ಬೆಂಗಳೂರು: ಕೊರೊನಾ ಭೀತಿ ಹಿನ್ನೆಲೆ 2019-20ನೇ ಸಾಲಿನ ಸರ್ಕಾರಿ ನೌಕರರ ವರ್ಗಾವಣೆಯನ್ನು ಮಾಡದಂತೆ, ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಲು ಕೋರಿ ಹೈಕೋರ್ಟ್‌ಗೆ ಪಿಐಎಲ್ ಅರ್ಜಿ ಸಲ್ಲಿಸಲಾಗಿದೆ.
ಈ ಕುರಿತು ವಕೀಲ ಡಿ.ಜಿ. ಅಶೋಕ್ ಕುಮಾರ್ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಪ್ರಧಾನ ಕಾರ್ಯದರ್ಶಿಯನ್ನು ಪ್ರತಿವಾದಿಯನ್ನಾಗಿ ಮಾಡಲಾಗಿದೆ. ಅರ್ಜಿ ವಿಚಾರಣೆಗೆ ಬರಬೇಕಿದೆ.
ರಾಜ್ಯಾದ್ಯಂತ ಕೊರೊನಾ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಹಲವೆಡೆ ಲಾಕ್‌ಡೌನ್, ಸೀಲ್‌ಡೌನ್, ಕ್ವಾರಂಟೈನ್ ಮುಂದುವರಿದಿದೆ. ಇಂತಹ ಸಂದರ್ಭದಲ್ಲಿ ಸರ್ಕಾರಿ ನೌಕರರ ವರ್ಗಾವಣೆ ನಡೆದರೆ, ನೌಕರರು ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಹೋಗಬೇಕಾಗುತ್ತದೆ.
ಇದರಿಂದ ಸ್ವತಃ ನೌಕರರು ಸೇರಿದಂತೆ ಅವರ ಕುಟುಂಬ ವರ್ಗದವರು ಕೊರೊನಾ ಸೋಂಕಿಗೆ ತುತ್ತಾಗುವ ಸಾಧ್ಯತೆಯಿರುತ್ತದೆ. ಆದ್ದರಿಂದ 2019-20ನೇ ಸಾಲಿನ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆ ನಡೆಸದಂತೆ, ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಕೋರಿದ್ದಾರೆ.