ಬೆಂಗಳೂರು : ಕೇಂದ್ರದ ಬಿಜೆಪಿ ಸರ್ಕಾರ ಪ್ರಜಾಪ್ರಭುತ್ವ ಹಾಗೂ ಸಂವಿಧಾನ ವಿರೋಧಿ ಆಡಳಿತ ನಡೆಸುತ್ತಿದೆ ಎಂದು ಆರೋಪಿಸಿ ರಾಜ್ಯ ಕಾಂಗ್ರೆಸ್ ನಾಯಕರು ರಾಜಭವನ ಮುಂಭಾಗ ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ.
ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ಹೈಕಮಾಂಡ್ ಸೂಚನೆ ಮೇರೆಗೆ ರಾಜಭವನ ಎದುರು ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ.
ನಾಳೆ ಮಧ್ಯಾಹ್ನ 1:30ಕ್ಕೆ ಪ್ರತಿಭಟನೆ ನಡೆಸಲಿರುವ ಕೈ ನಾಯಕರು, ಬಿಜೆಪಿ ಸರ್ಕಾರ ನಡೆಸುತ್ತಿರುವ ಪ್ರಜಾಪ್ರಭುತ್ವ ಹಾಗೂ ಸಂವಿಧಾನ ವಿರೋಧಿ ಆಡಳಿತ ವಿರುದ್ಧ ಘೋಷಣೆ ಕೂಗಲಿದ್ದಾರೆ. ಪ್ರಜಾಪ್ರಭುತ್ವ ಉಳಿಸಿ- ಸಂವಿಧಾನ ರಕ್ಷಿಸಿ ಹೆಸರಿನಲ್ಲಿ ಪ್ರತಿಭಟನೆ ಕರೆಯಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಕೈ ನಾಯಕರಿಗೆ ಸೂಚನೆ ನೀಡಿದ್ದಾರೆ.
ರಾಜಸ್ಥಾನ ಕಾಂಗ್ರೆಸ್ ಸರ್ಕಾರ ಉರುಳಿಸಲು ಬಿಜೆಪಿ ಪ್ರಯತ್ನ ನಡೆಸಿದೆ. ಇದರಿಂದಾಗಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಪಕ್ಷದ ಎಲ್ಲಾ ಹಿರಿಯ ಮುಖಂಡರು, ಶಾಸಕರು, ಸಂಸದರು, ಮಾಜಿ ಶಾಸಕರು, ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆ ಅಭ್ಯರ್ಥಿಗಳು, ಬೆಂಗಳೂರು ನಗರ ಡಿಸಿಸಿ ಅಧ್ಯಕ್ಷರು ಈ ಪ್ರತಿಭಟನೆಯಲ್ಲಿ ತಪ್ಪದೆ ಪಾಲ್ಗೊಳ್ಳುವಂತೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಕರೆ ಕೊಟ್ಟಿದ್ದಾರೆ.