ಬೆಂಗಳೂರು : ರಾಜ್ಯದಲ್ಲಿ ‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ' ಯಡಿ ದಾಖಲಾಗುವ ಪ್ರಕರಣಗಳ ವಿಚಾರಣೆಯಲ್ಲಿ, ಚಾರ್ಜ್‌ಶೀಟ್ ಸಲ್ಲಿಕೆಯಲ್ಲಿ ಹಾಗೂ ನೀಡುವ ವಿಚಾರದಲ್ಲಿ ವಿಳಂಬವಾಗುತ್ತಿರುವ ಮತ್ತು ಕಾನೂನು ಪಾಲನೆಯಲ್ಲಿ ಲೋಪವಾಗಿರುವ ಬಗ್ಗೆ ಒಂದು ತಿಂಗಳಲ್ಲಿ ವಿವರಣೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.
ಈ ಕುರಿತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೇಲ್ವಿಚಾರಣೆ ಮತ್ತು ಬಲವರ್ಧನೆ ಸಂಘದ ಸಂಚಾಲಕಿ ಪಿ. ಯಶೋಧ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ಸರ್ಕಾರಕ್ಕೆ ಈ ನಿರ್ದೇಶನ ನೀಡಿದೆ.
ಅಲ್ಲದೇ ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ದಾಖಲಾಗುವ ಪ್ರಕರಣಗಳ ವಿಚಾರಣೆ ನಡೆಸಲು 9 ವಿಶೇಷ ಕೋರ್ಟ್‌ಗಳನ್ನು ಸ್ಥಾಪಿಸುವ ಪ್ರಸ್ತಾವನೆ ಸದ್ಯ ಯಾವ ಹಂತದಲ್ಲಿದೆ. ವಿಶೇಷ ಕೋರ್ಟ್‌ಗಳಲ್ಲಿ ಖಾಲಿ ಇರುವ ನ್ಯಾಯಾಧೀಶರ ಹುದ್ದೆಗಳ ಭರ್ತಿಗೆ ಕೈಗೊಂಡಿರುವ ಕ್ರಮಗಳೇನು? ಪ್ರಕರಣಗಳನ್ನು ಕಾಲಮಿತಿಯೊಳಗೆ ವಿಚಾರಣೆ ನಡೆಸಬೇಕು ಎಂಬ ಅಂಶವನ್ನು ನ್ಯಾಯಾಧೀಶರ ಗಮನಕ್ಕೆ ತಂದು ಸುತ್ತೋಲೆ ಏನಾದರೂ ಹೊರಡಿಸಲಾಗಿದೆಯೇ, ಪ್ರಕರಣಗಳ ವಿಚಾರಣೆ ನಡೆಸುವ ನ್ಯಾಯಾಧೀಶರಿಗೆ ತರಬೇತಿ ಕಾರ್ಯಾಗಾರಗಳೇನಾದರೂ ಏರ್ಪಡಿಸಲಾಗಿದೆಯೇ ಎಂಬ ಬಗ್ಗೆ ಹೈಕೋರ್ಟ್ ರಿಜಿಸ್ಟ್ರಾರ್ (ನ್ಯಾಯಾಂಗ) 1 ತಿಂಗಳಲ್ಲಿ ವರದಿ ಸಲ್ಲಿಸಬೇಕು. ಅದನ್ನು ರಿಜಿಸ್ಟಾರ್ ಜನರಲ್ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಪೀಠ ಇದೇ ವೇಳೆ ನಿರ್ದೇಶಿಸಿದೆ.
ಅರ್ಜಿ ವಿಚಾರಣೆಗೆ ಬಂದಾಗ ಸರ್ಕಾರದ ಪರ ವಕೀಲರು, ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಈವರೆಗೆ ಕೈಗೊಂಡಿರುವ ಕ್ರಮಗಳ ಕುರಿತ ವರದಿಯನ್ನು ಪೀಠಕ್ಕೆ ಸಲ್ಲಿಸಿದರು.
ವರದಿ ಸಂಬಂಧ ಅರ್ಜಿದಾರರ ಪರ ವಕೀಲೆ ಜಯ್ನ ಕೊಠಾರಿ ಕೆಲ ಆರೋಪಗಳನ್ನು ಮಾಡಿ, ಕಾಯ್ದೆ ಪ್ರಕಾರ ಪ್ರಕರಣ ದಾಖಲಾದ 60 ದಿನಗಳಲ್ಲಿ ಚಾರ್ಜ್‌ಶೀಟ್ ಸಲ್ಲಿಸಬೇಕು. ಆದರೆ, 2015ರಿಂದ 2019ರವರೆಗೆ ದಾಖಲಾದ 41 ಸಾವಿರಕ್ಕೂ ಹೆಚ್ಚು ಪ್ರಕರಣಗಳ ಪೈಕಿ ಕೇವಲ 6,451 ಪ್ರಕರಣಗಳಲ್ಲಿ ಮಾತ್ರ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ. ರಾಜ್ಯ ಮಟ್ಟದ, ಜಿಲ್ಲಾ ಮತ್ತು ಉಪ ವಿಭಾಗ ಮಟ್ಟದ ವಿಚಕ್ಷಣಾ ಮತ್ತು ಮೇಲ್ವಿಚಾರಣಾ ಸಮಿತಿಗಳ ಸಭೆಗಳು ನಿಯಮಿತವಾಗಿ ನಡೆದಿಲ್ಲ. ಖುಲಾಸೆ ಪ್ರಕರಣಗಳ ಮರುಪರಿಶೀಲನಾ ಸಮಿತಿಯ ಸಭೆಗಳೂ ನಡೆದಿಲ್ಲ. ದೌರ್ಜ್ಯನ್ಯಕ್ಕೊಳಗಾದ ವ್ಯಕ್ತಿಗಳು ಮತ್ತು ಅವರ ಕುಟುಂಬದವರಿಗೆ ಪರಿಹಾರ ಹಾಗೂ ಪುನರ್ವಸತಿ ಕಲ್ಪಿಸುವ ವಿಚಾರದಲ್ಲಿ ಕಾಯ್ದೆಯಲ್ಲಿ ಹೇಳಿರುವಂತೆ ಸರ್ಕಾರ ನಡೆದುಕೊಂಡಿಲ್ಲ ಎಂದು ಆರೋಪಿಸಿದರು.
ಹೇಳಿಕೆ ದಾಖಲಿಸಿಕೊಂಡ ಪೀಠ, ಕಾನೂನು ಪಾಲನೆಯಲ್ಲಿ ಲೋಪವಾಗಿರುವ ಕುರಿತು ಒಂದು ತಿಂಗಳಲ್ಲಿ ವಿವರಣೆ ನೀಡಬೇಕು. ವಿಚಕ್ಷಣಾ ಮತ್ತು ಮೇಲ್ವಿಚಾರಣಾ ಸಮಿತಿಗಳು ಮೂರು ತಿಂಗಳಲ್ಲಿ ಕನಿಷ್ಟ 1 ಸಭೆ ನಡೆಸಬೇಕು. ಎಸ್ಸಿ ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ದಾಖಲಾಗುವ ಪ್ರಕರಣಗಳ ತನಿಖೆ ನಡೆಸುತ್ತಿರುವ ಅಧಿಕಾರಿಗಳಿಗೆ ತರಬೇತಿ ನೀಡಲು ಬಯಸಿದಲ್ಲಿ ರಾಜ್ಯ ಸರ್ಕಾರ ಕರ್ನಾಟಕ ನ್ಯಾಯಾಂಗ ಅಕಾಡೆಮಿಯನ್ನು ಸಂಪರ್ಕಿಸಬಹುದು ಎಂದು ಸೂಚಿಸಿ ವಿಚಾರಣೆಯನ್ನು ಅ.15ಕ್ಕೆ ಮುಂದೂಡಿತು.