ಬೆಂಗಳೂರು: ಆರ್‌ಎಸ್‌ಎಸ್ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣದ ವಿಚಾರಣೆಯನ್ನು ಎನ್‌ಐಎ ವಿಶೇಷ ನ್ಯಾಯಾಲಯದಿಂದ ಸಾಮಾನ್ಯ ಸೆಷನ್ಸ್ ನ್ಯಾಯಾಲಯಕ್ಕೆ ವರ್ಗಾವಣೆ ಮಾಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ. ಪ್ರಕರಣದ ಆರೋಪಿಗಳಾದ ಇರ್ಫಾನ್ ಪಾಷಾ ಹಾಗೂ ಇತರ ಮೂವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ತ್ರಿಸದಸ್ಯ ಪೀಠ ಈ ಆದೇಶ ಪ್ರಕಟಿಸಿದೆ.
ಆರೋಪಿಗಳು ಪ್ರಕರಣವನ್ನು ಎನ್‌ಐಎ ವಿಶೇಷ ನ್ಯಾಯಾಲಯದಿಂದ ಸಾಮಾನ್ಯ ಸೆಷನ್ಸ್ ಕೋರ್ಟ್‌ಗೆ ವರ್ಗಾವಣೆ ಮಾಡುವಂತೆ ಹಾಗೂ ಯುಎಪಿಎ ಕಾಯ್ದೆ ಅಡಿ ಮಾಡಿರುವ ಆರೋಪಗಳನ್ನು ಕೈ ಬಿಡಲು ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿಗಳನ್ನು ವಜಾಗೊಳಿಸಿರುವ ಪೂರ್ಣ ಪೀಠ, ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಅವಕಾಶವಿಲ್ಲ ಎಂದು ತೀರ್ಪು ನೀಡಿದೆ.
2016ರ ಅ.16ರಂದು ಬೆಂಗಳೂರಿನಲ್ಲಿ ನಡೆದಿದ್ದ ಆರ್‌ಎಸ್‌ಎಸ್ ಪಥಸಂಚಲನ ಕಾರ್ಯಕ್ರಮ ಮುಗಿಸಿ ಹಿಂದಿರುವಾಗ ಶಿವಾಜಿನಗರದಲ್ಲಿ ದುಷ್ಕರ್ಮಿಗಳು ರುದ್ರೇಶ್ ಅವರನ್ನು ಹತ್ಯೆ ಮಾಡಿದ್ದರು. ಕಮರ್ಷಿಯಲ್ ಸ್ಟ್ರೀಟ್ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಿದ್ದರು. ಆ ಬಳಿಕ ತನಿಖೆಯನ್ನು ಕೇಂದ್ರ ಸರ್ಕಾರ ಎನ್ಐಎಗೆ ವಹಿಸಿತ್ತು. ಈ ಆದೇಶ ಪ್ರಶ್ನಿಸಿ ಆರೋಪಿಗಳು ಸಲ್ಲಿಸಿದ್ದ ಅರ್ಜಿಗಳನ್ನು ವಿಚಾರಣಾ ನ್ಯಾಯಾಲಯ ರದ್ದುಪಡಿಸಿತ್ತು.
ನಂತರ ರಾಷ್ಟ್ರೀಯ ತನಿಖಾ ದಳದ ಕಾಯ್ದೆ-2008ರ ಸೆಕ್ಷನ್ 20ರ ಅಡಿ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಮೇಲ್ಮನವಿದಾರರು ಮಧ್ಯಂತರ ಅರ್ಜಿ ಸಲ್ಲಿಸಿದ್ದರು. ಪ್ರಕರಣವನ್ನು ಎನ್‌ಐಎ ವಿಶೇಷ ನ್ಯಾಯಾಲಯದಿಂದ ಸಾಮಾನ್ಯ ಸೆಷನ್ಸ್ ಕೋರ್ಟ್‌ಗೆ ವರ್ಗಾವಣೆ ಮಾಡಬೇಕು. ಹಾಗೆಯೇ, ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಆರೋಪಗಳನ್ನು ಕೈ ಬಿಡಬೇಕು ಎಂದು ಕೋರಿದ್ದರು. ಆ ಅರ್ಜಿಗಳನ್ನು ಎನ್‌ಐಎ ವಿಶೇಷ ನ್ಯಾಯಾಲಯ ವಜಾಗೊಳಿಸಿದ್ದರಿಂದ ಹೈಕೋರ್ಟ್ಗೆ ಕ್ರಿಮಿನಲ್ ಮೇಲ್ಮನವಿ ಸಲ್ಲಿಸಿದ್ದರು.
ಇದನ್ನೂ ಓದಿ: ಶ್ರೀನಗರದಲ್ಲಿ ಬೆಳ್ಳಂಬೆಳಗ್ಗೆ ಸೇನೆ ಭರ್ಜರಿ ಕಾರ್ಯಾಚರಣೆ: ಇಬ್ಬರು ಉಗ್ರರ ಹತ್ಯೆ