ಬೆಂಗಳೂರು : ಮಾಜಿ ಸಚಿವ ಹೆಚ್. ವಿಶ್ವನಾಥ್ ಅವರನ್ನು ವಿಧಾನಪರಿಷತ್ತಿಗೆ ನಾಮ ನಿರ್ದೇಶನ ಮಾಡಿರುವ ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದ್ದು, ಈ ಸಂಬಂಧ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಲಾಗಿದೆ.
ನಗರದ ಸಾಮಾಜಿಕ ಕಾರ್ಯಕರ್ತ ಎಸ್ ರುಕ್ಮಾಂಗದ ಎಂಬುವರು ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಕೆಲಕಾಲ ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ಪೀಠ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ನೂತನ ವಿಧಾನಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಅವರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿತು.
ಅರ್ಜಿದಾರ ಕೋರಿಕೆ:
ಸುಪ್ರೀಂಕೋರ್ಟ್ ತೀರ್ಪಿನ ಪ್ರಕಾರ ಅನರ್ಹರಾಗಿ ಉಳಿದಿರುವ ಹಾಗೂ ವಿಧಾನಸಭೆ ಚುನಾವಣೆಯಲ್ಲಿ ಸೋತಿರುವ ಹೆಚ್. ವಿಶ್ವನಾಥ್ ಅವರನ್ನು ವಿಧಾನಪರಿಷತ್ತಿಗೆ ನಾಮ ನಿರ್ದೇಶನ ಮಾಡಿರುವುದು ಸಂವಿಧಾನ ಬಾಹಿರ. ನಾಮನಿರ್ದೇಶನ ಪ್ರಕ್ರಿಯೆ ಕುರಿತಂತೆ ಮಾಹಿತಿ ಹಕ್ಕು ಅಡಿ ಕೇಳಿರುವ ಮಾಹಿತಿಯನ್ನು ನೀಡಲು ರಾಜ್ಯಪಾಲರ ಕಚೇರಿ ಹಾಗೂ ಆಡಳಿತ ಸುಧಾರಣಾ ನಿರಾಕರಿಸಲಾಗಿದೆ. ಹೀಗಾಗಿ ಜುಲೈ 22ರಂದು ಸಾಹಿತ್ಯ ಕ್ಷೇತ್ರದಿಂದ ಪರಿಷತ್ತಿಗೆ ನಾಮನಿರ್ದೇಶನ ಮಾಡಿ ರಾಜ್ಯಪಾಲರು ಹೊರಡಿಸಿರುವ ಆದೇಶವನ್ನು ಸಂವಿಧಾನ ಬಾಹಿರ ಎಂದು ಘೋಷಿಸಬೇಕು. ಹಾಗೆಯೇ, ವಿಶ್ವನಾಥ್ ವಿಧಾನಸಭೆ ಅಧಿವೇಶನದಲ್ಲಿ ಭಾಗಿಯಾಗುತ್ತಿರುವುದಕ್ಕೆ ತಡೆ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.