ಬೆಂಗಳೂರು: ಭ್ರಷ್ಟಾಚಾರ, ಕರ್ತವ್ಯ ಲೋಪ ಸೇರಿದಂತೆ ಮತ್ತಿತರ ಆರೋಪಗಳ ಕುರಿತಂತೆ ತಾಂತ್ರಿಕ ಶಿಕ್ಷಣ ಇಲಾಖೆ ನಿರ್ದೇಶಕ ಎಚ್.ಯು ತಳವಾರ ವಿರುದ್ಧ ಲೋಕಾಯುಕ್ತ ಸಂಸ್ಥೆ ಹಾಗೂ ಅಧಿಕಾರಿಗಳು ನೀಡಿರುವ ವರದಿ ಆಧರಿಸಿ ಕ್ರಮ ಕೈಗೊಳ್ಳಬಹುದು ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.
ತಳವಾರ ವಿರುದ್ಧ ಕ್ರಮ ಜರುಗಿಸಲು ಸರ್ಕಾರಕ್ಕೆ ನಿರ್ದೇಶನ ಕೋರಿ ನಿವೃತ್ತ ಉಪನ್ಯಾಸಕ ಆರ್. ನಾರಾಯಣ ಸ್ವಾಮಿ ಸಲ್ಲಿಸಿದ್ದ ಪಿಐಎಲ್ ಅರ್ಜಿಯನ್ನು ಸಿಜೆ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಕೆಲ ಕಾಲ ವಾದ ಆಲಿಸಿದ ಪೀಠ, ಎಚ್.ಯು. ತಳವಾರ ಅವರ ನೇಮಕ ಹಾಗೂ ನಡತೆ ಬಗ್ಗೆ ಲೋಕಾಯುಕ್ತ ಸಂಸ್ಥೆ, ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಬಿ.ವಿ. ಕೃಷ್ಣ ರಾವ್ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕ ವಿಕಾಸ್ ಕಿಶೋರ್ ಸುರಲ್ಕರ್ ತನಿಖೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ ಎಂದು ತಿಳಿಸಲಾಗಿದೆ.
ಆ ವರದಿ ಆಧರಿಸಿ ಸರ್ಕಾರ ತನ್ನ ವಿವೇಚನೆ ಅನುಸಾರ ಕ್ರಮ ಕೈಗೊಳ್ಳಬಹುದು. ಈ ಕುರಿತ ಅನುಪಾಲನಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ನಿರ್ದೇಶಿಸಿ ಅರ್ಜಿ ಇತ್ಯರ್ಥಪಡಿಸಿತು.
ಅರ್ಜಿದಾರರ ಕೋರಿಕೆ: ತಳವಾರ ಅವರ ನೇಮಕಾತಿ ಹಾಗೂ ಅವರು ತಾಂತ್ರಿಕ ಶಿಕ್ಷಣ ಇಲಾಖೆಯಲ್ಲಿ ನಡೆಸಿದ ಭ್ರಷ್ಟಾಚಾರ, ಅಧಿಕಾರ ದುರ್ಬಳಕೆ ಕುರಿತು 56ಕ್ಕೂ ಹೆಚ್ಚು ದೂರುಗಳು ಸರ್ಕಾರಕ್ಕೆ ಸಲ್ಲಿಕೆಯಾಗಿದ್ದವು. ಈ ಹಿನ್ನೆಲೆ ಲೋಕಾಯಕ್ತ ಸಂಸ್ಥೆ, ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಬಿ.ವಿ. ಕೃಷ್ಣ ರಾವ್ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕ ವಿಕಾಸ್ ಕಿಶೋರ್ ಸುರಲ್ಕರ್ ತನಿಖೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದರು.
ಆದರೆ, ಸರ್ಕಾರ ವರದಿಯನ್ನು ಪರಿಗಣಿಸಿಲ್ಲ ಮತ್ತು ತಳವಾರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಕ್ಷೇಪಿಸಿ ಮೂಲ ಅರ್ಜಿದಾರ ನಾರಾಯಣ ಸ್ವಾಮಿ ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಸಿದ್ದರು.