ಬೆಂಗಳೂರು: ಬೆಳಗಾವಿ ಲೋಕಸಭಾ ಕ್ಷೇತ್ರ ಮತ್ತು ಮಸ್ಕಿ, ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ನಾಳೆ ಮತದಾನ ನಡೆಯಲಿದ್ದು, ಬೆಳಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆವರೆಗೆ ಮತದಾನ ನಡೆಯಲಿದೆ.
ಸುರೇಶ್ ಅಂಗಡಿ ನಿಧನದಿಂದ ತೆರವಾದ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ನಡೆಯುತ್ತಿರುವ ಉಪ ಚುನಾವಣೆಯಲ್ಲಿ 10 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 1,821,614 ಮತದಾರರು ಹಕ್ಕು ಚಲಾಯಿಸಲಿದ್ದು,ಕ್ಷೇತ್ರದಲ್ಲಿ ಮತದಾನಕ್ಕೆ 2,566 ಮತಗಟ್ಟೆಗಳನ್ನು ನಿರ್ಮಿಸಲಾಗಿದೆ ಅದರಲ್ಲಿ 16 ಸಖಿ ಬೂತ್ಗಳಾಗಿವೆ.
ಶಾಸಕ ನಾರಾಯಣರಾವ್ ನಿಧನದಿಂದ ತೆರವಾಗಿರುವ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುತ್ತಿರುವ ಉಪ ಚುನಾವಣೆಯಲ್ಲಿ 12 ಅಭ್ಯರ್ಥಿಗಳು ಕಣದಲ್ಲಿದ್ದಾರೆ, 239,981 ಮತದಾರರು ಹಕ್ಕು ಚಲಾಯಿಸಲಿದ್ದು, ಕ್ಷೇತ್ರದಲ್ಲಿ ಮತದಾನಕ್ಕೆ 326 ಮತಗಟ್ಟೆಗಳನ್ನು ನಿರ್ಮಿಸಿದ್ದಾರೆ. ಇದರಲ್ಲಿ ಎರಡು ಸಖಿ ಬೂತ್ ಗಳು ಇರಲಿವೆ.
ಶಾಸಕ ಸ್ಥಾನಕ್ಕೆ ಪ್ರತಾಪ್ ಗೌಡ ಪಾಟೀಲ್ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದರಿಂದ ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯುತ್ತಿದ್ದು, 8 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 206,443 ಮತದಾರರು ಹಕ್ಕು ಚಲಾಯಿಸಲಿದ್ದು. ಕ್ಷೇತ್ರದಲ್ಲಿ ಮತದಾನಕ್ಕೆ 305 ಮತಗಟ್ಟೆಗಳನ್ನು ನಿರ್ಮಿಸಲಾಗಿದೆ ಇದರಲ್ಲಿ ಎರಡು ಸಖಿ ಬೂತ್ಗಳಿವೆ.
ಬೇಸಿಗೆಯಲ್ಲಿ ತಾಪಮಾನ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಬೆಳಗ್ಗೆ 8 ರ ಬದಲು 7 ಗಂಟೆಗೆ ಹಾಗೂ ಸಂಜೆ 5 ಗಂಟೆ ಬದಲು 7 ಗಂಟೆವರೆಗೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಮತದಾನಕ್ಕೆ ಎಲ್ಲ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ.
ಮೂರೂ ಕ್ಷೇತ್ರದಲ್ಲಿ ಆಡಳಿತಾರೂಢ ಬಿಜೆಪಿ ಹಾಗೂ ಪ್ರತಿಪಕ್ಷ ಕಾಂಗ್ರೆಸ್ ಭರಾಟೆಯ ಪ್ರಚಾರ ನಡೆಸಿದ್ದು, ಬಸವಕಲ್ಯಾಣದಲ್ಲಿ ಮಾತ್ರ ಸ್ಪರ್ಧೆ ಮಾಡಿರುವ ಪ್ರಾದೇಶಿಕ ಪಕ್ಷ ಜೆಡಿಎಸ್ ಪ್ರತಿಸ್ಪರ್ಧೆ ಒಡ್ಡಿದೆ. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೇರಿದಂತೆ ಸಂಪುಟ ಸಹೋದ್ಯೋಗಿಗಳು, ಪಕ್ಷದ ನಾಯಕರು ಪ್ರಚಾರ ನಡೆಸಿದ್ದು, ಕಾಂಗ್ರೆಸ್ ಪರ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸೇರಿದಂತೆ ಪ್ರಮುಖ ನಾಯಕರು ಪ್ರಚಾರ ನಡೆಸಿದ್ದಾರೆ.
ಒಟ್ಟು ಮೂರೂ ಕ್ಷೇತ್ರಗಳಿಂದ 30 ಅಭ್ಯರ್ಥಿಗಳು ಕಣದಲ್ಲಿದ್ದು, ಎಲ್ಲ ಅಭ್ಯರ್ಥಿಗಳ ಭವಿಷ್ಯ ನಾಳೆ ಇವಿಎಂ ಯಂತ್ರದಲ್ಲಿ ಭದ್ರವಾಗಲಿದೆ. ನಾಳೆ ಚುನಾವಣೆ ನಡೆದರೂ ಮೇ 2 ರಂದು ಮತಗಳ ಎಣಿಕೆ ನಡೆಯಲಿದ್ದು, ಫಲಿತಾಂಶಕ್ಕಾಗಿ ಅಭ್ಯರ್ಥಿಗಳು 15 ದಿನ ಕಾಯಬೇಕಿದೆ.