ಬೆಂಗಳೂರು: ನಾಳೆಯಿಂದ ಮೂರು ದಿನಗಳ ಕಾಲ ವಿಧಾನಸಭಾ ಅಧಿವೇಶನ ಹಿನ್ನೆಲೆಯಲ್ಲಿ ಅಹಿತಕರ ಘಟನೆ ನಡೆಯದಂತೆ ವಿಧಾನಸೌಧ ಸುತ್ತಮುತ್ತ ಎರಡು ಕಿ.ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಆದೇಶ ಹೊರಡಿಸಿದ್ದಾರೆ.
ನಾಳೆ ಬೆಳಗ್ಗೆ 6 ರಿಂದ ಅ.12 ರಂದು ಮಧ್ಯರಾತ್ರಿ 12 ಗಂಟೆವರೆಗೆ ವಿವಿಧ ರಾಜಕೀಯ ಪಕ್ಷಗಳು, ಸಂಘಟನೆಗಳು ತಮ್ಮ ಬೇಡಿಕೆಗಳಿಗೆ ಒತ್ತಾಯಿಸಿ ಪ್ರತಿಭಟನೆ, ಮೆರವಣಿಗೆ, ಧರಣಿ, ವಿಧಾನಸೌಧ ಮುತ್ತಿಗೆ ಇತ್ಯಾದಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಕಲಂ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಆದೇಶ ಹೊರಡಿಸಿದ್ದಾರೆ.
ಅಧಿವೇಶನ ನಡೆಯುವ ಸಂದರ್ಭದಲ್ಲಿ ಕಾನೂನುಭಂಗ ಉಂಟುಮಾಡುವ ಉದ್ದೇಶದಿಂದ ಗುಂಪು ಸೇರುವುದು, ಮೆರವಣಿಗೆ, ಸಭೆಗಳನ್ನು ಮಾಡುವುದು, ಶಸ್ತ್ರಾಸ್ತ್ರ ದೊಣ್ಣೆ, ಕತ್ತಿ, ಕಲ್ಲು, ಚಾಕು ಮುಂತಾದ ಮಾರಕಾಸ್ತ್ರಗಳನ್ನು ತೆಗೆದುಕೊಂಡು ಬರಬಾರದು. ಅಂತಹವರ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.