ಆನೇಕಲ್: ಕೊರೊನಾ ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಬೆಡ್‍ಗಳು ಹಾಗೂ ಆಕ್ಸಿಜನ್ ದೊರೆಯದೇ ಸಾವನ್ನಪುತ್ತಿದ್ದರೂ ಸರ್ಕಾರ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದರಲ್ಲಿ ವಿಫಲವಾಗಿದೆ ಎಂದು ಮಹಿಳಾ ಹೋರಾಟಗಾರ್ತಿ ಮಮತಾ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪಟ್ಟಣದ ಸರ್ಕಾರಿ ಆಸ್ಪತ್ರೆ ಮುಂಭಾಗ ದಲಿತ ಮತ್ತು ಪ್ರಗತಿಪರ ಮಹಿಳಾ ಸಂಘಟನೆಗಳ ಒಕ್ಕೂಟದ ಸದಸ್ಯರು ಸಾಮಾಜಿಕ ಅಂತರ ಕಾಯ್ದುಕೊಂಡು ಮಾಸ್ಕ್ ಧರಿಸಿ, ಭಿತ್ತಿ ಪತ್ರಗಳನ್ನು ಹಿಡಿದು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಮಮತಾ, ಆರ್ಟಿಸಿಪಿಆರ್ ವರದಿ ವಿಳಂಬದಿಂದ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಹಾಗಾಗಿ ವರದಿಗಳು ತ್ವರಿತಗತಿಯಲ್ಲಿ ದೊರೆಯುವಂತೆ ಮಾಡಬೇಕು ಹಾಗೂ ಸಿಟಿ ಸ್ಕ್ಯಾನ್ ಸ್ಥಳೀಯ ಆಸ್ಪತ್ರೆಗಳಲ್ಲಿ ಮಾಡದೆ ಖಾಸಗಿ ಆಸ್ಪತ್ರೆಗಳಲ್ಲಿ ಮಾಡುವುದರಿಂದ ಬಡವರಿಗೆ ಹಣ ಕಟ್ಟಲು ಕಷ್ಟವಾಗಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುವ ವೈದ್ಯರಿಗೆ ಹಾಗೂ ಸಿಬ್ಬಂದಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು ಎಂದರು.
ದಲಿತ ಮುಖಂಡ ಸಿ. ರಾವಣ ಮಾತನಾಡಿ ಕೊರೊನಾ ಸೋಂಕಿತರಿಗೆ ಸೂಕ್ತ ಸಮಯದಲ್ಲಿ ಬೆಡ್ ಹಾಗೂ ಆಕ್ಸಿಜನ್ ದೊರೆಯದೇ ನಮ್ಮ ತಾಲೂಕಿನಲ್ಲಿ ನಿತ್ಯ ಬಡವರು ಸಾಯುತ್ತಿದ್ದರೂ ಸರ್ಕಾರದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಕಣ್ಣು ಮುಚ್ಚಿ ಕುಳಿತಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಬಡವರನ್ನು ಸುಲಿಗೆ ಮಾಡುತ್ತಿದ್ದಾರೆ. ಬಡ ರೋಗಿಗಳು ಖಾಸಗಿ ಆಸ್ಪತ್ರೆಗಳಿಗೆ ಹೋಗಿ ಲಕ್ಷ ಲಕ್ಷ ಹಣ ಖರ್ಚು ಮಾಡಿ ಪ್ರಾಣ ಉಳಿಸಿಕೊಳ್ಳುವುದು ಕಷ್ಟವಾಗಿದೆ. ಹೀಗೇ ಮುಂದುವರೆದರೆ ಉಗ್ರ ಪ್ರತಿಭಟನೆ ನಡೆಸುತ್ತೇವೆಂದು ಎಚ್ಚರಿಸಿದರು.
ವಕೀಲರಾದ ಆನಂದ್ ಚಕ್ರವರ್ತಿ ಮಾತನಾಡಿ, ತಾಲೂಕಿನಲ್ಲಿ ಹೆಚ್ಚು ಕೋವಿಡ್ ಕೇರ್ ಕೇಂದ್ರಗಳನ್ನು ಸ್ಥಾಪಿಸಿ ರೋಗಿಗಳನ್ನು ರಕ್ಷಣೆ ಮಾಡಬೇಕು ಮತ್ತು ತಾಲೂಕಿನ ಶಾಸಕರು ಕೂಡಲೇ ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯ ಇರುವ ಬೆಡ್‍ಗಳ ವಿವರಣೆ ಪಡೆದು ಪರಿಶೀಲನೆ ನಡೆಸಬೇಕು ಎಂದರು.
ಪ್ರತಿಭಟನೆಯಲ್ಲಿ ನೆರಳೂರು ವಿಜಯಕುಮಾರಿ, ಮುಖಂಡರಾದ ಚಿಕ್ಕಹಾಗಡೆ ವೆಂಕಟೇಶ್‍ಮೂರ್ತಿ, ನಾಗರಾಜು ಮೌರ್ಯ, ಗೌತಮ್ ವೆಂಕಿ, ಸುರೇಶ್ ಪೋತು, ಬಳ್ಳೂರು ಗೋವಿಂದ್, ಅರೇಹಳ್ಳಿ ಅಶ್ವಥ್, ಮುಂತಾದವರು ಹಾಜರಿದ್ದರು.