ಬೆಂಗಳೂರು: ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಹೆಸರಿನಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ವಿಚಾರಣೆ ನಡೆಸಿದ್ದ ಕ್ರಮ ಖಂಡಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದ ಆರೋಪದಡಿ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧ ಶಿವಾಜಿನಗರ ಠಾಣೆ ಪೊಲೀಸರು ದಾಖಲಿಸಿದ್ದ ಖಾಸಗಿ ದೂರನ್ನು, ಹೈಕೋರ್ಟ್ ರದ್ದುಪಡಿಸಿದೆ.
ಪ್ರಕರಣ ಸಂಬಂಧ ತಮ್ಮ ವಿರುದ್ಧ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಶಿವಾಜಿನಗರ ಠಾಣೆ ಸಬ್ ಇನ್ಸ್ಪೆಕ್ಟರ್ ದಾಖಲಿಸಿದ್ದ ಖಾಸಗಿ ದೂರು ಮತ್ತು ಆ ಕುರಿತ ಎಸಿಎಂಎಂ ನ್ಯಾಯಾಲಯದ ವಿಚಾರಣೆ ರದ್ದುಪಡಿಸಬೇಕು ಎಂದು ಕೋರಿ ಡಿ.ಕೆ. ಶಿವಕುಮಾರ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಪ್ರಕರಣ ರದ್ದು ಪಡಿಸಿ ಆದೇಶಿಸಿದೆ.
ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಮಾತ್ರ ಪ್ರತಿಭಟನೆ ನಡೆಸಬೇಕು ಎಂದು ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ. ನಿಯಮದ ಪ್ರಕಾರ ಈ ಆದೇಶ ಉಲ್ಲಂಘನೆಯಾದರೆ ಆ ಕುರಿತು ನಗರ ಪೊಲೀಸ್ ಆಯುಕ್ತರು ಅಥವಾ ಜಿಲ್ಲಾಧಿಕಾರಿ ಮ್ಯಾಜಿಸ್ಟ್ರೇಟ್ಗೆ ಖಾಸಗಿ ದೂರು ಸಲ್ಲಿಸಬೇಕು. ಆದರೆ ಅವರಿಗಿಂತ ಕಡಿಮೆ ಶ್ರೇಣಿಯ ಅಧಿಕಾರಿ ಸಬ್ ಇನ್ಸ್ಪೆಕ್ಟರ್ ಖಾಸಗಿ ದೂರು ಸಲ್ಲಿಸಿದ್ದಾರೆ. ಹೀಗಿದ್ದರೂ ಪ್ರಕರಣ ಸಂಬಂಧ ಮ್ಯಾಜಿಸ್ಟೇಟ್ ಕೋರ್ಟ್ ಕಾಗ್ನಿಜೆನ್ಸ್ ತೆಗೆದುಕೊಂಡು ಸಮನ್ಸ್ ಜಾರಿ ಮಾಡಿದ್ದು, ಆ ಮೂಲಕ ಕಾನೂನು ಲೋಪವೆಸಗಿದೆ ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ.
ಪ್ರಕರಣದ ಹಿನ್ನೆಲೆ ಏನು ?: ವಿಚಾರಣೆ ನೆಪದಲ್ಲಿ ಜಾರಿ ನಿರ್ದೇಶನಾಲಯವು ರಾಹುಲ್ ಗಾಂಧಿಗೆ ಅನಗತ್ಯವಾಗಿ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ಕೆಪಿಸಿಸಿ ವತಿಯಿಂದ 2022 ರ ಜೂ.16ರಂದು ರಾಜಭವನ ಚಲೋ ಹಮ್ಮಿಕೊಳ್ಳಲಾಗಿತ್ತು. ಅದರಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭಾಗವಹಿಸಿ ಪ್ರತಿಭಟನೆ ನಡೆಸಿದ್ದರು. ಇದರಿಂದ 42 ನೇ ಎಸಿಎಂಎಂ ನ್ಯಾಯಾಲಯಕ್ಕೆ ಶಿವಾಜಿನಗರ ಠಾಣೆಯ ಸಬ್ ಇನ್ಸ್ಪೆಕ್ಟರ್ ಅವರು ಕರ್ನಾಟಕ ಪೊಲೀಸ್ ಕಾಯ್ದೆಯಡಿ ಖಾಸಗಿ ದೂರು ದಾಖಲಿಸಿದ್ದರು.
ಬೆಂಗಳೂರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಮಾತ್ರ ಪ್ರತಿಭಟನೆ ಮಾಡಬೇಕೆಂದು ಕಡ್ಡಾಯಗೊಳಿಸಿ ನಗರ ಪೊಲೀಸ್ ಆಯುಕ್ತರು ಆದೇಶ ಮಾಡಿದ್ದರು. ಈ ಆದೇಶ ಉಲ್ಲಂಘಿಸಿ ಡಿ.ಕೆ.ಶಿವಕುಮಾರ್ ನಗರದ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಿಂದ ಪ್ರತಿಭಟನೆ ನಡೆಸಿದ್ದರು. ಆ ಮೂಲಕ ಸಾರ್ವಜನಿಕ ನೆಮ್ಮದಿಗೆ ಭಂಗ ಉಂಟು ಮಾಡಿದ್ದಾರೆ. ಮತ್ತೊಂದೆಡೆ ಪ್ರತಿಭಟನೆ ನಡೆಸಲು ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಸಹ ಪಡೆದಿಲ್ಲ ಎಂದು 2022ರ ಜೂ.16ರಂದು ದಾಖಲಿಸಿದ ಖಾಸಗಿ ದೂರಿನಲ್ಲಿ ದೂರುದಾರರು ಆರೋಪಿಸಿದ್ದರು.
ಪ್ರಕರಣ ಸಂಬಂಧ ಕಾಗ್ನಿಜೆನ್ಸ್ ತೆಗೆದುಕೊಂಡಿದ್ದ 42ನೇ ಎಸಿಎಂಎಂ ನ್ಯಾಯಾಲಯ, ಡಿ.ಕೆ.ಶಿವಕುಮಾರ್ಗೆ ಸಮನ್ಸ್ ಜಾರಿ ಮಾಡಿತ್ತು. ಈ ಪ್ರಕರಣ ರದ್ದುಪಡಿಸಲು ಕೋರಿ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಇದನ್ನೂಓದಿ: ನಾಡಗೀತೆ ಹಾಡುವ ಕುರಿತು ಸಮಗ್ರ ಮಾಹಿತಿ ನೀಡಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ