ಬೆಂಗಳೂರು : ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕೋಲಾರದ ಮಾಲೂರು ಕ್ಷೇತ್ರದಿಂದ ಶಾಸಕ ಕೆ.ವೈ. ನಂಜೇಗೌಡ ಆಯ್ಕೆ ರದ್ದು ಕೋರಿ ಸಲ್ಲಿಸಲಾಗಿರುವ ಅರ್ಜಿ ಸಂಬಂಧ ಪ್ರತಿವಾದಿಗಳಿಗೆ ಹ್ಯಾಂಡ್ ಸಮನ್ಸ್ ಜಾರಿ ಮಾಡಲು ಅರ್ಜಿದಾರರಿಗೆ ಹೈಕೋರ್ಟ್ ಅನುಮತಿ ನೀಡಿದೆ. ಶಾಸಕ ಕೆ.ವೈ. ನಂಜೇಗೌಡ ಅವರ ಆಯ್ಕೆಯನ್ನು ಪ್ರಶ್ನಿಸಿ ಬಿಜೆಪಿ ಪರಾಜಿತ ಅಭ್ಯರ್ಥಿ ಕೆ.ಎಸ್. ಮಂಜುನಾಥ್ ಗೌಡ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್. ದೇವದಾಸ್ ಅವರ ಪೀಠ ಈ ಆದೇಶ ಮಾಡಿದೆ.
ವಿಚಾರಣೆ ವೇಳೆ ಅರ್ಜಿದಾರ ಪರ ಹಿರಿಯ ವಕೀಲರು ಹಾಜರಾಗಿ, ಅರ್ಜಿಯಲ್ಲಿ ಶಾಸಕ ಕೆ.ವೈ. ನಂಜೇಗೌಡ ಮತ್ತು ಚುನಾವಣೆಗೆ ಸ್ಪರ್ಧಿಸಿದ್ದ ಇತರೆ 13 ಮಂದಿ ಪ್ರತಿವಾದಿಗಳಿದ್ದಾರೆ. ಆ ಪೈಕಿ ಅನೇಕ ಪ್ರತಿವಾದಿಗಳಿಗೆ ಅರ್ಜಿ ಸಂಬಂಧ ಈ ಹಿಂದೆ ಹೈಕೋರ್ಟ್ ಜಾರಿ ಮಾಡಿದ್ದ ನೋಟಿಸ್/ಸಮನ್ಸ್ ತಲುಪಿಲ್ಲ. ಅದರಂತೆ ಪ್ರತಿವಾದಿಗಳಿಗೆ ನೋಟಿಸ್/ಹ್ಯಾಂಡ್ ಸಮನ್ಸ್ ಜಾರಿ ಮಾಡಲು ಅನುಮತಿ ನೀಡಬೇಕು ಎಂದು ಕೋರಿದರು.
ಇದನ್ನು ಪರಿಗಣಿಸಿದ ನ್ಯಾಯಪೀಠ, ಈವರೆಗೂ ಸಮನ್ಸ್ ಜಾರಿಯಾಗದ ಪ್ರತಿವಾದಿಗಳಿಗೆ ಹ್ಯಾಂಡ್ ಸಮನ್ಸ್ ಜಾರಿ ಮಾಡಲು ಅರ್ಜಿದಾರರ ಪರ ವಕೀಲರು ಒಂದು ವಾರದಲ್ಲಿ ಅಗತ್ಯ ಕ್ರಮ ಜರುಗಿಸಬೇಕು. ಸಮನ್ಸ್ ಜಾರಿಯಾದ ನಂತರದ ಒಂದು ವಾರದಲ್ಲಿ ಪ್ರತಿವಾದಿಗಳು ಅರ್ಜಿ ಕುರಿತು ಆಕ್ಷೇಪಣೆ ಸಲ್ಲಿಸಬೇಕು. ಹಾಗೆಯೇ, ಮೊದಲನೆ ಪ್ರತಿವಾದಿಯಾಗಿರುವ ಶಾಸಕ ಕೆ.ವೈ. ನಂಜೇಗೌಡ ಅವರು ಅರ್ಜಿಗೆ ಆಕ್ಷೇಪಣೆ ಸಲ್ಲಿಸಬೇಕು ಎಂದು ನಿರ್ದೇಶಿಸಿ ವಿಚಾರಣೆಯನ್ನು ಸೆಪ್ಟೆಂಬರ್ 11ಕ್ಕೆ ಮುಂದೂಡಿತು.
ಪ್ರಕರಣದ ಹಿನ್ನೆಲೆ ಏನು ?: ವಿಧಾನಸಭೆ ಚುನಾವಣೆಯಲ್ಲಿ ಮಾಲೂರು ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದ ಕೆ.ವೈ. ನಂಜೇಗೌಡ ಗೆಲುವು ಸಾಧಿಸಿದ್ದರು. ಇದನ್ನು ಪ್ರಶ್ನಿಸಿರುವ ಅರ್ಜಿದಾರರು, ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಎಲ್ಲಾ 15 ಮಂದಿ ಸ್ಪರ್ಧಿಗಳ ಏಜೆಂಟ್ಗಳಿಗೆ ಮತ ಎಣಿಕೆ ಕೇಂದ್ರದಲ್ಲಿ ಸಮರ್ಪಕ ವ್ಯವಸ್ಥೆ ಮಾಡಿರಲಿಲ್ಲ. ಒಂದೇ ಕೊಠಡಿಯಲ್ಲಿ ಮತಗಳ ಎಣಿಕೆ ಕಾರ್ಯ ನಡೆಯಬೇಕಿದ್ದು, ಎರಡು ಪ್ರತ್ಯೇಕ ಕೊಠಡಿಯಲ್ಲಿ ಮತ ಎಣಿಕೆ ಮಾಡಲಾಗಿದೆ. ಆ ಮೂಲಕ ಜನಪ್ರತಿನಿಧಿಗಳ ಕಾಯ್ದೆಯ ನಿಯಮಗಳು ಮತ್ತು ಚುನಾವಣಾ ಆಯೋಗ ಪ್ರಕಟಿಸಿದ್ದ ನಿಯಮಗಳ ಉಲ್ಲಂಘಿಸಲಾಗಿದೆ. ಹೀಗಾಗಿ ನಂಜೇಗೌಡ ಅವರನ್ನು ವಿಜೇತ ಅಭ್ಯರ್ಥಿಯಾಗಿ ಘೋಷಣೆ ಮಾಡಿದ ಚುನಾವಣಾ ಆಯೋಗದ ಕ್ರಮ ರದ್ದುಪಡಿಸಬೇಕು. ಅಷ್ಟೇ ಅಲ್ಲದೆ, ಕ್ಷೇತ್ರದ ಮತಗಳನ್ನು ಮರು ಎಣಿಕೆಗೆ ನಿರ್ದೇಶನ ನೀಡಬೇಕು ಎಂದು ಕೋರಿದ್ದರು.
ಇದನ್ನೂ ಓದಿ: ಹಿಜಾಬ್ ಗೋಡೆಬರಹ: ಆರೋಪಿಗಳ ವಿರುದ್ಧ ದಾಖಲಾಗಿದ್ದ ಎಫ್ಐಆರ್ ರದ್ದು