ಬೆಂಗಳೂರು: ವಿಧಾನಸಭೆ ಉಪ ಸಭಾಪತಿ ಆನಂದ್ ಮಾಮನಿ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ ವ್ಯಕ್ತಪಡಿಸಿದ್ದು, ಕರ್ನಾಟಕ ವಿಧಾನಸಭೆಯ ಉಪಸಭಾಪತಿ ಆನಂದ ಮಾಮನಿ ಅವರ ನಿಧನದಿಂದ ನೋವಾಗಿದೆ. ಅವರು ಸಾಮಾಜಿಕ ಸಬಲೀಕರಣಕ್ಕಾಗಿ ವ್ಯಾಪಕವಾಗಿ ಶ್ರಮಿಸಿದ ಅಸಾಧಾರಣ ನಾಯಕರಾಗಿದ್ದರು. ಕರ್ನಾಟಕದಾದ್ಯಂತ ಬಿಜೆಪಿಯನ್ನು ಬಲಪಡಿಸುವ ಕೆಲಸ ಮಾಡಿದ್ದರು. ಅವರ ಕುಟುಂಬ ಮತ್ತು ಬೆಂಬಲಿಗರಿಗೆ ಸಂತಾಪ. ಓಂ ಶಾಂತಿ ಎಂದು ಟ್ವೀಟ್ ಮಾಡಿದ್ದಾರೆ.
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು, ಮಾಜಿ ಸಚಿವರು, ಶಾಸಕರು ಹಾಗೂ ಮುಖಂಡರು ಮುಂತಾದವರು ಆನಂದ್ ಮಾಮನಿ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಬೆಳಗಾವಿ ಜಿಲ್ಲೆ ಸವದತ್ತಿ ಮತ ಕ್ಷೇತ್ರದ ಶಾಸಕ, ವಿಧಾನಸಭೆ ಉಪಸಭಾಪತಿ ಆನಂದ ಮಾಮನಿ ಅವರ ನಿಧನದ ಸುದ್ದಿ ತಿಳಿದು ದುಃಖವಾಯಿತು. ಮೃತರ ಆಶ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ದೇವರು ಕುಟುಂಬವರ್ಗ ಮತ್ತು ಅಭಿಮಾನಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಟ್ವೀಟ್ ಮಾಡಿದ್ದು, ರಾಜ್ಯ ವಿಧಾನಸಭೆಯ ಉಪ ಸಭಾಧ್ಯಕ್ಷರು ಹಾಗೂ ಸವದತ್ತಿ ಕ್ಷೇತ್ರದ ಶಾಸಕರಾಗಿದ್ದ ಆನಂದ ಚಂದ್ರಶೇಖರ ಮಾಮನಿ ಅವರು ನಿಧನರಾದ ವಿಷಯ ತಿಳಿದು ಮನಸ್ಸಿಗೆ ಅಪಾರ ನೋವಾಯಿತು. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಮೃತರ ಕುಟುಂಬಕ್ಕೆ ಸಾಂತ್ವನಗಳು ಎಂದು ತಿಳಿಸಿದ್ದಾರೆ.
ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿದ್ದು, ಸವದತ್ತಿ ಕ್ಷೇತ್ರದ ಶಾಸಕ ಹಾಗೂ ವಿಧಾನಸಭೆಯ ಉಪಸಭಾಪತಿ ಆನಂದ ಮಾಮನಿ ವಿಧಿವಶರಾದ ಸುದ್ದಿ ನೋವು ತಂದಿದೆ. ಸವದತ್ತಿ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಆನಂದ ಮಾಮನಿ ರಾಜಕೀಯ ವಲಯದಲ್ಲಿ ಅಜಾತಶತ್ರು ಎಂದೇ ಗುರುತಿಸಿಕೊಂಡಿದ್ದರು. ಆನಂದ ಮಾಮನಿ ಕುಟುಂಬದ ಶೋಕದಲ್ಲಿ ನಾನೂ ಭಾಗಿ. ಅವರ ಆತ್ಮಕ್ಕೆ ಸದ್ಗತಿ ಬೇಡುತ್ತೇನೆ ಎಂದಿದ್ದಾರೆ.
ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂ ಬಿ ಪಾಟೀಲ್ ಟ್ವೀಟ್ ಮಾಡಿದ್ದು, ವಿಧಾನಸಭೆಯ ಮಾನ್ಯ ಉಪ ಸಭಾಧ್ಯಕ್ಷರಾದ ಆನಂದ ಚಂದ್ರಶೇಖರ ಮಾಮನಿ ಅವರ ನಿಧನದ ಸುದ್ದಿ ಆಘಾತ ತಂದಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬ ಹಾಗೂ ಅಭಿಮಾನಿಗಳ ವರ್ಗಕ್ಕೆ ದುಃಖ ಭರಿಸುವ ಶಕ್ತಿಯನ್ನು ಪರಮಾತ್ಮ ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ನಲ್ಲಿ ಬರೆದುಕೊಂಡಿದ್ದಾರೆ.
ಮಾಜಿ ಸಚಿವ ಎಸ್ ಆರ್ ಪಾಟೀಲ್ ಟ್ವೀಟ್ ಮಾಡಿದ್ದು, ಸವದತ್ತಿ ಕ್ಷೇತ್ರದ ಶಾಸಕರು, ಕರ್ನಾಟಕ ರಾಜ್ಯ ವಿಧಾನಸಭೆಯ ಉಪ ಸಭಾಧ್ಯಕ್ಷರು, ಆತ್ಮೀಯರಾದ ಆನಂದ ಚಂದ್ರಶೇಖರ ಮಾಮನಿ ಅವರ ನಿಧನ ಸುದ್ಧಿ ದುಃಖವನ್ನು ಉಂಟು ಮಾಡಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬ ವರ್ಗದವರಿಗೆ, ಅಭಿಮಾನಿಗಳಿಗೆ ನೋವನ್ನು ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ಇದನ್ನೂ ಓದಿ: ಆನಂದ ಮಾಮನಿ ನಿಧನ: ಕಿತ್ತೂರು ಉತ್ಸವ ಮುಂದೂಡಿಕೆ, ಸವದತ್ತಿಯಲ್ಲಿ ನೀರವ ಮೌನ