ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳು 2021-22ನೇ ಸಾಲಿನ ಆರ್ಥಿಕ ವರ್ಷದ ಏಪ್ರಿಲ್ ತಿಂಗಳಲ್ಲಿ ಆಸ್ತಿ ತೆರಿಗೆ ಪಾವತಿಗೆ ನೀಡಲಾಗುತ್ತಿರುವ ಶೇ. 5ರ ರಿಯಾಯತಿಯ ಕಾಲಾವಧಿಯನ್ನು (ಬಿಬಿಎಂಪಿ ಹೊರತುಪಡಿಸಿ) ಜೂನ್ 30ರವರೆಗೆ ವಿಸ್ತರಿಸಲಾಗಿದೆ.
ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ನಾಟಕ ಮಹಾನಗರ ಪಾಲಿಕೆಗಳ ಅಧಿನಿಯಮ 1976ರ ಕಲಂ 112(ಎ)(1) ಮತ್ತು ಕರ್ನಾಟಕ ಪೌರಸಭೆಗಳ ಅಧಿನಿಯಮ 1964ರ ಕಲಂ 105(1) ಅನ್ವಯ ಆಸ್ತಿ ತೆರಿಗೆಯನ್ನು ಆರ್ಥಿಕ ವರ್ಷದ ಏಪ್ರಿಲ್ ತಿಂಗಳಲ್ಲಿ ಪಾವತಿಸಿದಲ್ಲಿ ಆಸ್ತಿ ತೆರಿಗೆ ಮೊತ್ತದಲ್ಲಿ ಶೇ. 5ರಷ್ಟು ರಿಯಾಯತಿಯನ್ನು ನೀಡಲು ಅವಕಾಶವಿರುತ್ತದೆ.
2021-22ನೇ ಸಾಲಿನ ಏಪ್ರಿಲ್ ತಿಂಗಳಲ್ಲಿ ಕೋವಿಡ್-19ರ ಸಾಂಕ್ರಾಮಿಕ ರೋಗದ ಎರಡನೇ ಆಲೆಯು ಅತಿ ತೀವ್ರವಾಗಿ ಹರಡುತ್ತಿರುವುದರಿಂದ ಸಾರ್ವಜನಿಕರು ಸಾಮಾಜಿಕ ಅಂತರ ಮತ್ತು ಪ್ರತ್ಯೇಕತೆಗೆ ಹೆಚ್ಚಿನ ಗಮನ ಹರಿಸಬೇಕಾಗಿರುತ್ತದೆ. ಈ ನಿಟ್ಟಿನಲ್ಲಿ ಸರ್ಕಾರವು ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದ ವ್ಯಾಪಾರ ವಹಿವಾಟುಗಳನ್ನು ಸ್ಥಗಿತಗೊಳಿಸಿರುತ್ತದೆ. ಆದ್ದರಿಂದ ಸಾರ್ವಜನಿಕರ ಆರೋಗ್ಯ ಮತ್ತು ಆರ್ಥಿಕ ಹಿತದೃಷ್ಟಿಯಿಂದ ನಗರ ಸ್ಥಳೀಯ ಸಂಸ್ಥೆಗಳು 2021-22ನೇ ಸಾಲಿನ ಆರ್ಥಿಕ ವರ್ಷದ ಏಪ್ರಿಲ್ ತಿಂಗಳಲ್ಲಿ ಆಸ್ತಿ ತೆರಿಗೆ ಪಾವತಿಗೆ ನೀಡಲಾಗುತ್ತಿರುವ ಶೇ. 5ರ ರಿಯಾಯತಿಯ ಕಾಲಾವಧಿಯನ್ನು (ಬಿಬಿಎಂಪಿ ಹೊರತುಪಡಿಸಿ) ಜೂನ್ 30ರವರೆಗೆ ವಿಸ್ತರಿಸಲಾಗಿದೆ. ಅದರಂತೆ ಅಗತ್ಯ ಕ್ರಮ ಕೈಗೊಳ್ಳಲು ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಸರ್ಕಾರ ಸೂಚಿಸಿದೆ.
ಕೊರೊನಾ ಹಿನ್ನೆಲೆ 2021-22ನೇ ಸಾಲಿನ ಆಸ್ತಿ ತೆರಿಗೆ ಪಾವತಿಗೆ ನೀಡಲಾಗುತ್ತಿರುವ ಶೇ. 5ರಷ್ಟು ರಿಯಾಯತಿ ಅವಧಿಯನ್ನು ವಿಸ್ತರಿಸಲು ಕೋರಿ ಜನಪ್ರತಿನಿಧಿಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳಿಂದ ಮನವಿಗಳು ಬಂದಿದ್ದವು. ಈ ಹಿನ್ನೆಲೆ ಸರ್ಕಾರ ಆಸ್ತಿ ತೆರಿಗೆ ಪಾವತಿ ಅವಧಿಯನ್ನು ಮುಂದೂಡಿದೆ.