ್ಚರಿಕೆ ನೀಡಿದ್ದಾರೆ.
ಕಾಂಗ್ರೆಸ್ಸಿನಲ್ಲಿ ಯಾವ ಆಂತರಿಕ ಕಲಹವೂ ಇಲ್ಲ ಎಂದು ಅವರು ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಶನಿವಾರ ನಡೆದ ಈಡಿಗ, ಬಿಲ್ಲವ, ನಾಮಧಾರಿ, ಧೀವರು ಮತ್ತು ಅತಿ ಹಿಂದುಳಿದ ವರ್ಗಗಳ ಸಮಾನ ಮನಸ್ಕರ ಸಭೆಯಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ಬಿ ಕೆ ಹರಿಪ್ರಸಾದ್ ಸಿಎಂ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದ್ದರು. ಹೆಸರು ಹೇಳದೆನೇ ಬಿ ಕೆ ಹರಿಪ್ರಸಾದ್ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದರು.
ಸಿಎಂ ಸಿದ್ದರಾಮಯ್ಯ ವಿರುದ್ಧ ಗರಂ ಆಗಿದ್ದ ಹರಿಪ್ರಸಾದ್: ಸಮಾವೇಶ ಉದ್ದೇಶಿಸಿ ಮಾತನಾಡಿದ್ದ ಅವರು, ''ಯಾರೋ ಕೆಲವರು ಪಂಚೆ ಹಾಕಿಕೊಂಡು, ಹ್ಯೂಬ್ಲೆಟ್ ವಾಚ್ ಕಟ್ಟಿಕೊಂಡು, ಒಳಗಡೆ ಖಾಕಿ ಚಡ್ಡಿ ಹಾಕಿಕೊಂಡು ಸಮಾಜವಾದಿ ಅಂತ ಹೇಳಿದರೆ ಆಗೋದಿಲ್ಲ'' ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ಹೆಸರು ಉಲ್ಲೇಖಿಸದೇ ಹ್ಯೂಬ್ಲೆಟ್ ವಾಚ್ ಬಗ್ಗೆ ಪ್ರಸ್ತಾಪ ಮಾಡಿ ಮಜಾವಾದಿ ಎಂದು ಕಿಡಿಕಾರಿದ್ದರು.
''ಹಿಂದಿನ ಯಾವ ಸಿಎಂಗಳೂ ಜಾತಿ ರಾಜಕಾರಣ ಮಾಡಲಿಲ್ಲ. ಬಂಗಾರಪ್ಪ ಅವರು ಎಲ್ಲಾ ಕಾರ್ಯಕ್ರಮಗಳನ್ನು ರೂಪಿಸಿ ಎಲ್ಲಾ ಜಾತಿ, ಬಡವರಿಗೆ ಅನುಕೂಲವಾಗುವ ಕೆಲಸ ಮಾಡಿದ್ದರು. ಕಾಗೋಡು ತಿಮ್ಮಪ್ಪ, ಬಂಗಾರಪ್ಪ ಯಾರೂ ಜಾತಿ ರಾಜಕಾರಣ ಮಾಡಲಿಲ್ಲ. ಕಾಗೋಡು ತಿಮ್ಮಪ್ಪ ಅವರು ಸಮಾಜವಾದದಲ್ಲಿ ಇದ್ದಂತವರು. ಸಮಾಜವಾದದ ಹೋರಾಟ ಮಾಡಿದವರು. ಕಾಗೋಡು ಹೋರಾಟದಲ್ಲಿ ಮುಂಚೂಣಿಯಲ್ಲಿದ್ದವರು. ಸಮಾಜವಾದಿ ಅಂದುಕೊಂಡು ಮಜಾವಾದಿಯಾಗಿರಲಿಲ್ಲ ಕಾಗೋಡು ತಿಮ್ಮಪ್ಪನವರು. ಸಮಾಜವಾದ ಅಂದರೆ ಎಲ್ಲರಿಗೂ ಸಮಾನವಾದ ಹಕ್ಕು ನೀಡುವುದಾಗಿದೆ ಎಂದು ಸಿದ್ದರಾಮಯ್ಯ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದರು.
ಇದನ್ನೂ ಓದಿ: ಅರೆಬೆಂದ 'ಶಕ್ತಿ' ಯೋಜನೆ ಖಾಸಗಿ ಸಂಚಾರ ವ್ಯವಸ್ಥೆಯನ್ನೇ ಬುಡಮೇಲಾಗಿಸಿದೆ: ಹೆಚ್ಡಿಕೆ ಆಕ್ರೋಶ