ಬೆಂಗಳೂರು: ಡಿಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಆರೋಪಿಗಳ ಹೆಸರು ಮತ್ತು ಮಾಹಿತಿಯನ್ನು ನಗರ ಪೊಲೀಸ್ ಆಯುಕ್ತರ ಕಚೇರಿಯ ನೋಟಿಸ್ ಬೋರ್ಡ್ನಲ್ಲಿ ಪ್ರಕಟಿಸಲು ನಿರ್ದೇಶಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ಸರ್ಕಾರಕ್ಕೆ ನೋಟಿಸ್ ಜಾರಿಮಾಡಿದೆ.
ನಗರದ ವಕೀಲ ಜುನೈದ್ ಆಹ್ಮದ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಕೆಲಕಾಲ ವಾದ ಆಲಿಸಿದ ಪೀಠ, ಪ್ರತಿವಾದಿಗಳಾದ ರಾಜ್ಯ ಗೃಹ ಇಲಾಖೆ, ನಗರ ಪೊಲೀಸ್ ಆಯುಕ್ತ ಹಾಗೂ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪೊಲೀಸರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದಿಸಿ, ಅಪರಾಧ ದಂಡ ಪ್ರಕ್ರಿಯಾ ಸಂಹಿತೆ ಸೆಕ್ಷನ್ 41 ಸಿ ಪ್ರಕಾರ ಬಂಧಿತ ಆರೋಪಿಗಳ ಹೆಸರು ಮತ್ತು ವಿವರಗಳನ್ನು ಹಾಗೂ ಆರೋಪಿಗಳನ್ನು ಬಂಧಿಸಿದ ಅಧಿಕಾರಿಗಳ ಹೆಸರು, ಹುದ್ದೆ ವಿವರಗಳನ್ನು ಜಿಲ್ಲಾ ಕೇಂದ್ರ ಕಚೇರಿಯ ನೋಟಿಸ್ ಬೋರ್ಡ್ನಲ್ಲಿ ಪ್ರಕಟಿಸುವುದು ಕಡ್ಡಾಯ. ಆದರೆ ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಈ ವಿವರವಿಲ್ಲ.
ಈ ವಿಚಾರವಾಗಿ ಆಯುಕ್ತರಿಗೆ ಮನವಿ ಸಲ್ಲಿಸಿದರು ಯಾವುದೇ ಕ್ರಮ ಜರುಗಿಸಿಲ್ಲ. ಆದ್ದರಿಂದ ವಿವರಗಳನ್ನು ಪ್ರಕಟಿಸಲು ಆಯುಕ್ತರಿಗೆ ನಿರ್ದೇಶಿಸಬೇಕು ಎಂದು ಮನವಿ ಮಾಡಿದರು.