ಬೆಂಗಳೂರು: ಕೊರೊನಾ ವೈರಸ್ ಹರಡುವುದನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿರುವ ಹಿನ್ನೆಲೆಯಲ್ಲಿ 205 ಸಹಾಯಕ ಪಬ್ಲಿಕ್ ಪ್ರಾಸಿಕ್ಯೂಟರ್ಗಳ ನೇಮಕ ಪ್ರಕ್ರಿಯೆಗೆ ತೊಂದರೆ ಉಂಟಾಗಿದೆ.
ಪ್ರಾಸಿಕ್ಯೂಷನ್ ಪರ ವಾದಿಸಲು ಪಬ್ಲಿಕ್ ಪ್ರಾಸಿಕ್ಯೂಟರ್ಗಳ ಕೊರತೆ ವಿಚಾರವಾಗಿ ವಿವಿಧ ಜಿಲ್ಲಾ ಪ್ರಧಾನ ನ್ಯಾಯಾಧೀಶರು ಒದಗಿಸಿರುವ ಮಾಹಿತಿ ಆಧರಿಸಿ ಹೈಕೋರ್ಟ್ ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ ಪ್ರಮಾಣಪತ್ರ ಸಲ್ಲಿಸಿದ ಸರ್ಕಾರದ ಪರ ವಕೀಲರು, ಸಹಾಯಕ ಪಬ್ಲಿಕ್ ಪ್ರಾಸಿಕ್ಯೂಟರ್ ಮತ್ತು ಸಹಾಯಕ ಸರ್ಕಾರಿ ಪ್ಲೀಡರ್‌ಗಳ 205 ಹುದ್ದೆಗಳನ್ನು ನೇಮಕ ಮಾಡುವ ಸಂಬಂಧ ಮಾ. 28ರಂದು ಬೆಂಗಳೂರು, ಮೈಸೂರು, ಬೆಳಗಾವಿ ಹಾಗೂ ಕಲಬುರಗಿಯಲ್ಲಿ ಪೂರ್ವಭಾವಿ ಪರೀಕ್ಷೆ ನಿಗದಿ ಮಾಡಲಾಗಿತ್ತು. ಆದರೆ, ಕೊರೊನಾ ವೈರಸ್ ಸೋಂಕು ಹರಡುವುದನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿರುವ ಹಿನ್ನೆಲೆಯಲ್ಲಿ ಸದ್ಯದ ಪರಿಸ್ಥಿತಿಯಲ್ಲಿ ಪರೀಕ್ಷೆಗಳನ್ನು ನಡೆಸಲು ಅನುಕೂಲಕರ ವಾತಾವರಣ ಇಲ್ಲ ಎಂದು ಜಿಲ್ಲಾಧಿಕಾರಿಗಳು ವರದಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪರೀಕ್ಷೆಗಳನ್ನು ನಡೆಸುವ ಸ್ಥಿತಿಯಲ್ಲಿ ಸರ್ಕಾರ ಇಲ್ಲ. ಆದ್ದರಿಂದ ಪರೀಕ್ಷೆಗಳಿಗೆ ಹೊಸ ದಿನಾಂಕ ನಿಗದಿಪಡಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಮನವಿ ಮಾಡಲಾಗಿದೆ ಎಂಬ ಪ್ರಮಾಣಪತ್ರದ ಸಾರಾಂಶವನ್ನು ಪೀಠಕ್ಕೆ ವಿವರಿಸಿದರು. ಪ್ರಮಾಣ ಪತ್ರ ದಾಖಲಿಸಿಕೊಂಡ ಪೀಠ ವಿಚಾರಣೆ ಮುಂದೂಡಿತು.