ಬೆಂಗಳೂರು: ಮರಾಠ ಅಭಿವೃದ್ಧಿ ನಿಗಮವನ್ನು ಬಯಸದೇ ಕೊಡಲಾಗಿದ್ದು, ಈ ಮೂಲಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕನ್ನಡಿಗರಿಗೆ ಅನ್ಯಾಯವೆಸಗಿದ್ದಾರೆಂದು ಆರೋಪಿಸಿ ಕನ್ನಡಪರ ಹೋರಾಟಗಾರರು ಪ್ರತಿಭಟನೆ ನಡೆಸಿದರು.
ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್, ಅಖಿಲ ಕರ್ನಾಟಕ ಡಾ. ರಾಜ್ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು ಮತ್ತು ಕನ್ನಡ ಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ಕೆ.ಮಂಜುನಾಥ್ ದೇವ ನೇತೃತ್ವದಲ್ಲಿ ಕರ್ನಾಟಕ-ತಮಿಳುನಾಡು ಗಡಿ ಅತ್ತಿಬೆಲೆಯಲ್ಲಿ ಪ್ರತಿಭಟನೆ ನಡೆಸಲಾಯಿತು.
ಇದನ್ನು ಓದಿ: ಯಡಿಯೂರಪ್ಪ ಚುನಾವಣೆಗೋಸ್ಕರ ಮರಾಠಿಗರು ಮತ್ತು ಕನ್ನಡಿಗರ ನಡುವೆ ಒಡಕು ಮೂಡಿಸುತ್ತಿದ್ದಾರೆ: ವಾಟಾಳ್ ನಾಗರಾಜ್
ಈ ವೇಳೆ ಮಾತನಾಡಿದ ವಾಟಾಳ್ ನಾಗರಾಜ್, ಕನ್ನಡಿಗರ ಕಣ್ಣಿಗೆ ಮಣ್ಣೆರಚಿರುವ ಸಿಎಂ ಬಿಎಸ್ವೈ, ಇದೇ ನವೆಂಬರ್ 30ರೊಳಗೆ ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ಕೈಬಿಡಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಬಂದ್ ಮಾಡುವುದಾಗಿ ಎಚ್ಚರಿಸಿದರು.
ಇನ್ನು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿಕೆಗೆ ತಿರುಗೇಟು ನೀಡಿದ ವಾಟಾಳ್, ಅವರ ಹೇಳಿಕೆಗಳಿಗೆ ನಾವು ಉತ್ತರಿಸುವುದಿಲ್ಲ ಎಂದರು. ಕಳೆದ ನಲವತ್ತು ವರ್ಷಗಳಿಂದ ಕನ್ನಡಿಗರ ಮೇಲೆ ಪುಂಡಾಟಿಕೆ ಸವಾರಿ ಮಾಡುತ್ತಿರುವ ಮರಾಠಿಗರಿಗೆ ನಿಗಮ ನೀಡಿರುವುದು ಕನ್ನಡಿಗರ ಗಾಯದ ಮೇಲೆ ಬರೆ ಎಳೆದಂತಾಗಿದೆ. ಕೂಡಲೇ ಹಿಂಪಡೆಯದಿದ್ದರೆ ಜೈಲ್ ಭರೋ ಚಳವಳಿ ಮಾಡುವುದಾಗಿ ಹೇಳಿದರು.
ಇನ್ನು ಸಾ.ರಾ.ಗೋವಿಂದು ಮಾತನಾಡಿ, ಬಸವ ಕಲ್ಯಾಣ ಮತ್ತು ಮಸ್ಕಿ ಕ್ಷೇತ್ರಗಳ ಉಪಚುನಾವಣೆಯಲ್ಲಿ ಗೆಲ್ಲಲು ಬಿಎಸ್ವೈ ಈ ರೀತಿ ಮಾಡಿದ್ದಾರೆ. ಇದನ್ನು ಇಲ್ಲಿಗೆ ಕೈ ಬಿಡಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.