ಬೆಂಗಳೂರು : ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಆಗಸ್ಟ್ 7 ರಂದು (ನಾಳೆ) ಬಿಜೆಪಿ ರೈತ ಮೋರ್ಚಾ ವತಿಯಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ರೈತ ಮೋರ್ಚಾ ರಾಜ್ಯಾಧ್ಯಕ್ಷ ಈರಣ್ಣ ಕಡಾಡಿ ತಿಳಿಸಿದ್ದಾರೆ.
ಆಡಳಿತರೂಢ ಕಾಂಗ್ರೆಸ್ ಸರ್ಕಾರವೂ ಬಿಜೆಪಿ ಸರ್ಕಾರ ತಂದಿದ್ದ ರೈತ ಪರ ಯೋಜನೆಗಳನ್ನು ಕೈ ಬಿಟ್ಟಿದ್ದು, ರಾಜ್ಯದ ಅನ್ನದಾತರ ವಿರುದ್ಧವಾಗಿ ನಡೆದುಕೊಂಡಿದೆ. ರೈತ ವಿರೋಧಿ ನೀತಿಯನ್ನು ಖಂಡಿಸಿ ಸೋಮವಾರ ವಿವಿಧ ಜಿಲ್ಲಾ ಬಿಜೆಪಿ ರೈತ ಮೋರ್ಚಾ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರೈತರು ತಾವು ಬೆಳೆದ ಬೆಳೆಯನ್ನು ಎಲ್ಲಿ ಬೇಕಾದರೂ ಮಾರಾಟ ಮಾಡುವ ಸ್ವಾತಂತ್ರ್ಯವನ್ನು ಎಪಿಎಂಸಿ ಕಾಯ್ದೆ ಮುಖಾಂತರ ಬಿಜೆಪಿ ಸರ್ಕಾರ ಕೊಟ್ಟಿತ್ತು. ಇದರಿಂದ ರೈತರಿಗೆ ಸಾಗಾಣಿಕೆ ವೆಚ್ಚ, ದಲ್ಲಾಳಿಗಳ ಕಮಿಷನ್ ಮತ್ತು ಇತರೆ ಖರ್ಚುಗಳು ಉಳಿತಾಯವಾಗುತ್ತಿತ್ತು. ಇದೀಗ ಕಾಂಗ್ರೆಸ್ ಸರ್ಕಾರವು ಎಪಿಎಂಸಿ ಕಾನೂನನ್ನು ರದ್ದು ಮಾಡಿ ರೈತರ ಆದಾಯಕ್ಕೆ ಕುತ್ತು ತಂದಿದೆ ಎಂದು ಟೀಕಿಸಿದ್ದಾರೆ.
ಅವೈಜ್ಞಾನಿಕ ವಿದ್ಯುತ್ ದರ ಏರಿಕೆ : ವಿದ್ಯುತ್ ದರ ಏರಿಕೆ ಮಾಡಿ ಖರ್ಚನ್ನು ಹೆಚ್ಚು ಮಾಡಲಾಗಿದೆ. ಇದರಿಂದ ರೈತರು ಅವಲಂಬಿತವಾಗಿರುವ ಹತ್ತಿ ಉದ್ಯಮ, ರೈಸ್ ಮಿಲ್ ಮತ್ತು ಅತಿ ಸಣ್ಣ, ಸಣ್ಣ, ಮಧ್ಯಮ ಕೈಗಾರಿಕೆಗಳಿಗೆ ಬಾರಿ ತೊಂದರೆ ಆಗಿದೆ ಎಂದಿದ್ದಾರೆ. ಜೊತೆಗೆ, ರೈತರ ಮಕ್ಕಳು ವಿದ್ಯಾವಂತರಾಗಬೇಕು, ಉನ್ನತ ಶಿಕ್ಷಣವನ್ನು ಪಡೆಯಬೇಕು ಎನ್ನುವ ಹಿತದೃಷ್ಟಿಯಿಂದ ರಾಜ್ಯದ 11 ಲಕ್ಷ ರೈತ ಕುಟುಂಬದ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ 438.69 ಕೋಟಿ ರೂ.ಗಳ ರೈತ ವಿದ್ಯಾನಿಧಿಯನ್ನು ರದ್ದುಪಡಿಸುವ ಮೂಲಕ ಬಡ ರೈತರ ಮಕ್ಕಳಿಗೆ ಅನ್ಯಾಯವೆಸಗುತ್ತಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.
ರಾಜ್ಯದ 50 ಲಕ್ಷ ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿದ ರೈತರಿಗೆ ಭೂ ಸಿರಿ ಎಂಬ ಯೋಜನೆಯಲ್ಲಿ 10 ಸಾವಿರ ಹೆಚ್ಚುವರಿ ಸಹಾಯಧನ ನೀಡುವ ಹಿಂದಿನ ಸರ್ಕಾರ ನಿರ್ಣಯವನ್ನು ರದ್ದು ಪಡಿಸಲಾಗುತ್ತಿದೆ. ಕೇಂದ್ರ ಸರ್ಕಾರದ ಜೊತೆ ಬಿಜೆಪಿ ರಾಜ್ಯ ಸರ್ಕಾರ ಕೂಡ ಸುಮಾರು 51 ಲಕ್ಷ ರೈತರಿಗೆ ವಾರ್ಷಿಕ ಎರಡು ಕಂತುಗಳಲ್ಲಿ ನಾಲ್ಕು ಸಾವಿರ ಕಿಸಾನ್ ಸಮ್ಮಾನ್ ನಿಧಿಯೋಜನೆ ಜಾರಿಗೆ ತಂದಿದ್ದನ್ನು ತಡೆ ಹಿಡಿಯುತ್ತಿದೆ ಎಂದು ದೂರಿದ್ದಾರೆ.
ಈ ಹಿಂದೆ ಕೃಷಿ ಭೂಮಿ ಕೊಳ್ಳುವವರು ಕೃಷಿಕರಾಗಿರಬೇಕು ಅಥವಾ ಕೃಷಿ ಕೂಲಿಕಾರನಾಗಿರಬೇಕು ಎಂಬ ನಿಯಮ ಇತ್ತು. ಹೀಗಾಗಿ, ರೈತರ ಜಮೀನುಗಳಿಗೆ ಯೋಗ್ಯದರ ಸಿಗುತ್ತಿರಲಿಲ್ಲ. ಇದಕ್ಕೆ ಬಿಜೆಪಿ ಸರ್ಕಾರ ಕೃಷಿ ಭೂಮಿ ಮಾರಾಟ ಕಾಯ್ದೆಯನ್ನು ತಂದಿತ್ತು. ಈ ಕಾಯ್ದೆಯಲ್ಲಿ ಯಾರು ಬೇಕಾದರೂ ಕೃಷಿ ಭೂಮಿಯನ್ನು ಕೊಂಡುಕೊಳ್ಳಬಹುದು ಎಂಬ ನಿಯಮವನ್ನು ಜಾರಿ ಮಾಡಲಾಯಿತು. ಇದರಿಂದ ಕೃಷಿ ಜಮೀನುಗಳ ಮೌಲ್ಯ ಹೆಚ್ಚಾಗಿತ್ತು ಮತ್ತು ಇದರಿಂದ ಕೃಷಿ ಪದವೀಧರ ವಿದ್ಯಾರ್ಥಿಗಳು ಕೂಡ ಜಮೀನನ್ನು ಖರೀದಿಸುವ ಮೂಲಕ ಹೊಸ ತಂತ್ರಜ್ಞಾನ ಮತ್ತು ಕೃಷಿ ಕಾರ್ಯಕ್ಕೆ ಹೊಸ ಆಯಾಮ ನೀಡಬಹುದು ಎಂದು ಬಿಜೆಪಿ ಸರ್ಕಾರ ಈ ಕಾಯ್ದೆಯನ್ನು ತಂದಿತ್ತು. ಆದರೆ, ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರ ಕೃಷಿ ಭೂಮಿ ಮಾರಾಟ ಕಾಯ್ದೆಯನ್ನು ರದ್ದುಗೊಳಿಸಲು ನಿರ್ಧರಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನೀರಾವರಿ ಯೋಜನೆಗಳ ನಿರ್ಲಕ್ಷ್ಯ: ಬಿಜೆಪಿ ಸರ್ಕಾರ ನೀರಾವರಿ ಯೋಜನೆಗಳಿಗೆ 23 ಸಾವಿರ ಕೋಟಿ ಅನುದಾನ ಒದಗಿಸಿತ್ತು. ಅದನ್ನು ಈಗ 19 ಸಾವಿರ ಕೋಟಿಗೆ ಇಳಿಸಿ ರೈತರಿಗೆ ಅನ್ಯಾಯವೆಸಗಿದೆ. ಮೇಕೆದಾಟು ಯೋಜನೆಗೆ ಬಜೆಟ್‍ನಲ್ಲಿ ಯಾವುದೇ ಅನುದಾನ ನೀಡದೆ ಕಾಂಗ್ರೆಸ್ ಮಾಡಿದ ಪಾದಯಾತ್ರೆ ಕೇವಲ ರಾಜಕೀಯ ಸ್ಟಂಟ್ ಆಗಿದೆ ಎಂದು ಆರೋಪಿಸಿದ್ದಾರೆ.
ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ : ರಾಜ್ಯದ 24.67 ಲಕ್ಷ ಹಾಲು ಉತ್ಪಾದಕರಿಗೆ ಅನುಕೂಲವಾಗಲು ಸಾವಿರ ಕೋಟಿ ಅನುದಾನದಡಿ ಸ್ಥಾಪಿಸಿದ್ಧ ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ರದ್ಧುಗೊಳಿಸಲು ನಿರ್ಧರಿಸಿದೆ. ಶ್ರಮ ಶಕ್ತಿ ಯೋಜನೆ ರದ್ಧತಿಗೆ ಮುಂದಾಗಿದೆ. ಬಿಜೆಪಿ ಸರ್ಕಾರ ಬಜೆಟ್‍ನಲ್ಲಿ ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಡಿಬಿಟಿ ಮೂಲಕ ಮಾಸಿಕ ರೂ. 500 ಸಹಾಯಧನ ನೀಡುವ ಯೋಜನೆಯನ್ನು ಜಾರಿಗೆ ತಂದಿತ್ತು. ಅದನ್ನು ರದ್ದುಗೊಳಿಸಲು ನಿರ್ಣಯಿಸಿದೆ. 56 ಲಕ್ಷ ಸಣ್ಣ ಮತ್ತು ಅತಿ ಸಣ್ಣ ರೈತ ಕುಟುಂಬಗಳ ರೈತರಿಗೆ 180 ಕೋಟಿ ರೂ. ವೆಚ್ಚದಲ್ಲಿ ಜೀವನ್ ಜ್ಯೋತಿ ವಿಮಾ ಯೋಜನೆ ಜಾರಿ ಮಾಡಲಾಗಿತ್ತು. ಅದನ್ನು ರದ್ದುಗೊಳಿಸಲಾಗಿದೆ. ಸಿರಿಧಾನ್ಯ ಸಂಸ್ಕರಿಸುವ ರೈತ ಉತ್ಪಾದಕ ಸಂಸ್ಥೆಗಳಿಗೆ ಪ್ರಾಶಸ್ತ್ಯ ನೀಡಲಾಗಿತ್ತು. ಆ ಯೋಜನೆಯನ್ನು ರದ್ದು ಮಾಡಿದ್ದಾರೆ ಎಂದಿದ್ದಾರೆ.
ರೈತರು ಬೆಳೆದ ಬೆಳೆಗಳನ್ನು ಕೊಯ್ಲೋತ್ತರ ನಿರ್ವಹಣೆ ಮಾಡಲು ಕೃಷಿ ಮತ್ತು ತೋಟಗಾರಿಕಾ ಉತ್ಪನ್ನಗಳ ಸಂಸ್ಕರಣೆ ಮತ್ತು ರಫ್ತು ಉತ್ತೇಜನಕ್ಕೆ ಬಿಜೆಪಿ ಸರ್ಕಾರ 100 ಕೋಟಿ ಹಣವನ್ನು ನೀಡಿತ್ತು. ಈ ಯೋಜನೆಯನ್ನು ಕೈ ಬಿಡಲಾಗಿದೆ. ಸಹಸ್ರ ಸರೋವರ ಮತ್ತು ಸಹ್ಯಾದ್ರಿ ಸಿರಿ ಯೋಜನೆಯಡಿ 75 ಕೋಟಿ ಅನುದಾನ ನೀಡಿ ರೈತರ ಜಮೀನುಗಳಲ್ಲಿ ಜಲ ಹೊಂಡ ನಿರ್ಮಿಸುವ ಜಲ ನಿಧಿ ಯೋಜನೆ ಜಾರಿ ಮಾಡಲಾಗಿತ್ತು. ಆ ಯೋಜನೆಯನ್ನು ಕಾಂಗ್ರೆಸ್ ಸರ್ಕಾರ ಕೈ ಬಿಟ್ಟಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಇದನ್ನೂ ಓದಿ : ಧಾರವಾಡ : ರೈತ ವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಬೃಹತ್ ಪ್ರತಿಭಟನೆ
ಯಾದಗಿರಿ, ರಾಯಚೂರು ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಸೀಗಡಿ ಕೃಷಿ ಕ್ಲಸ್ಟರ್ ಸ್ಥಾಪನೆಗೆ ಬಿಜೆಪಿ ಸರ್ಕಾರ ಅನುದಾನ ಒದಗಿಸಿತ್ತು. ಹಿಂದುಳಿದ ಕಲ್ಯಾಣ ಕರ್ನಾಟಕದ ಜನರ ಆದಾಯವನ್ನು ಹೆಚ್ಚಿಸಲು ಕೃಷಿ ಉಪವಲಯಗಳನ್ನು ಪ್ರೋತ್ಸಾಹಿಸಲು ಈ ಕಾರ್ಯಕ್ರಮವನ್ನು ರೂಪಿಸಲಾಗಿತ್ತು. ಆದರೆ, ಕಾಂಗ್ರೆಸ್ ಸರ್ಕಾರ ಈ ಯೋಜನೆಯನ್ನು ಕೈ ಬಿಟ್ಟು, ಕಲ್ಯಾಣ ಕರ್ನಾಟಕ ಜನರ ಬಗ್ಗೆ ಇರುವ ಅಸಡ್ಡೆಯನ್ನು ತೋರಿಸಿದೆ. ಮುಂಗಾರು ವೈಫಲ್ಯವಾಗಿ ಎರಡೇ ತಿಂಗಳಲ್ಲಿ 42 ಜನ ರೈತರ ಆತ್ಮಹತ್ಯೆಯಾಗಿದೆ. ಆದರೆ ಕಾಂಗ್ರೆಸ್ ಸರ್ಕಾರ ವಾರಂಟಿ ಇಲ್ಲದ ಗ್ಯಾರಂಟಿಗಳನ್ನು ಅನುಷ್ಠಾನ ಮಾಡುವ ಬಗ್ಗೆ ಗೊಂದಲಕ್ಕೀಡಾಗಿದ್ದು, ರಾಜ್ಯದ ಮುಗ್ಧ ಜನರನ್ನು ವಂಚಿಸುತ್ತಿದೆ ಎಂದು ಕಿಡಿಕಾರಿದ್ದಾರೆ.
ಇದನ್ನೂ ಓದಿ : ರೈತ ವಿರೋಧಿ ನೀತಿ ಖಂಡಿಸಿ ಹೆದ್ದಾರಿ ತಡೆದು ಪ್ರತಿಭಟಿಸಿದ 'ಸಂಯುಕ್ತ ಹೋರಾಟ ಕರ್ನಾಟಕ'
ಬಿಜೆಪಿ ಸರ್ಕಾರ ರೈತರ ಪರವಾಗಿ ಸಾಕಷ್ಟು ಯೋಜನೆಗಳನ್ನು ಕೊಟ್ಟಿದೆ. ರೈತರ ಜೀವನ ಮಟ್ಟವನ್ನು ಉನ್ನತಗೊಳಿಸಲು ಕಳೆದ ಬಜೆಟ್‍ನಲ್ಲಿ ಸಾಕಷ್ಟು ಯೋಜನೆಗಳನ್ನು ರೂಪಿಸಿತ್ತು. ಆದರೆ, ಕಾಂಗ್ರೆಸ್ ಸರ್ಕಾರವೂ ಶೇಕಡಾ 50 ರಷ್ಟು ರೈತಾಪಿ ವರ್ಗವನ್ನು ನಿರ್ಲಕ್ಷಿಸಿ ಕರ್ನಾಟಕ ರಾಜ್ಯವನ್ನು ಅಧೋಪತನಕ್ಕೆ ತಳ್ಳಲು ನಿರ್ಧರಿಸಿದೆ. ಕರ್ನಾಟಕದ ಜನತೆಗೆ ಅನ್ನ ನೀಡಿ ಅವರ ಜೀವ ಮತ್ತು ಜೀವನವನ್ನು ನೀಡಿರುವ ರೈತಾಪಿ ವರ್ಗವನ್ನು ನಿರ್ಲಕ್ಷಿಸಿರುವುದು ತೀರ್ವ ಖಂಡನೀಯ. ಕರ್ನಾಟಕ ರಾಜ್ಯದ ಆರ್ಥಿಕತೆಯು ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಕೃಷಿ ಕ್ಷೇತ್ರದ ಮೇಲೆ ಅವಲಂಬಿತವಾಗಿರುವುದು ಎಂಬುದನ್ನು ತಿಳಿಯದಿರುವುದು ಕಾಂಗ್ರೆಸ್ ಪಕ್ಷದ ಮನಸ್ಥಿತಿಗೆ ಸಾಕ್ಷಿ. ತನ್ನ ರೈತ ವಿರೋಧಿ ನೀತಿಯನ್ನು ಸರಿಪಡಿಸಿಕೊಳ್ಳದಿದ್ದರೆ, ರಾಜ್ಯಾದ್ಯಂತ ಉಗ್ರ ಹೋರಾಟವನ್ನು ರೂಪಿಸಲಾಗುವುದು ಎಂದು ಕಡಾಡಿ ಎಚ್ಚರಿಸಿದ್ದಾರೆ.