ಬೆಂಗಳೂರು: ಸಹಾಯಕ ಪ್ರಾಧ್ಯಾಪಕರ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿರುವ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಈಗಾಗಲೇ ಓರ್ವ ಮಹಿಳಾ ಅತಿಥಿ ಉಪನ್ಯಾಸಕಿಯನ್ನು ಬಂಧಿಸಿದ್ದು, ಮತ್ತೊಬ್ಬರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದರು.
ಇದನ್ನೂ ಓದಿ: ಪೆಟ್ರೋಲ್ - ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಿ: ರಾಜ್ಯಗಳಿಗೆ ಪ್ರಧಾನಿ ಒತ್ತಾಯ
ಈಗಾಗಲೇ ಮಹಿಳಾ ಅತಿಥಿ ಉಪನ್ಯಾಸಕಿಯನ್ನು ಇತ್ತೀಚೆಗೆ ಬಂಧಿಸಲಾಗಿದೆ. ಅವರ ಮೈಸೂರಿನ ನಿವಾಸದಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ಪ್ರಕರಣದಲ್ಲಿ ಯಾರೆಲ್ಲ ಭಾಗಿಯಾಗಿದ್ದಾರೆ ಎಂಬುದರ ಬಗ್ಗೆ ತನಿಖೆ ಪ್ರಗತಿಯಲ್ಲಿದೆ ಎಂದು ತಿಳಿಸಿದರು.
ಪರೀಕ್ಷೆ ನಡೆಯುವ ಮುನ್ನವೇ ವಾಟ್ಸಾಪ್ನಲ್ಲಿ ಪ್ರಶ್ನೆಪತ್ರಿಕೆ ಹರಿದಾಡಿತ್ತು. ಈ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಲ್ಲೇಶ್ವರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ತನಿಖೆ ಮುಂದುವರಿದೆ.
ಹೆಚ್ಚಿನ ವಿವರ: ಪಿಎಸ್ಐ ಪರೀಕ್ಷಾ ನೇಮಕಾತಿ ಅಕ್ರಮ ಸಿಐಡಿ ತನಿಖೆ ಬೆನ್ನಲ್ಲೇ ಸಹಾಯಕ ಪ್ರಾಧ್ಯಾಪಕ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಆರೋಪ ಕೇಳಿಬಂದಿತ್ತು. ಪರೀಕ್ಷೆ ನಡೆಯುವ ಕೆಲವೇ ಗಂಟೆಗಳ ಹಿಂದೆ ವಾಟ್ಸ್ಆ್ಯಪ್ನಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಗುಮಾನಿಯ ಕಾರಣ ಈಗ ತನಿಖೆ ತೀವ್ರಗತಿಯಲ್ಲಿ ಸಾಗಿದೆ. ಈ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಮಲ್ಲೇಶ್ವರಂ ಪೊಲೀಸ್ ಠಾಣೆಗೆ ದೂರು ನೀಡಿತ್ತು.
ಪ್ರಕರಣದಲ್ಲಿ ಬಂಧಿತ ಆರೋಪಿ ಸೌಮ್ಯ ಅವರನ್ನು ವಿಚಾರಣೆಗೊಳಪಡಿಸಿದ್ದ ಪೊಲೀಸರು, ಇವರು ನೀಡಿದ್ದ ಮಾಹಿತಿ ಮೇರೆಗೆ ಧಾರವಾಡ ವಿವಿ ಭೂಗೋಳಶಾಸ್ತ್ರದ ಹಿರಿಯ ಪ್ರಾಧ್ಯಾಪಕನನ್ನು ಮಲ್ಲೇಶ್ವರಂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಧಾರವಾಡ ವಿಶ್ವವಿದ್ಯಾಲಯ ಮೌಲ್ಯಮಾಪನ ವಿಭಾಗದ ಉಸ್ತುವಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ನಾಗರಾಜ್ ಅವರಿಗೆ ಪ್ರಶ್ನೆಪತ್ರಿಕೆ ತಯಾರಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೂಚನೆ ನೀಡಿತ್ತು. ಇದರಂತೆ ಪ್ರಶ್ನೆ ಪತ್ರಿಕೆ ಸಿದ್ಧಪಡಿಸುವಾಗ ಭೂಗೋಳಶಾಸ್ತ್ರದ ಅತಿಥಿ ಉಪನ್ಯಾಸಕಿಯಾಗಿದ್ದ ಸೌಮ್ಯ ಅವರಿಗೆ ಪ್ರಶ್ನೆಗಳನ್ನು ಸಿದ್ಧಪಡಿಸಲು ನಾಗರಾಜ್ ಹೇಳಿದ್ದರಂತೆ. ಇದರಂತೆ 17 ಪ್ರಶ್ನೆಗಳನ್ನು ಸಿದ್ದಪಡಿಸಿ ಸೌಮ್ಯ ನೀಡಿದ್ದರು. ಇದರಲ್ಲಿ 12 ಪ್ರಶ್ನೆಗಳನ್ನು ಉಳಿಸಿಕೊಂಡಿದ್ದರು. ಸದ್ಯ ನಾಗರಾಜ್ ಅವರನ್ನು ವಶಕ್ಕೆ ಪಡೆದುಕೊಂಡು ಹೆಚ್ಚಿನ ವಿಚಾರಣೆಗೊಳಪಡಿಸಿದ್ದಾರೆ.