ಬೆಂಗಳೂರು: ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವ ಮಾಜಿ ಸಿಎಂ ಸಿದ್ದರಾಮಯ್ಯ ಆರೋಗ್ಯ ವಿಚಾರಿಸಲು ರಾಜಕೀಯ ನಾಯಕರ ದಂಡೇ ಹರಿದು ಬರುತ್ತಿದ್ದು, ಇಂದೂ ಕೂಡ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ, ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಮೂರು ದಿನಗಳಿಂದ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ಸಿದ್ದರಾಮಯ್ಯರನ್ನು ಪಕ್ಷಾತೀತವಾಗಿ ವಿವಿಧ ನಾಯಕರು ಹಾಗೂ ಮಠಾಧೀಶರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.
ಕಾವೇರಿ ನಿವಾಸದಲ್ಲಿ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಯೋಗಕ್ಷೇಮ ವಿಚಾರಿಸಿದರು. ಲಿಂಬಾವಳಿ ಭೇಟಿ ಬೆನ್ನಲ್ಲೇ ಮಸ್ಕಿ ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ್ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಬೆಳಗ್ಗೆಯಿಂದಲೇ ರಾಜಕೀಯ ನಾಯಕರು ಸಿದ್ದರಾಮಯ್ಯ ನಿವಾಸಕ್ಕೆ ಆಗಮಿಸುತ್ತಿದ್ದಾರೆ. ಇವರ ಜೊತೆ ಕಾಂಗ್ರೆಸ್ ಕಾರ್ಯಕರ್ತರು, ಮೈಸೂರು ಹಾಗೂ ಬಾದಾಮಿ ಭಾಗದ ಕಾಂಗ್ರೆಸ್ ಮುಖಂಡರು ಭೇಟಿ ನೀಡುತ್ತಿದ್ದಾರೆ.