ಬೆಂಗಳೂರು: ಕರ್ತವ್ಯದ ವೇಳೆ ಸುರಕ್ಷತೆ ಹಾಗೂ ಮೇಲ್ವಿಚಾರಣೆ ದೃಷ್ಟಿಯಿಂದ ಕಾನೂನು ಸುವ್ಯವಸ್ಥೆ ಮತ್ತು ಸಂಚಾರ ವಿಭಾಗದ ಪೊಲೀಸರು ಕಡ್ಡಾಯವಾಗಿ ಬಾಡಿ ಕ್ಯಾಮರಾ ಧರಿಸಲು ನಿರ್ದೇಶಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಈ ಕುರಿತು ನಗರದ ವಕೀಲೆ ಗೀತಾ ಮಿಶ್ರಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಕೆಲ ಕಾಲ ವಾದ ಆಲಿಸಿದ ಪೀಠ, ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ರಾಜ್ಯ ಪೊಲೀಸ್ ಮಹಾನಿರ್ದೇಶಕ, ನಗರ ಪೊಲೀಸ್ ಆಯುಕ್ತ ಹಾಗೂ ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಜಿ.ಆರ್.ಮೋಹನ್ ವಾದಿಸಿ, ಬೆಂಗಳೂರು ನಗರದಲ್ಲಿ ಕರ್ತವ್ಯ ನಿರ್ವಹಿಸುವ ಪೊಲೀಸರ ಸಮವಸ್ತ್ರಕ್ಕೆ ಅಳವಡಿಸಲು 75 ಲಕ್ಷ ರೂಪಾಯಿ ವ್ಯಯಿಸಿ 50 ಬಾಡಿ ಕ್ಯಾಮರಾ ಖರೀದಿಸಲಾಗಿದೆ. ಆದರೆ ಈವರೆಗೂ ಯಾವೊಂದು ಕ್ಯಾಮರಾ ಬಳಕೆ ಮಾಡಿಲ್ಲ. ಈ ಹಿನ್ನೆಲೆಯಲ್ಲಿ 2020ರ ಸೆ. 10ರಂದು ನಗರ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ.
ಪಿಐಎಲ್ ಸಾರಾಂಶ: ಬಾಡಿ ಕ್ಯಾಮರಾ ಧರಿಸುವುದರಿಂದ ಪೊಲೀಸ್ ಸಿಬ್ಬಂದಿ ಮಾಡುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬಹುದು. ಪೊಲೀಸ್ ಸಿಬ್ಬಂದಿಯ ಕರ್ತವ್ಯ ನಿರ್ವಹಣೆಯನ್ನು ಪೊಲೀಸ್ ಠಾಣೆಯಿಂದಲೇ ಹಿರಿಯ ಅಧಿಕಾರಿಗಳು ಗಮನಿಸಿ ಮೇಲ್ವಿಚಾರಣೆ ನಡೆಸಬಹುದು. ಲಾಕ್‌ಡೌನ್ ಮತ್ತು ಅನ್‌ಲಾಕ್ ದಿನಗಳಲ್ಲಿ ಸಾಕಷ್ಟು ಕಾನೂನು ಉಲ್ಲಂಘನೆ ಪ್ರಕರಣಗಳು ನಡೆದಿವೆ. ಅದನ್ನು ಪ್ರಶ್ನಿಸಿದ ಪೊಲೀಸರ ಮೇಲೆ ತಪ್ಪಿತಸ್ಥರೇ ತಿರುಗಿಬಿದ್ದಿರುವ ಪ್ರಕರಣಗಳು ಘಟಿಸಿವೆ.
ಬಾಡಿ ಕ್ಯಾಮರಾ ಧರಿಸುವುದರಿಂದ ಪೊಲೀಸರಿಗೆ ರಕ್ಷಣೆ ಸಿಗಲಿದೆ. ತಪ್ಪಿತಸ್ಥರಿಗೂ ಭಯ ಹುಟ್ಟಿಸುತ್ತದೆ. ಅಲ್ಲದೆ ಬೆಂಗಳೂರು ನಗರ ಪೊಲೀಸರಿಗಾಗಿ ಈಗಾಗಲೇ ಖರೀದಿಸಿರುವ 50 ಬಾಡಿ ಕ್ಯಾಮರಾಗಳನ್ನು ಬಳಸುವಂತೆ ನಿರ್ದೇಶಿಸಬೇಕು. ರಾಜ್ಯಾದ್ಯಂತ ಪೊಲೀಸರ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಮತ್ತು ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಅನುಕೂಲವಾಗುವಂತೆ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಬಾಡಿ ಕ್ಯಾಮರಾ ಖರೀದಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.