ಬೆಂಗಳೂರು: ಹಾಸನ ಕ್ಷೇತ್ರದಿಂದ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಿರುವ ಜೆಡಿಎಸ್ ಅಭ್ಯರ್ಥಿ ಡಾ. ಸೂರಜ್ ರೇವಣ್ಣ ಅವರ ನಾಮಪತ್ರ ತಿರಸ್ಕರಿಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್, ರಾಜ್ಯ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿಗೊಳಿಸಿದೆ.
ಈ ಕುರಿತು ಚನ್ನರಾಯಪಟ್ಟಣ ತಾಲೂಕು ಕುಂದೂರು ಗ್ರಾಮದ ನಿವಾಸಿ ಕೆ.ಎಲ್ ಹರೀಶ್ ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿಯನ್ನು ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಏಕಸಸದಸ್ಯ ಪೀಠ ಇಂದು ವಿಚಾರಣೆ ನಡೆಸಿತು. ಕೆಲ ಕಾಲ ವಾದ ಆಲಿಸಿದ ಪೀಠ, ಅರ್ಜಿ ಸಂಬಂಧ ಹಾಸನ ಜಿಲ್ಲಾಧಿಕಾರಿ, ರಾಜ್ಯ ಮುಖ್ಯ ಚುನಾವಣಾಧಿಕಾರಿ ಹಾಗೂ ಕೇಂದ್ರ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಡಿಸೆಂಬರ್ 6ಕ್ಕೆ ಮುಂದೂಡಿತು.
ಅರ್ಜಿದಾರರ ಆರೋಪ:
ಜೆಡಿಎಸ್ ಅಭ್ಯರ್ಥಿ ಸೂರಜ್ ರೇವಣ್ಣ ಅವರು ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಪ್ರಮಾಣಪತ್ರದ ಅರ್ಜಿಯಲ್ಲಿ ಪತ್ನಿಗೆ ಸಂಬಂಧಿಸಿದ ಮಾಹಿತಿಗಳನ್ನು ಒದಗಿಸಿಲ್ಲ. ಪತ್ನಿಗೆ ಸಂಬಂಧಿಸಿದ ಎಲ್ಲ ಕಾಲಂಗಳಲ್ಲಿ 'ಅನ್ವಯವಾಗುವುದಿಲ್ಲ' ಎಂದು ನಮೂದಿಸಿದ್ದಾರೆ. ಅಲ್ಲದೇ ಸೂರಜ್ ರೇವಣ್ಣ ತಮ್ಮ ಬ್ಯಾಂಕ್ ಖಾತೆಗಳ ಬಗ್ಗೆ ಸರಿಯಾದ ಮಾಹಿತಿ ನೀಡಿಲ್ಲ ಎಂದು ಆರೋಪಿಸಿರುವ ಅರ್ಜಿದಾರರು, ಸೂರಜ್ ನಾಮಪತ್ರವನ್ನು ಅಂಗೀಕರಿಸಿರುವ ಜಿಲ್ಲಾ ಚುನಾವಣಾಧಿಕಾರಿ ಆದೇಶವನ್ನು ರದ್ದುಪಡಿಸಬೇಕು.
ಈ ಸಂಬಂಧ ಅರ್ಜಿದಾರರು ಸಲ್ಲಿಸಿರುವ ಮನವಿ ಪತ್ರವನ್ನು ಪರಿಗಣಿಸಲು ಚುನಾವಣಾ ಆಯೋಗಕ್ಕೆ ನಿರ್ದೇಶಿಸಬೇಕು. ಹಾಗೆಯೇ, ಸೂರಜ್ ರೇವಣ್ಣ ಅವರ ಉಮೇದುವಾರಿಕೆಯನ್ನು ಅನರ್ಹ ಎಂದು ಘೋಷಿಸಬೇಕು ಎಂದು ಮನವಿ ಮಾಡಿದ್ದಾರೆ. ಅಲ್ಲದೇ ಡಿಸೆಂಬರ್ 10ರಂದು ನಡೆಯಲಿರುವ ಹಾಸನ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ತಡೆ ನೀಡಬೇಕು ಎಂದು ಅರ್ಜಿಯಲ್ಲಿ ಮಧ್ಯಂತರ ಮನವಿ ಮಾಡಿದ್ದಾರೆ.
ಇದನ್ನೂ ಓದಿ: Solar Eclipse: ನಾಳೆ ವರ್ಷದ ಕೊನೆಯ ಸೂರ್ಯಗ್ರಹಣ.. ಆತಂಕ ಬೇಡ..ಭಾರತದಲ್ಲಿ ಗೋಚರಿಸಲ್ಲ