ಬೆಂಗಳೂರು: ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳ ಮಾಡಿರುವ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರ್ಕಾರ ಹಾಗೂ ಪೌರಾಡಳಿತ ಇಲಾಖೆಗೆ ನೋಟಿಸ್ ಜಾರಿ ಮಾಡಿದೆ.
ಈ ಕುರಿತು ಬಾಗಲಕೋಟೆಯ ಇಳಕಲ್ ನಾಗರಾಜ್ ಎಂಬುವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಸಿಜೆ ಎಸ್. ಸಿ ಶರ್ಮಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಕೆಲ ಕಾಲ ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ಪೀಠ, ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿತು.
ಅರ್ಜಿದಾರರ ಕೋರಿಕೆ:
ಈ ಹಿಂದೆ ಸ್ವಯಂ ಆಸ್ತಿ ತೆರಿಗೆ ಪದ್ಧತಿಯಲ್ಲಿ ಸಾಕಷ್ಟು ಗೊಂದಲಗಳಿದ್ದವು. ಹೀಗಾಗಿ ಪ್ರತಿ ವರ್ಷ ತೆರಿಗೆ ಹೆಚ್ಚಳಕ್ಕೆ ಅವಕಾಶ ನೀಡುವ ಕೆಎಂಸಿ ಕಾಯ್ದೆಯ ಸೆಕ್ಷನ್ 108, 109, ಹಾಗೂ 109 ಎ ಗೆ ತಜ್ಞರ ಅಭಿಪ್ರಾಯ ಪಡೆದು ತಿದ್ದುಪಡಿ ಮಾಡಬೇಕು ಎಂದು 2021ರ ಮಾ.29ರಂದು ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಆದರೆ, ಸರ್ಕಾರ ಅದನ್ನು ಪರಿಗಣಿಸಿಲ್ಲ. ಬದಲಿಗೆ, ಕೆಎಂಸಿ ಹಳೆಯ ನಿಯಮಗಳನ್ನೇ ಮುಂದುವರೆಸಿದ್ದು, 2021ರ ಫೆ.19ರಂದು ತೆರಿಗೆ ಪರಿಷ್ಕರಣೆ ಮಾಡುವಂತೆ ಸ್ಥಳೀಯ ಸಂಸ್ಥೆಗಳಿಗೆ ಸೂಚಿಸಿದೆ. ಈ ಸುತ್ತೋಲೆಯನ್ನು ರದ್ದುಪಡಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.