ಬೆಂಗಳೂರು: ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ಸೆಪ್ಟೆಂಬರ್ 28ರಂದು ರಾಜ್ಯಾದ್ಯಂತ ನಡೆದ ಪ್ರತಿಭಟನೆಯಲ್ಲಿ ಕೊರೊನಾ ಮಾರ್ಗಸೂಚಿಗಳನ್ನು ಉಲ್ಲಂಘಿಸಿದವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕಾನೂನು ಕ್ರಮ ಜರುಗಿಸಲು ನಿರ್ದೇಶಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಸಾಮಾಜಿಕ ಕಾರ್ಯಕರ್ತ ಸಾಯಿದತ್ತ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕ ನೇತೃತ್ವದ ವಿಭಾಗೀಯ ಪೀಠವು ಈ ನಿರ್ದೇಶನ ನೀಡಿದೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರು, ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಿ, ಅರ್ಜಿದಾರರು ಎತ್ತಿರುವ ಆಕ್ಷೇಪದ ಬಗ್ಗೆ ವಿವರಣೆ ನೀಡುವಂತೆ ಸೂಚಿಸಿದೆ.
ಅರ್ಜಿದಾರರ ಕೋರಿಕೆ:
ಕೋವಿಡ್ ನಿಯಂತ್ರಿಸುವ ಹಿನ್ನೆಲೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಅನೇಕ ಮಾರ್ಗಸೂಚಿಗಳನ್ನು ಅನುಸರಿಸುವಂತೆ ಆದೇಶಿಸಿವೆ. ಜೊತೆಗೆ, ಸಾಂಸ್ಕೃತಿಕ, ಧಾರ್ಮಿಕ ಮತ್ತು ರಾಜಕೀಯ ಸಭೆ ಸಮಾರಂಭ ನಡೆಸಲು ಮತ್ತು ಜನರು ಗುಂಪು ಸೇರುವುದಕ್ಕೆ ನಿರ್ಬಂಧ ವಿಧಿಸಲಾಗಿದೆ. ಆದರೆ, ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ಮತ್ತು ಕೃಷಿ ಮಸೂದೆ ವಿರೋಧಿಸಿ ಕಳೆದ ಸೆ.28ರಂದು ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ರಾಜಕೀಯ ಪಕ್ಷಗಳು, ಕನ್ನಡ ಹಾಗೂ ರೈತ ಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ.
ಅಲ್ಲದೆ, ಪ್ರತಿಭಟನೆಯಲ್ಲಿ ಪಾಲ್ಗೊಂಡವರಲ್ಲಿ ಬಹುತೇಕರು ಮಾರ್ಗಸೂಚಿಗಳನ್ನು ಪಾಲಿಸಿಲ್ಲ. ಇದು ಕೊರೊನಾ ಸೋಂಕು ಮತ್ತಷ್ಟು ಹೆಚ್ಚಲು ಕಾರಣವಾಗಲಿದೆ. ಹಾಗೆಯೇ, ಪ್ರತಿಭಟನೆ ವೇಳೆ ಕಾನೂನು ಸುವ್ಯವಸ್ಥೆ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಪೊಲೀಸರ ಪ್ರಾಣಕ್ಕೂ ಅಪಾಯ ತಂದೊಡ್ಡಲಿದೆ. ಮಾರ್ಗಸೂಚಿಗಳ ಉಲ್ಲಂಘನೆ ಶಿಕ್ಷಾರ್ಹ ಅಪರಾಧವಾಗಿದೆ. ಆದರೂ ಮಾರ್ಗಸೂಚಿ ಪಾಲಿಸದವರ ವಿರುದ್ಧ ಪೊಲೀಸರು ಕಾನೂನು ಕ್ರಮ ಜರುಗಿಸಿಲ್ಲ ಎಂದು ಅರ್ಜಿದಾರರು ದೂರಿದ್ದಾರೆ.
ಮಾರ್ಗಸೂಚಿಗಳನ್ನು ಉಲ್ಲಂಘಿಸಿದವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕಾನೂನು ಕ್ರಮ ಜರುಗಿಸಬೇಕು. ಮುಂದಿನ ದಿನಗಳಲ್ಲಿ ಕೊರೊನಾ ಮಾರ್ಗಸೂಚಿಗಳಿಗೆ ವಿರುದ್ಧವಾಗಿ ಪ್ರತಿಭಟನೆ ಕೈಗೊಳ್ಳುವುದನ್ನು ನಿಯಂತ್ರಿಸಲು ಕ್ರಮ ಜರುಗಿಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.