ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ಇರುವ ಕಾರಣ ಪಟಾಕಿ ಮಾರಾಟ ಹಾಗೂ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಹಾಗೆಯೇ ಈ ಸಂಬಂಧ ರಾಜ್ಯ ಸರ್ಕಾರ ತನ್ನ ನಿಲುವು ತಿಳಿಸುವಂತೆಯೂ ಸೂಚಿಸಿದೆ. ಈ ಕುರಿತು ನಗರದ ಚಾರ್ಟರ್ಡ್ ಅಕೌಂಟೆಂಟ್ ಡಾ. ಎ.ಎಸ್. ವಿಷ್ಣು ಭರತ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಕೆಲ ಕಾಲ ವಾದ ಆಲಿಸಿದ ಪೀಠ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಬಿಬಿಎಂಪಿಗೆ ನೋಟಿಸ್ ಜಾರಿಗೊಳಿಸಿತು. ಅಲ್ಲದೇ, ಪಟಾಕಿ ಮಾರಾಟ ಹಾಗೂ ಬಳಕೆ ನಿಷೇಧಿಸುವ ಕುರಿತು ನಿಲುವು ಸರ್ಕಾರ ತನ್ನ ನಿಲುವು ತಿಳಿಸುವಂತೆ ಸೂಚಿಸಿ, ವಿಚಾರಣೆಯನ್ನು ಗುರುವಾರ ಮಧ್ಯಾಹ್ನಕ್ಕೆ ಮುಂದೂಡಿತು.
ಇದಕ್ಕೂ ಮುನ್ನ ಅರ್ಜಿದಾರರ ಪರ ವಕೀಲ ಬಿ. ಕೆ. ನರೇಂದ್ರ ಬಾಬು ವಾದ ಮಂಡಿಸಿ, ಸದ್ಯ ಕೋವಿಡ್ನಿಂದಾಗಿ ಜನರು ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದಾರೆ. ಮುಖ್ಯವಾಗಿ ಉಸಿರಾಟದ ತೊಂದರೆ ಇದ್ದು, ಇಂಥ ಸಂದರ್ಭದಲ್ಲಿ ಪಟಾಕಿ ಸಿಡಿಸಿದರೆ, ವಾತಾವರಣದಲ್ಲಿ ರಾಸಾಯನಿಕಯುಕ್ತ ಹೊಗೆ ಆವರಿಸಲಿದೆ. ಇದರಿಂದ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುವ ಸಾಧ್ಯತೆ ಇದೆ. ಕೋವಿಡ್ ಸಾಂಕ್ರಾಮಿಕದ ಕಾರಣಕ್ಕಾಗಿಯೇ ಕೆಲ ರಾಜ್ಯಗಳು ಪಟಾಕಿಯನ್ನು ಸಂಪೂರ್ಣವಾಗಿ ನಿಷೇಧಿಸಿವೆ. ಆದರೆ, ರಾಜ್ಯದಲ್ಲಿ ಹಸಿರು ಪಟಾಕಿ ಬಳಕೆಗೆ ಅವಕಾಶ ಕಲ್ಪಿಸಲಾಗಿದೆ. ಆದ್ದರಿಂದ, ರಾಜ್ಯದಲ್ಲೂ ಎಲ್ಲ ಬಗೆಯ ಪಟಾಕಿಗಳನ್ನು ಸಂಪೂರ್ಣವಾಗಿ ನಿಷೇಧಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿದರು.
ಅರ್ಜಿದಾರರ ಕೋರಿಕೆ : ಪಟಾಕಿ ತಯಾರಿಕೆಯಲ್ಲಿ, ಸಲ್ಫರ್ ನೈಟ್ರೇಟ್, ಮೆಗ್ನೀಷಿಯಂ, ನೈಟ್ರೋಜನ್ ಡೈ ಆಕ್ಸೆಡ್ ಮತ್ತಿತರ ವಿಷಕಾರಿ ರಾಸಾಯನಿಕಗಳನ್ನು ಬಳಸಲಾಗುತ್ತದೆ. ಇಂತಹ ಪಟಾಕಿಗಳನ್ನು ಸಿಡಿಸುವುದರಿಂದ ಪರಿಸರ ಮಾಲಿನ್ಯದ ಜತೆಗೆ ಆಸ್ತಮಾ, ಶ್ವಾಸಕೋಶದ ಕ್ಯಾನ್ಸರ್, ಉಸಿರಾಟದ ತೊಂದರೆಯಂಥ ಗಂಭೀರ ಆರೋಗ್ಯ ಸಮಸ್ಯೆಗಳು ಎದುರಾಗುತ್ತವೆ. ಸದ್ಯದ ಪರಿಸ್ಥಿತಿಯಲ್ಲಿ ಕೊರೊನಾ ಸೋಂಕಿಗೆ ತುತ್ತಾದವರು ಮತ್ತಷ್ಟು ತೊಂದರೆಗೆ ಒಳಗಾಗುವ ಸಾಧ್ಯತೆ ಇದೆ. ಇವೆಲ್ಲ ಕಾರಣದಿಂದ ಸದ್ಯ ಒಂದು ವರ್ಷದ ಮಟ್ಟಿಗಾದರೂ ಪಟಾಕಿ ಮಾರಾಟ ಹಾಗೂ ಬಳಕೆ ನಿಷೇಧಿಸಬೇಕು ಎಂದು ವೈದ್ಯರು ಸಲಹೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಅಗತ್ಯ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಕೋರಿದ್ದಾರೆ.