ಬೆಂಗಳೂರು: ಕೊರೊನಾ ನಿಯಂತ್ರಣಕ್ಕೆ ಹಗಲಿರುಳೆನ್ನದೆ ಕೆಲಸ ನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳು ತಮ್ಮ ಆರೋಗ್ಯ ಸುರಕ್ಷತೆಯ ದೃಷ್ಟಿಯಿಂದ ಪಿಪಿಇ ಕಿಟ್ಗಳನ್ನು ಬಳಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಆದೇಶಿಸಿದ್ದಾರೆ.
ಕೊರೊನಾ ಮಾಹಾಮಾರಿ ನಿಯಂತ್ರಿಸುವಲ್ಲಿ ಪೊಲೀಸರ ಪಾತ್ರ ಮಹತ್ವದ್ದು. ಬೇರೆ ಬೇರೆ ರಾಜ್ಯ, ಜಿಲ್ಲೆ, ಗ್ರಾಮಗಳಿಂದ ಬರುವ ಜನರನ್ನು ಕ್ವಾರಂಟೈನ್ ಮಾಡಿ ಇವರಿಂದ ಬೇರೆಯವರಿಗೆ ಸೋಂಕು ಹರಡಂತೆ ನೋಡಿಕೊಳ್ಳುತ್ತಿದ್ದಾರೆ.
ಪೊಲೀಸ್ ಇಲಾಖೆ ಸಿಬ್ಬಂದಿ ಕರ್ತವ್ಯದಲ್ಲಿದ್ದ ವೇಳೆ ಜನರ ಸಂಪರ್ಕದಲ್ಲಿರುವುದರಿಂದ ಕೊರೊನಾ ಸೋಂಕು ತಗುಲುವ ಸಾಧ್ಯತೆ ಹೆಚ್ಚಿದೆ. ಒಬ್ಬರಿಗೆ ಸೋಂಕು ತಗುಲಿದರೆ ಠಾಣೆಯಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿ ಹಾಗೂ ಅವರನ್ನು ಸಂಪರ್ಕಸಿರುವ ಎಲ್ಲಾ ಜನರಿಗೂ ವ್ಯಾಪಿಸುತ್ತದೆ. ಹೀಗಾಗಿ ಅಧಿಕಾರಿಗಳು ಮತ್ತು ಸಿಬ್ಬಂದಿ ಕೋವಿಡ್-19 ಪರೀಕ್ಷೆಗೆ ಒಳಪಡಬೇಕು ಎಂದು ಸೂಚಿಸಿದ್ದಾರೆ.
ಅಲ್ಲದೆ, ಯಾವುದೇ ಸಿಬ್ಬಂದಿ ಕೊರೊನಾ ಸೋಂಕಿನಿಂದ ದೃಢಪಟ್ಟರೆ ಅವರಿಗೆ ಸೂಕ್ತ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು. ಹಿರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಆತ್ಮಸ್ಥೆರ್ಯ ತುಂಬಬೇಕು. ಇದರ ಜವಾಬ್ದಾರಿಯನ್ನು ಎಲ್ಲಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ನಗರ ಪೊಲೀಸ್ ಆಯುಕ್ತರು ಹಾಗೂ ವಲಯ ಐಜಿಪಿಗಳು ನೋಡಿಕೊಳ್ಳಬೇಕೆಂದು ಡಿಜಿಪಿ ಹೇಳಿದ್ದಾರೆ.