ಬೆಂಗಳೂರು: ರಾಜ್ಯದ ಕೊಳೆಗೇರಿಗಳಲ್ಲಿ 6 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ 97 ಸಾವಿರ ಮನೆಗಳನ್ನು ನಿರ್ಮಿಸಲು ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಕರೆದಿರುವ ಟೆಂಡರ್ ರದ್ದುಪಡಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಈ ಕುರಿತು ಸಾಮಾಜಿಕ ಕಾರ್ಯಕರ್ತೆ ಎಂ.ಜೆ ಗೀತಾ ಎಂಬವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ. ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಕೆಲ ಕಾಲ ಅರ್ಜಿದಾರರ ಪರ ಹಿರಿಯ ವಕೀಲರ ವಾದ ಆಲಿಸಿದ ಪೀಠ, ಅರ್ಜಿಯಲ್ಲಿ ಪ್ರತಿವಾದಿಗಳಾಗಿರುವ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ವಸತಿ ಇಲಾಖೆ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ, ರಾಜೀವ್ ಗಾಂಧಿ ವಸತಿ ನಿಗಮ ಮತ್ತು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿಗೆ ನೋಟಿಸ್ ಜಾರಿ ಮಾಡಿತು.
ಅರ್ಜಿದಾರರ ಕೋರಿಕೆ : ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯು ಅಂದಾಜು 6,516.27 ಕೋಟಿ ರೂಪಾಯಿ ವೆಚ್ಚದಲ್ಲಿ ಕೊಳಗೇರಿ ಪ್ರದೇಶದಲ್ಲಿ ಒಟ್ಟು 97,134 ಮನೆಗಳನ್ನು ನಿರ್ಮಾಣ ಮಾಡಲು ಯೋಜನೆ ಕೈಗೊಂಡಿದೆ.
ಪ್ರಧಾನಮಂತ್ರಿ ಆವಾಸ್ ಯೋಜನೆ-ನಗರ ಅಡಿ ಈ ಯೋಜನೆ ಹಮ್ಮಿಕೊಂಡಿದೆ. ಆದರೆ, ಪಿಎಂಎವೈಎ-ಯು ಮಾರ್ಗಸೂಚಿಗಳನ್ನು ಉಲ್ಲಂಸಿಘಿಸಿ ಈ ಯೋಜನೆ ಹಮ್ಮಿಕೊಳ್ಳಲಾಗಿದೆ. ಈ ಹಿಂದೆ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ನಿಧಿಗಳನ್ನು ದುರ್ಬಳಕೆ ಮಾಡಿಕೊಂಡು ಮನೆಗಳನ್ನು ನಿರ್ಮಾಣ ಮಾಡಲಾಗಿದೆ.
ಆದ್ದರಿಂದ, ಕೊಳಗೇರಿ ಅಭಿವೃದ್ಧಿ ಮಂಡಳಿ ಕರೆದಿರುವ ಟೆಂಡರ್ ರದ್ದುಪಡಿಸಬೇಕು. ಯೋಜನೆಗೆ ಅನುಮೋದನೆ ನೀಡಿದ ರಾಜ್ಯ ಸರ್ಕಾರದ ಆದೇಶ ರದ್ದುಪಡಿಸಬೇಕು. ಪಿಎಂಎವೈಎ ಯು ನಿಧಿಗಳನ್ನು ದುರ್ಬಳಕೆ ಮಾಡಿಕೊಂಡಿರುವ ಬಗ್ಗೆ ಸಿಬಿಐ ತನಿಖೆಗೆ ವಹಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.
ಓದಿ : ಕೆಪಿಎಸ್ಸಿಯ ಎಸ್ಡಿಎ ಪರೀಕ್ಷೆಗೆ ದಿನಾಂಕ ಮತ್ತು ವೇಳಾಪಟ್ಟಿ ಪ್ರಕಟ