ಬೆಂಗಳೂರು: ಬಕ್ರೀದ್ ಹಬ್ಬದ ಸಮಯದಲ್ಲಿ ಜಾನುವಾರು ಬಲಿ ನೀಡುವ ಬದಲಾಗಿ ಅವುಗಳನ್ನು ನಾವೆಲ್ಲರೂ ಸಂರಕ್ಷಣೆ ಮಾಡೋಣ ಎಂದು ಪಶುಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್ ಮನವಿ ಮಾಡಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ರಾಜ್ಯದಲ್ಲಿ ಈಗಾಗಲೇ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದೆ. ರಾಜ್ಯದಿಂದ ಅಥವಾ ಹೊರ ರಾಜ್ಯದಿಂದ ನಮ್ಮ ರಾಜ್ಯಕ್ಕೆ ಯಾವುದೇ ಮಾರ್ಗದಿಂದ ಅಕ್ರಮ ಗೋವು ಮತ್ತು ಗೋಮಾಂಸ ಸಾಗಿಸದಂತೆ ಪಶುಸಂಗೋಪನೆ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು ಎಚ್ಚರವಹಿಸಬೇಕು ಎಂದು ನಿರ್ದೇಶನ ನೀಡಿದ್ದಾರೆ.
ಗೋಹತ್ಯೆ ಮಾಡುವುದು ಕಂಡುಬಂದರೆ ಕೂಡಲೇ ಸ್ಥಳೀಯ ಪೊಲೀಸ್ ಠಾಣೆಗಳಲ್ಲಿ ಎಫ್‌ಐಆರ್ ದಾಖಲಿಸಿ, ತಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಬಕ್ರೀದ್ ಸಂದರ್ಭದಲ್ಲಿ ಗೋಹತ್ಯೆ ತಡೆಗಟ್ಟಲು ಬಿಬಿಎಂಪಿ ವಲಯ ಹಾಗೂ ನಗರ ಜಿಲ್ಲೆಯ ತಾಲ್ಲೂಕುಗಳಲ್ಲಿ ಟಾಸ್ಕ್ ಪೋರ್ಸ್ ನೇಮಕ ಮಾಡಲಾಗಿದೆ ಎಂದು ಸಚಿವರು ಹೇಳಿದ್ದಾರೆ.
ಇದನ್ನೂ ಓದಿ: ರಮೇಶ್ ಕುಮಾರ್ ಒಬ್ಬ ಶಕುನಿ, ಏಕಪಾತ್ರಾಭಿನಯ ಮಾಡುತ್ತಿದ್ದಾರೆ: ಕೆ.ಹೆಚ್.ಮುನಿಯಪ್ಪ