ಬೆಂಗಳೂರು: ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಆದೇಶ ಹಿಂಪಡೆಯುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಯುವ ಘರ್ಜನೆ ತಾಲೂಕು ಘಟಕದ ವತಿಯಿಂದ ಬೆಂಗಳೂರು ಪೂರ್ವ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಯಿತು.
ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಆದೇಶ ನೀಡಿ ಪ್ರಾಧಿಕಾರಕ್ಕೆ 50 ಕೋಟಿ ರೂ. ಅನುದಾನ ಮೀಸಲಿರಿಸಿದ್ದು ಸರಿಯಲ್ಲ. ಕೂಡಲೇ ಮುಖ್ಯಮಂತ್ರಿಗಳು ಆದೇಶವನ್ನು ವಾಪಸ್ ಪಡೆಯಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ತಹಶೀಲ್ದಾರ್ ಮೂಲಕ ಸಿಎಂಗೆ ಮನವಿ ಸಲ್ಲಿಸಿದರು.
ಈ ವೇಳೆ ಕರವೇ ಯುವ ಘರ್ಜನೆ ರಾಜ್ಯಾಧ್ಯಕ್ಷ ವೈಟ್ ಫೀಲ್ಡ್ ಪ್ರವೀಣ್ ಮಾತನಾಡಿ, ಕರ್ನಾಟಕದಲ್ಲಿ ಕನ್ನಡಿಗರೇ ಸಾರ್ವಭೌಮ. ಆದರೆ ಇಲ್ಲಿ ಮರಾಠಿಗರು ಸಾರ್ವಭೌಮರಾಗುತ್ತಿದ್ದಾರೆ. ಮರಾಠ ಅಭಿವೃದ್ಧಿ ಪ್ರಾಧಿಕಾರ ರದ್ದು ಮಾಡಲೇಬೇಕು. ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಡಿ. 5ರ ಕರ್ನಾಟಕ ಬಂದ್ಗೆ ಕರವೇ ಯುವ ಘರ್ಜನೆ ಸಂಪೂರ್ಣ ಬೆಂಬಲ ನೀಡುತ್ತದೆ ಎಂದರು.
ಕರವೇ ಸದಸ್ಯ ಬೆಳತೂರು ಪರಮೇಶ್ ಮಾತನಾಡಿ, ಕನ್ನಡಿಗರ ತೆರಿಗೆ ಹಣ ಕೇವಲ ಕನ್ನಡಿಗರಿಗೆ ಮಾತ್ರ ಸೀಮಿತವಾಗಬೇಕು. ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆ ತರುವ ಕೆಲಸವನ್ನು ಸರ್ಕಾರ ಕೂಡಲೇ ಕೈಬಿಡಬೇಕು. ಮರಾಠ ಅಭಿವೃದ್ಧಿ ಪ್ರಾಧಿಕಾರಕ್ಕಾಗಿ ನೀಡಿದ 50 ಕೋಟಿ ರೂ. ಅನುದಾನವನ್ನು ಹಿಂಪಡೆದು ರಾಜ್ಯದಲ್ಲಿ ಪ್ರವಾಹಕ್ಕೆ ಸಿಲುಕಿ ಸಂಕಷ್ಟಕ್ಕೀಡಾದ ರೈತರಿಗೆ ನೀಡಬೇಕು ಎಂದು ಒತ್ತಾಯಿಸಿದರು.