ಬೆಂಗಳೂರು: ಇಂದು ನಡೆದ ಎಸ್ಎಸ್ಎಲ್ಸಿ ಪ್ರಥಮ ಭಾಷಾ ಪರೀಕ್ಷೆಗಳು ಯಾವುದೇ ತೊಂದರೆ ಇಲ್ಲದೆ ಅಚ್ಚುಕಟ್ಟಾಗಿ ನಡೆದಿವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ಇಂದಿನ ಪರೀಕ್ಷೆಗಳ ಕುರಿತು ಮಾಹಿತಿ ನೀಡಿರುವ ಸಚಿವರು, ಆರನೇ ದಿನವಾದ ಇಂದು ನಡೆದ ಕನ್ನಡ ಸೇರಿದಂತೆ ಪ್ರಥಮ ಭಾಷಾ ಪರೀಕ್ಷೆಗಳಿಗೆ 7,78,618 ವಿದ್ಯಾರ್ಥಿಗಳ ಪೈಕಿ 7,64,006 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಒಟ್ಟಾರೆ ಶೇ. 98.12 ರಷ್ಟು ಮಂದಿ ಹಾಜರಾಗಿದ್ದು, 14,612 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಕಳೆದ ವರ್ಷ ಇದೇ ಪರೀಕ್ಷೆಗೆ 7,75,988 ವಿದ್ಯಾರ್ಥಿಗಳ ಪೈಕಿ 7,67,756 ವಿದ್ಯಾರ್ಥಿಗಳು ಹಾಜರಾಗಿದ್ದು, 8232 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು. ಶೇ. 98.93 ಹಾಜರಾತಿ ಇತ್ತು ಎಂದು ತಿಳಿಸಿದ್ದಾರೆ.
ಅಲ್ಲದೆ ಮೊದಲ ಬಾರಿಗೆ 7,44,843 ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಹಾಗೂ 20,957 ಖಾಸಗಿ ಶಾಲೆಯ ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದಾರೆ. ಇನ್ನು ಕಂಟೇನ್ಮೆಂಟ್ ಪ್ರದೇಶಗಳ 3,890 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಕೋವಿಡೇತರ ಅನಾರೋಗ್ಯ ಕಾರಣಗಳಿಂದ ವಿಶೇಷ ಕೊಠಡಿಗಳಲ್ಲಿ 670 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಪರೀಕ್ಷಾ ಅಕ್ರಮಗಳಲ್ಲಿ ಭಾಗಿಯಾದ 04 ಪ್ರಕರಣಗಳು ನಡೆದಿದ್ದು, ಅವರನ್ನು ಪರೀಕ್ಷೆಯಿಂದ ಡಿಬಾರ್ ಮಾಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಇದಲ್ಲದೆ ಸರ್ಕಾರಿ/ಖಾಸಗಿ ವಸತಿ ನಿಲಯಗಳಲ್ಲಿ ಇದ್ದ 1,448 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ನೆರೆ ರಾಜ್ಯಗಳ 639 ವಿದ್ಯಾರ್ಥಿಗಳ ಪೈಕಿ 45 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. 12,644 ವಲಸೆ ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಾಯಿಸಿದ್ದು, 12,540 ವಿದ್ಯಾರ್ಥಿಗಳು ಹಾಜರಾಗಿದ್ದು, 104 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.
ಇನ್ನು ಹೋಂ ಕ್ವಾರಂಟೈನ್ಲ್ಲಿರುವ ಹಾಗೂ ಕೋವಿಡ್ ಪಾಸಿಟಿವ್ ಎಂದು ಗುರುತಿಸಲಾದ ವಿದ್ಯಾರ್ಥಿಗಳಿಗೆ, ಈಗಿನ ಪರೀಕ್ಷೆಯನ್ನು ಬರೆಯುವುದರಿಂದ ವಿನಾಯ್ತಿ ನೀಡಲಾಗಿದೆ. ಈ ಎಲ್ಲರಿಗೂ ಸಕಾರಣದ ಆಧಾರದ ಮೇಲೆ ಮುಂದಿನ ಪೂರಕ ಪರೀಕ್ಷೆಯಲ್ಲಿ ಅವಕಾಶ ನೀಡುವ ವ್ಯವಸ್ಥೆ ಮಾಡಲಾಗುವುದು ಎಂದು ಸಚಿವರು
ತಿಳಿಸಿದ್ದಾರೆ.
ಅಲ್ಲದೆ ಇಂದು ಸಚಿವರು ತುಮಕೂರು, ಮಧುಗಿರಿ, ಬೆಂಗಳೂರು ಗ್ರಾಮಾಂತರ ಶೈಕ್ಷಣಿಕ ವಿವಿಧ ತಾಲೂಕುಗಳ 13 ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದು, ಎಲ್ಲಾ ಪರೀಕ್ಷ ಕೇಂದ್ರಗಳ ವ್ಯವಸ್ಥೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.