ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಗರದ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪಾಕ್ ಪರ ಘೋಷಣೆ ಕೂಗಿದ ಆರೋಪದಡಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ಅಮೂಲ್ಯ ಲಿಯೋನ್ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾಳೆ.
ಪಾಕಿಸ್ತಾನ್ ಜಿಂದಾಬಾದ್ ಎಂದು ಪಾಕ್ ಪರ ಘೋಷಣೆ ಕೂಗಿ ದೇಶದ್ರೋಹ ಆರೋಪದಡಿ ಜೈಲು ಸೇರಿರುವ ಅಮೂಲ್ಯ ಲಿಯೋನ್ ಜಾಮೀನು ಕೋರಿ ನಗರದ 60ನೇ ಸಿಟಿ ಸಿವಿಲ್ ಅಂಡ್ ಸೆಷನ್ಸ್ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾಳೆ. ತನ್ನನ್ನು ಬಂಧಿಸಿರುವ ಪೊಲೀಸರು ನಿಯಮಾನುಸಾರ 90 ದಿನಗಳ ಒಳಗೆ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿಲ್ಲ. ಹೀಗಾಗಿ ಸಿಆರ್ಪಿಸಿ ಕಾಯ್ದೆ ಸೆಕ್ಷನ್ 167ರ ಅಡಿ ಲಭ್ಯವಿರುವ ಪರಿಹಾರದಂತೆ ತನಗೆ ಜಾಮೀನು ನೀಡಬೇಕು ಎಂದು ಮನವಿ ಮಾಡಿದ್ದಾಳೆ.
ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿಸಿ ನಗರದ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಅಲ್ಲಿಗೆ ಹಾಜರಾದ ಅಮೂಲ್ಯ ಲಿಯೋನ್, ಪಾಕಿಸ್ತಾನದ ಪರ ಘೋಷಣೆ ಕೂಗಿದ್ದಳು. ಈ ವೇಳೆ ಸ್ಥಳದಲ್ಲಿದ್ದ ಉಪ್ಪಾರಪೇಟೆ ಠಾಣೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು.
ಫೆಬ್ರವರಿ 21ರಂದು ಬಂಧಿತಳಾದ ಅಮೂಲ್ಯ ಜಾಮೀನು ಕೋರಿ ಒಮ್ಮೆ ವಿಚಾರಣಾ ನ್ಯಾಯಾಲಯಕ್ಕೂ ಮತ್ತೊಮ್ಮೆ ಹೈಕೋರ್ಟ್ ಸೇರಿದಂತೆ ಎರಡು ಬಾರಿ ಅರ್ಜಿ ಸಲ್ಲಿಸಿದ್ದು, ತಾಂತ್ರಿಕ ಕಾರಣಗಳಿಗಾಗಿ ಅರ್ಜಿ ಹಿಂಪಡೆಯಲಾಗಿತ್ತು. ಇದೀಗ ಮೂರನೇ ಬಾರಿ ಜಾಮೀನು ಕೋರಿ ಸೆಷನ್ಸ್ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾಳೆ.