ಬೆಂಗಳೂರು: ಬಹು ಚರ್ಚಿತ ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತಂದಿರುವ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಬಾಗಲಕೋಟೆ ಜಿಲ್ಲೆಯ ಇಳಕಲ್ ಮೂಲದ ಸಾಮಾಜಿಕ ಹೋರಾಟಗಾರ ನಾಗರಾಜ ಶೇಷಪ್ಪ ಹೊಂಗಲ್ ಅವರು "ಕರ್ನಾಟಕ ಭೂ ಸುಧಾರಣೆಗಳ (ತಿದ್ದುಪಡಿ) ಅಧ್ಯಾದೇಶ-2020" ಪ್ರಶ್ನಿಸಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಕೆಲ ಕಾಲ ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ಪೀಠ, ಪ್ರತಿವಾದಿಗಳಾದ ಕಂದಾಯ ಇಲಾಖೆ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆಗಳಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಸೆಪ್ಟೆಂಬರ್ 18ಕ್ಕೆ ಮುಂದೂಡಿತು.
ಅರ್ಜಿದಾರರ ಕೋರಿಕೆ: ಭೂ ಒಡೆತನ, ಖರೀದಿ ಹಾಗೂ ವರ್ಗಾವಣೆಗೆ ಸಂಬಂಧಿಸಿದಂತೆ ಕಾಯ್ದೆಯಲ್ಲಿ ಇದ್ದಂತಹ ಮಿತಿ ಹಾಗೂ ನಿಬಂಧನೆಗಳನ್ನು ತೆಗೆದು ಹಾಕಿ ಸರ್ಕಾರ ಅಧ್ಯಾದೇಶ ಹೊರಡಿಸಿದೆ. ಬ್ರಿಟೀಷ್ ಕಾಲದ ಜಮೀನ್ದಾರಿ ಪದ್ದತಿ ಮತ್ತೆ ಹುಟ್ಟು ಹಾಕಲು ಪೂರಕವಾಗಿರುವ ಅಧ್ಯಾದೇಶ, ಸಂವಿಧಾನದ ಮೂಲ ಆಶಯಕ್ಕೆ ವಿರುದ್ಧವಾಗಿದೆ, ಹಾಗೆಯೇ ಕೃಷಿ ಮತ್ತು ಪರಿಸರಕ್ಕೆ ಮಾರಕವಾಗಲಿದೆ. ಹೀಗಾಗಿ ತಿದ್ದುಪಡಿ ಆದೇಶವನ್ನು ಸಂವಿಧಾನ ಬಾಹಿರ ಎಂದು ಘೋಷಿಸಿ, ರದ್ದುಪಡಿಸಬೇಕು. ಅರ್ಜಿ ಇತ್ಯರ್ಥವಾಗುವವರೆಗೆ ಅಧ್ಯಾದೇಶಕ್ಕೆ ತಡೆ ನೀಡಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.