ಬೆಂಗಳೂರು : ಕೋವಿಡ್-19 ನಿಯಂತ್ರಿಸಲು ಕೇಂದ್ರ ಸರ್ಕಾರ ಜಾರಿ ಮಾಡಿರುವ ಮಾರ್ಗಸೂಚಿಗಳನ್ನು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪುತ್ರಿ ನಿಶ್ಚಿತಾರ್ಥ ಮತ್ತು ಶಾಸಕ ಪಿ ಟಿ ಪರಮೇಶ್ವರ್ ನಾಯ್ಕ್ ಪುತ್ರನ ಮದುವೆಯಲ್ಲಿ ಉಲ್ಲಂಘಿಸಲಾಗಿದೆ ಎಂದು ಆರೋಪಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ.
ನಗರದ ವಕೀಲ ಜಿ ಆರ್ ಮೋಹನ್ ಈ ಮೆಮೋ ಅರ್ಜಿ ಸಲ್ಲಿಸಿದ್ದು ಅದರಲ್ಲಿ ಜೂನ್ 15ರಂದು ಬಳ್ಳಾರಿಯ ಹಗರಿಬೊಮ್ಮನಹಳ್ಳಿಯಲ್ಲಿ ಶಾಸಕ ಪರಮೇಶ್ವರ್ ನಾಯ್ಕ್ ಮಗನ ಮದುವೆ ನಡೆದಿದೆ. ಈ ಸಮಾರಂಭದಲ್ಲಿ ಕೋವಿಡ್ -19 ಮಾರ್ಗಸೂಚಿಗಳನ್ನು ಉಲ್ಲಂಘಿಸಲಾಗಿದೆ. ಮದುವೆ ಕಾರ್ಯಕ್ರಮಗಳಲ್ಲಿ 50ಕ್ಕೂ ಹೆಚ್ಚು ಮಂದಿ ಸೇರುವಂತಿಲ್ಲ. 65 ವರ್ಷ ಮೀರಿದವರು ಭಾಗವಹಿಸುವಂತಿಲ್ಲ. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಹಾಗೂ ಜಿಲ್ಲಾಡಳಿತದಿಂದ ಅನುಮತಿ ಪಡೆಯಬೇಕೆಂಬ ಕೇಂದ್ರದ ನಿಯಮಗಳನ್ನು ಉಲ್ಲಂಘಿಸಲಾಗಿದೆ.
ಅಲ್ಲದೆ ಪಿ ಟಿ ಪರಮೇಶ್ವರ್ ನಾಯಕ್ ಮಗನ ಮದುವೆಯಲ್ಲಿ ಮಾಸ್ಕ್ ಧರಿಸಿರಿಲ್ಲ. ಅದೇ ರೀತಿ ಆರೋಗ್ಯ ಸಚಿವ ಶ್ರೀರಾಮುಲು ಕೂಡ ಮಾಸ್ಕ್ ಹಾಕಿಕೊಂಡಿರಲಿಲ್ಲ. 65 ವರ್ಷ ಮೀರಿರುವ ಮಾಜಿ ಸಿಎಂ ಸಿದ್ದರಾಮಯ್ಯ ಸಹ ಭಾಗವಹಿಸಿದ್ದಾರೆ. ಹೀಗಾಗಿ ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ ಜನಪ್ರತಿನಿಧಿಗಳ ವಿರುದ್ಧ ನೈಸರ್ಗಿಕ ವಿಕೋಪ ನಿರ್ವಹಣಾ ಕಾಯ್ದೆಯಡಿ ಕಾನೂನು ಕ್ರಮ ಜರುಗಿಸಲು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನಿರ್ದೇಶಿಸಬೇಕು ಎಂದು ಅರ್ಜಿಯಲ್ಲಿ ಕೋರಿದ್ದಾರೆ.
ದಾಖಲೆಗಳಲ್ಲಿ ಪೂರಕವಾಗಿ ಮಾಜಿ ಸಚಿವ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಪುತ್ರಿ ಐಶ್ವರ್ಯ ಮತ್ತು ಮಾಜಿ ಸಿಎಂ ಎಸ್ ಎಂ ಕೃಷ್ಣ ಮೊಮ್ಮಗನ ವಿವಾಹ ನಿಶ್ಚಿತಾರ್ಥ ಸಮಾರಂಭದ ಫೋಟೋಗಳನ್ನು ಮೊಮೋ ಜೊತೆಗೆ ಅರ್ಜಿದಾರರು ಲಗತ್ತಿಸಲಾಗಿದೆ. ಇಲ್ಲಿಯೂ ಸಹ ಕೋವಿಡ್-19 ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಾರೆ. ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಭಾಗವಹಿಸಿದವರು ಸಾಮಾಜಿಕ ಅಂತರ ಕಾಯ್ದುಕೊಳ್ಳದೆ, ಮಾಸ್ಕ್ ಧರಿಸದೆ ಮಾರ್ಗಸೂಚಿ ಉಲ್ಲಂಘಿಸಿದ್ದು ಸೂಕ್ತ ಕ್ರಮ ಜರುಗಿಸಲು ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ. ಅರ್ಜಿ ಜೂನ್ 18ರಂದು ವಿಚಾರಣೆಗೆ ನಿಗದಿಯಾಗಿದೆ.