ಬೆಂಗಳೂರು: ರಾಜ್ಯದಲ್ಲಿ ಪಡಿತರ ಚೀಟಿ ಹೊಂದಿಲ್ಲದ ಜನರಿಗೂ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯ ಅಡಿಯಲ್ಲಿ ಪಡಿತರ ವಿತರಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಹಿಂದಿನ ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಲಾಕ್ಡೌನ್ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ ಅಡಿ ಮೇ ಮತ್ತು ಜೂನ್ ತಿಂಗಳಲ್ಲಿ ಬಡವರಿಗೆ ತಲಾ 5 ಕೆ.ಜಿ. ಅಕ್ಕಿ 1 ಕೆ.ಜಿ. ಬೇಳೆ ನೀಡಿರುವ ಕುರಿತು ಸರ್ಕಾರ ತಿಳಿಸಿತ್ತು. ಪರಿಸ್ಥಿತಿ ಸುಧಾರಿಸದ ಹಿನ್ನೆಲೆಯಲ್ಲಿ ಈ ಯೋಜನೆಯನ್ನು ನವೆಂಬರ್ ವರೆಗೆ ವಿಸ್ತರಿಸಿರುವುದಾಗಿ ಪ್ರಧಾನಮಂತ್ರಿಗಳು ಘೋಷಿಸಿದ್ದಾರೆ. ಇದಕ್ಕೆ ರಾಜ್ಯ ಸರ್ಕಾರದ ನಿಲುವು ಏನೆಂಬುದನ್ನು ತಿಳಿದು ನ್ಯಾಯಾಲಯ ಸೂಕ್ತ ನಿರ್ದೇಶನ ನೀಡಬೇಕು ಎಂದು ಕೋರಿದ್ದರು.
ಇಂದು ಅರ್ಜಿ ವಿಚಾರಣೆಗೆ ಬಂದಾಗ ರಾಜ್ಯ ಸರ್ಕಾರದ ಪರ ಹಾಜರಿದ್ದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಧ್ಯಾನ್ ಚಿನ್ನಪ್ಪ ಅವರು, ಯೋಜನೆ ವಿಸ್ತರಿಸಿರುವುದು ನಿಜ. ಆದರೆ, ಕೇಂದ್ರದಿಂದ ನಮಗೆ ಈವರೆಗೆ ಯಾವುದೇ ಸೂಚನೆ ಬಂದಿಲ್ಲ ಎಂದು ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಕೇಂದ್ರ ಸರ್ಕಾರ ಯೋಜನೆಯನ್ನು ವಿಸ್ತರಿಸಿದೆ ಎಂದ ಮೇಲೆ ಅದನ್ನು ಎಲ್ಲ ರಾಜ್ಯಗಳು ಪಾಲಿಸಬೇಕಾಗುತ್ತದೆ. ಹೀಗಾಗಿ ಕೇಂದ್ರದಿಂದ ಸೂಕ್ತ ಮಾಹಿತಿ ಪಡೆದು ರಾಜ್ಯದಲ್ಲಿ ರೇಷನ್ ಕಾರ್ಡ್ ಹೊಂದಿಲ್ಲದ ಜನರಿಗೂ ಪ್ರಧಾನಮಂತ್ರಿ ಯೋಜನೆ ಅಡಿ ಪಡಿತರ ವಿತರಿಸಲು ರಾಜ್ಯ ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ನಿರ್ದೇಶಿಸಿ ವಿಚಾರಣೆಯನ್ನು ಮುಂದೂಡಿತು.