ಬೆಂಗಳೂರು : ಈ ಬಾರಿ ವಿಧಾನಪರಿಷತ್ ಚುನಾವಣೆಯು ಮೂರೂ ಪಕ್ಷಗಳಿಗೆ ಪ್ರತಿಷ್ಠೆಯಾಗಿದೆ. ಮುಖ್ಯಮಂತ್ರಿ, ಇಡೀ ಮಂತ್ರಿಮಂಡಲ, ಪ್ರತಿಪಕ್ಷದ ನಾಯಕರು ಸೇರಿದಂತೆ ಮೂರು ಪಕ್ಷಗಳ ಘಟಾನುಘಟಿ ನಾಯಕರೆಲ್ಲ ಚುನಾವಣಾ ಪ್ರಚಾರದ ಅಖಾಡಕ್ಕೆ ಇಳಿದಿದ್ದಾರೆ.
ಡಿಸೆಂಬರ್ 10ರಂದು ನಡೆಯಲಿರುವ ಮೇಲ್ಮನೆ ಚುನಾವಣೆಯ ಕಣ ರಂಗೇರಿದ್ದು, ಈಗಾಗಲೇ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮತ್ತು ಸಂಪುಟದ ಸಚಿವರು ತಮಗೆ ವಹಿಸಿರುವ ಜಿಲ್ಲೆಗಳಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಪ್ರಚಾರದ ಅಖಾಡಕ್ಕೆ ಇಳಿದಿದ್ದಾರೆ.
ಪಕ್ಷದ ಪ್ರಧಾನ ಕಾರ್ಯದರ್ಶಿಗಳಿಗೆ ಈಗಾಗಲೇ ಜಿಲ್ಲೆಗಳ ಜವಾಬ್ದಾರಿಗಳನ್ನು ಒದಗಿಸಲಾಗಿದೆ. ಅವರು ಪಕ್ಷದ ಸೂಚನೆಯಂತೆ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಬಹುತೇಕ ಜಿಲ್ಲೆಗಳ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರುವ ಜವಾಬ್ದಾರಿಯನ್ನು ಜಿಲ್ಲಾ ಉಸ್ತುವಾರಿ ಸಚಿವರಿಗೆ ವಹಿಸಲಾಗಿದೆ ಎಂಬ ಮಾಹಿತಿ ಇದೆ. ಹೀಗಾಗಿ ಸಚಿವರು ತಮಗೆ ವಹಿಸಿರುವ ಜಿಲ್ಲೆಗಳಲ್ಲಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ.
ಕಾಂಗ್ರೆಸ್ ತಂತ್ರ:
ಕಾಂಗ್ರೆಸ್ ನಾಯಕರೂ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಕಾರ್ಯತಂತ್ರ ರೂಪಿಸಿದ್ದು, ಕಾಂಗ್ರೆಸ್ ಈಗಾಗಲೇ ಜಿಲ್ಲಾವಾರು ವೀಕ್ಷಕರ ನೇಮಿಸಿ ಸೋಮವಾರದಿಂದಲೇ ಕ್ಷೇತ್ರಗಳಿಗೆ ಹೋಗಲು ಸೂಚಿಸಿದೆ. ಕೆ.ಹೆಚ್. ಮುನಿಯಪ್ಪ, ಬಿ.ಕೆ. ಹರಿಪ್ರಸಾದ್, ಕೆ.ಜೆ. ಜಾರ್ಜ್ ಸಹಿತ ಹಿರಿಯ ನಾಯಕರು ಜಿಲ್ಲೆಗಳಿಗೆ ತೆರಳಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬೆಳಗಾವಿ, ಧಾರವಾಡ, ವಿಜಯಪುರ ಪ್ರವಾಸ ಕೈಗೊಂಡು ಪ್ರಚಾರ ನಡೆಸಲಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಎರಡು ದಿನಗಳಿಂದ ಮೈಸೂರಿನಲ್ಲಿದ್ದು, ಪಕ್ಷದ ಅಭ್ಯರ್ಥಿ ಪರ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ.
ಜೆಡಿಎಸ್ ಸ್ಪರ್ಧೆ:
ಜೆಡಿಎಸ್ ಸಹ ಪ್ರಚಾರದಲ್ಲಿ ಹಿಂದೆ ಬಿದ್ದಿಲ್ಲ. ಮಾಜಿ ಸಿಎಂ ಕುಮಾರಸ್ವಾಮಿ ತಮ್ಮ ಪಕ್ಷ ಅಭ್ಯರ್ಥಿಗಳನ್ನು ಕಣಕ್ಕಿಳಿಸಿರುವ ಕ್ಷೇತ್ರಗಳಲ್ಲಿ ಈಗಾಗಲೇ ಪ್ರವಾಸ ಆರಂಭಿಸಿದ್ದಾರೆ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಸಭೆ ನಡೆಸಿ ಪ್ರಚಾರ ಮುಗಿಸಿದ್ದಾರೆ.
ಮಂಡ್ಯ, ತುಮಕೂರು ಪ್ರವಾಸ ಮಾಡಲಿದ್ದಾರೆ. ಸಂಸತ್ ಅಧಿವೇಶನ ಇರುವುದರಿಂದ ದೆಹಲಿಗೆ ತೆರಳಿರುವ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು, ಡಿಸೆಂಬರ್ 3 ರಿಂದ ಚುನಾವಣಾ ಪ್ರಚಾರಕ್ಕೆ ತೆರಳಲಿದ್ದಾರೆ. ಡಿಸೆಂಬರ್ 3 ಮತ್ತು 4ರಂದು ತುಮಕೂರಿನಲ್ಲಿ ಪ್ರಚಾರ ಮಾಡಲಿದ್ದು, ಡಿ. 5 ಮತ್ತು 6ರಂದು ಮಂಡ್ಯದಲ್ಲಿ ಪ್ರಚಾರ ಮಾಡಲಿದ್ದಾರೆ.
20 ಕ್ಷೇತ್ರಗಳ 25 ಸ್ಥಾನಗಳಲ್ಲಿ ಆಡಳಿತ ಪಕ್ಷ ಬಿಜೆಪಿ ಮತ್ತು ವಿಪಕ್ಷ ಕಾಂಗ್ರೆಸ್ ನಡುವೆ ಬಹುತೇಕ ನೇರ ಪೈಪೋಟಿ ನಡೆಯಲಿದ್ದು, ಜೆಡಿಎಸ್ ಬಲ ಇರುವ ಹಳೇ ಮೈಸೂರು ಭಾಗದ ಕೆಲವು ಕ್ಷೇತ್ರಗಳಲ್ಲಿ ತ್ರಿಕೋನ ಸ್ಪರ್ಧೆ ಉಂಟಾಗಲಿದೆ. ಜೆಡಿಎಸ್ ಸ್ಪರ್ಧೆ ಮಾಡದ ಕಡೆ ಬಿಜೆಪಿ ಬೆಂಬಲ ಕೋರಿರುವುದು ಕುತೂಹಲ ಮೂಡಿಸಿದೆ.
ಪೈಪೋಟಿ ಎಲ್ಲೆಲ್ಲಿ? :
ಮೈಸೂರು, ದಕ್ಷಿಣ ಕನ್ನಡ, ವಿಜಯಪುರ ದ್ವಿಸದಸ್ಯ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ತಲಾ ಒಬ್ಬ ಅಭ್ಯರ್ಥಿಯನ್ನು ಕಣಕ್ಕಿಳಿಸಿರುವುದರಿಂದ ಎರಡೂ ಪಕ್ಷಗಳಿಗೆ ಅಂತಹ ಸಮಸ್ಯೆ ಇಲ್ಲ. ಉಳಿದಂತೆ ಕೋಲಾರ, ತುಮಕೂರು, ಬೆಂಗಳೂರು ಗ್ರಾಮಾಂತರ, ಹಾಸನ, ಮಂಡ್ಯ ಕ್ಷೇತ್ರಗಳಲ್ಲಿ ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ನಡುವೆ ತ್ರಿಕೋನ ಸ್ಪರ್ಧೆ ಉಂಟಾಗಿದೆ. ಬೆಳಗಾವಿ ಮತ್ತು ಧಾರವಾಡದಲ್ಲಿ ಕಾಂಗ್ರೆಸ್, ಬಿಜೆಪಿ ಮತ್ತು ಪಕ್ಷೇತರರ ನಡುವೆ ಪೈಪೋಟಿ ಏರ್ಪಟ್ಟಿದೆ.
ಶಿವಮೊಗ್ಗ, ಬೀದರ್, ಬಳ್ಳಾರಿ, ಬೆಂಗಳೂರು ನಗರ, ಚಿಕ್ಕಮಗಳೂರು, ಚಿತ್ರದುರ್ಗ, ರಾಯಚೂರು, ಉತ್ತರ ಕನ್ನಡ, ಕಲಬುರಗಿ, ಕೊಡಗು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಪೈಪೋಟಿ ಇದೆ.
ಜೆಡಿಎಸ್ ಸ್ಪರ್ಧಿಸದಿರುವ ಹಾಗೂ ಆ ಪಕ್ಷದ ಬೆಂಬಲಿಗ ಸದಸ್ಯರಿರುವ ಬೆಳಗಾವಿ, ಧಾರವಾಡ, ವಿಜಯಪುರ, ರಾಯಚೂರು, ಕಲಬುರಗಿ, ಶಿವಮೊಗ್ಗ, ಉತ್ತರ ಕನ್ನಡ ಕ್ಷೇತ್ರಗಳಲ್ಲಿ ಯಾವ ಪಕ್ಷಕ್ಕೆ ಬೆಂಬಲ ಸಿಗಲಿದೆ ಎಂಬುದು ಕಾದು ನೋಡಬೇಕು.