ಬೆಂಗಳೂರು : ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಅಧ್ಯಕ್ಷರ ನೇಮಕಾತಿಗಾಗಿ ರೂಪಿಸಿರುವ ಮಾರ್ಗಸೂಚಿಯು ಜಲ ಸಂರಕ್ಷಣೆ ಮತ್ತು ಮಾಲಿನ್ಯ ನಿಯಂತ್ರಣ ಕಾಯ್ದೆಗೆ ವಿರುದ್ಧವಾಗಿದೆ ಎಂದು ಆಕ್ಷೇಪಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಈ ಕುರಿತು ಚಿಕ್ಕಬಳ್ಳಾಪುರದ ಆಂಜನೇಯ ರೆಡ್ಡಿ ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಕೆಲಕಾಲ ಅರ್ಜಿದಾರರ ಪರ ವಕೀಲ ಪ್ರಿನ್ಸ್ ಐಸಾಕ್ ಅವರ ವಾದ ಆಲಿಸಿದ ಪೀಠ, ಪ್ರತಿವಾದಿಗಳಾದ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅರಣ್ಯ ಮತ್ತು ಪರಿಸರ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಪ್ರಿನ್ಸ್ ಐಸಾಕ್ ಅವರು ವಾದ ಮಂಡಿಸಿ, ಮಾಲಿನ್ಯ ನಿಯಂತ್ರಣ ಮಂಡಳಿಗಳ ಅಧ್ಯಕ್ಷರು, ಸದಸ್ಯರು ಹಾಗೂ ಸದಸ್ಯ ಕಾರ್ಯದರ್ಶಿಗಳ ನೇಮಕಾತಿಗೆ ಮಾರ್ಗಸೂಚಿಗಳನ್ನು ರಚಿಸಿ ಕಳೆದ ಜೂ.19ರಂದು ಸರ್ಕಾರ ಅಧಿಸೂಚನೆ ಹೊರಡಿಸಿದೆ. ಆದರೆ, ಈ ಮಾರ್ಗಸೂಚಿ ಜಲ (ಸಂರಕ್ಷಣೆ ಮತ್ತು ಮಾಲಿನ್ಯ ನಿಯಂತ್ರಣ) ಕಾಯ್ದೆಯ ಸೆಕ್ಷನ್ 4(2)ಕ್ಕೆ ವಿರುದ್ಧವಾಗಿದೆ. ಹಾಗೆಯೇ, ಸುಪ್ರೀಂಕೋರ್ಟ್ ನಿರ್ದೇಶನಗಳಿಗೆ ಅನುಗುಣವಾಗಿಲ್ಲ ಎಂದು ಪೀಠಕ್ಕೆ ವಿವರಿಸಿದರು.
ಅರ್ಜಿದಾರರ ಕೋರಿಕೆ : ಜಲ ಕಾಯ್ದೆಯ ಸೆಕ್ಷನ್ 4(2) ಪ್ರಕಾರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗುವವರು ಪರಿಸರ ಸಂರಕ್ಷಣೆ ಕುರಿತು ವಿಶೇಷ ಜ್ಞಾನ ಅಥವಾ ಪ್ರಾಯೋಗಿಕ ಅನುಭವ ಹೊಂದಿರಬೇಕು. ಪರಿಸರಕ್ಕೆ ಸಂಬಂಧಿಸಿದ ಸಂಸ್ಥೆಗಳ ಆಡಳಿತ ನಡೆಸಿದ ಅನುಭವ ಹೊಂದಿರಬೇಕು. ಆದರೆ, ಸರ್ಕಾರದ ಮಾರ್ಗಸೂಚಿಯಲ್ಲಿ ವಿಶೇಷ ಹಾಗೂ ಪ್ರಾಯೋಗಿಕ ಎಂಬ ಅರ್ಹತೆಗಳನ್ನು ಕೈಬಿಡಲಾಗಿದ್ದು, ಅಧ್ಯಕ್ಷ ಸ್ಥಾನಕ್ಕೆ ನೇಮಕಗೊಳ್ಳುವ ವ್ಯಕ್ತಿ ಸರ್ಕಾರಿ ಇಲಾಖೆ, ಸಂಸ್ಥೆ ಅಥವಾ ವಿಶ್ವವಿದ್ಯಾಲಯದ ಆಡಳಿತದ ಭಾಗವಾಗಿರಬೇಕು ಎಂದಷ್ಟೇ ಹೇಳಲಾಗಿದೆ.
ಮಂಡಳಿಯ ಸದಸ್ಯ ಕಾರ್ಯದರ್ಶಿಗೆ ಮಾಲಿನ್ಯ ನಿಯಂತ್ರಣ ಕುರಿತು ವೈಜ್ಞಾನಿಕ ಹಾಗೂ ತಾಂತ್ರಿಕ ವಿಚಾರಗಳಲ್ಲಿ ವಿದ್ಯಾರ್ಹತೆ, ಜ್ಞಾನ ಮತ್ತು ಅನುಭವ ಇರಬೇಕು. ಆದರೆ, ಆ ಸ್ಥಾನಕ್ಕೆ ಭಾರತೀಯ ಸೇವಾ ಆಯೋಗದ ಹಿರಿಯ ಅಧಿಕಾರಿಗಳನ್ನು ನೇಮಕ ಮಾಡಲು ಮಾರ್ಗಸೂಚಿಯಲ್ಲಿ ಅವಕಾಶ ಕಲ್ಪಿಸಲಾಗಿದೆ. ಆದ್ದರಿಂದ ಸರ್ಕಾರದ ಮಾರ್ಗಸೂಚಿಗಳನ್ನು ರದ್ದುಪಡಿಸಬೇಕು. ಜಲ ಕಾಯ್ದೆ ಹಾಗೂ ಸುಪ್ರೀಂಕೋರ್ಟ್ ನಿರ್ದೇಶನಗಳಿಗೆ ಅನುಗುಣವಾಗಿ ಹೊಸ ಮಾರ್ಗಸೂಚಿ ಮತ್ತು ನಿಯಮಗಳನ್ನು ರೂಪಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು. ಅರ್ಜಿ ಇತ್ಯರ್ಥವಾಗುವವರೆಗೆ ಜೂ.19ರ ಮಾರ್ಗಸೂಚಿ ಜಾರಿಗೆ ತಡೆಯಾಜ್ಞೆ ನೀಡಬೇಕು ಎಂದು ಅರ್ಜಿದಾರರು ಕೋರಿದ್ದಾರೆ.