ಬೆಂಗಳೂರು: ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆಯಲ್ಲಿ ಉಂಟಾಗುತ್ತಿರುವ ಗೊಂದಲಗಳ ಕುರಿತು ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ಸರ್ಕಾರಿ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆಯಲ್ಲಿ ರಾಜ್ಯ ಸರ್ಕಾರ ರೂಪಿಸಿರುವ 2013ರಲ್ಲಿ ಮಾರ್ಗಸೂಚಿಗಳನ್ನು ಮರು ಪರಿಶೀಲನೆ ನಡೆಸುವಂತೆ ಹೈಕೋರ್ಟ್ ಸೂಚಿಸಿದೆ.
ಕೇವಲ 40 ಕಿಲೋಮೀಟರ್ ದೂರದ ಸ್ಥಳಕ್ಕೆ ವರ್ಗಾವಣೆ ಮಾಡಿದ್ದ ಸರ್ಕಾರದ ಕ್ರಮ ಪ್ರಶ್ನಿಸಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಆರ್.ಡಿ.ರಾಮದಾಸ್ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಜಿ.ನರೇಂದ್ರ ಮತ್ತು ನ್ಯಾ.ಸಿ.ಎಂ.ಜೋಷಿ ಅವರಿದ್ದ ವಿಭಾಗೀಯ ಪೀಠ ಈ ಸೂಚನೆ ನೀಡಿ ಅರ್ಜಿ ಇತ್ಯರ್ಥಪಡಿಸಿದೆ.
ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲು ಇದು ಸೂಕ್ತ ಸಮಯವಾಗಿದೆ. ಅಧಿಕಾರಿಗಳ ವರ್ಗಾವಣೆ ಸಂದರ್ಭದಲ್ಲಿ ನಿಯಮಗಳನ್ನು ಪಾಲಿಸಬೇಕಾಗುತ್ತದೆ. ಈ ನಿಟ್ಟಿನಲ್ಲಿ 2013ರಲ್ಲಿ ರಾಜ್ಯಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಪರಿಗಣಿಸಬೇಕು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಸೂಚನೆ ನೀಡಿದೆ. ಅಲ್ಲದೆ, ಸರ್ಕಾರದ ಈ ರೀತಿಯ ನಿಯಮಗಳ ಉಲ್ಲಂಘನೆಗಳಿಂದ ರಾಜ್ಯ ಸರ್ಕಾರವೇ ನ್ಯಾಯಾಲಯಗಳಲ್ಲಿ ದೊಡ್ಡ ದಾವೆಗಳು ಹೂಡುವುದಕ್ಕೆ ಕಾರಣವಾಗುತ್ತಿದೆ. ಇದರಿಂದ ನ್ಯಾಯಾಲಯಗಳಲ್ಲಿ ವಿಳಂಬಕ್ಕೆ ಕಾರಣವಾಗುತ್ತಿದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
ಪ್ರಕರಣದಲ್ಲಿ ವರ್ಗಾವಣೆ ಅವಧಿಪೂರ್ವ ಎಂಬುದಾದರೂ ಮುಖ್ಯಮಂತ್ರಿಗಳ ಪೂರ್ವಾನುಮತಿ ಪಡೆಯಲಾಗಿದೆ ಎಂದು ದಾಖಲೆಗಳು ತಿಳಿಸುತ್ತಿವೆ. ಇದಕ್ಕೆ ಮುಖ್ಯಮಂತ್ರಿಗಳ ಪೂರ್ವಾನುಮತಿಯಿರುವುದು ತಿಳಿಯಲಿದೆ ಎಂದು ತಿಳಿಸಿರುವ ನ್ಯಾಯಪೀಠ, ವರ್ಗಾವಣೆ ಆಗಿರುವ ಇಬ್ಬರೂ ಅಧಿಕಾರಿಗಳ ಹುದ್ದೆಗಳು ಮೈಸೂರು ತಾಲೂಕಿನಲ್ಲಿಯೇ ಇದೆ. ಹೀಗಾಗಿ ದೊಡ್ಡ ಮಟ್ಟದ ತೊಂದರೆಯಾಗುವುದಿಲ್ಲ ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ಹೇಳಿದೆ.
ಪ್ರಕರಣದ ಹಿನ್ನೆಲೆ ಏನು? ಮೈಸೂರು ತಾಲೂಕಿನ ಬೀರೆಹುಂಡಿ ಗ್ರಾಮ ಪಂಚಾಯತ್ನಲ್ಲಿ ಸೇವೆ ಸಲ್ಲಿಸುತ್ತಿದ್ದ ಕುಳ್ಳೇಗೌಡ ಎಂಬುವರ ಸ್ಥಳಕ್ಕೆ ಅರ್ಜಿದಾರ ಆರ್.ಡಿ. ರಾಮದಾಸ್ ಅವರನ್ನು ವರ್ಗಾವಣೆ ಮಾಡಲಾಗಿತ್ತು. ಈ ಕ್ರಮವನ್ನು ಪ್ರಶ್ನಿಸಿದ್ದ ಕುಳ್ಳೇಗೌಡ, ಗ್ರೂಪ್ ಸಿ ವೃಂದ ಸಿಬ್ಬಂದಿಯನ್ನು ಕನಿಷ್ಟ ನಾಲ್ಕು ವರ್ಷಗಳ ಕಾಲ ವರ್ಗಾವಣೆ ಮಾಡಬಾರದು ಎಂಬುದಾಗಿ ಸರ್ಕಾರ ನಿಯಮ ರೂಪಿಸಿದೆ. ಆದರೆ, ಅವಧಿಪೂರ್ವ ವರ್ಗಾವಣೆ ಮಾಡಲಾಗಿದೆ ಎಂದು ಕರ್ನಾಟಕ ಆಡಳಿತ ನ್ಯಾಯಮಂಡಳಿ(ಕೆಎಟಿ)ಯಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಕೆಎಟಿ ಕುಳ್ಳೇಗೌಡರ ಅರ್ಜಿಯನ್ನು ಮಾನ್ಯ ಮಾಡಿದ್ದು, ರಾಮದಾಸ್ ಅವರ ವರ್ಗಾವಣೆಯನ್ನು ರದ್ದು ಮಾಡಿತ್ತು. ಇದನ್ನು ಪ್ರಶ್ನಿಸಿ ರಾಮದಾಸ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಪೀಠ ಸರ್ಕಾರಕ್ಕೆ ಸೂಚನೆ ನೀಡಿ ಅರ್ಜಿಯನ್ನು ಇತ್ಯರ್ಥ ಪಡಿಸಿದೆ.
(ಓದಿ: ಕೊರೊನಾ ಸಂದರ್ಭದಲ್ಲಿ ಮೃತಪಟ್ಟ ಸಾರಿಗೆ ಸಿಬ್ಬಂದಿಗೆ ಪರಿಹಾರ.. ಸರ್ಕಾರಕ್ಕೆ ನೋಟಿಸ್ ಜಾರಿ)