ಬೆಂಗಳೂರು/ಕಲಬುರಗಿ: ಪೊಲೀಸ್ ಸಬ್ ಇನ್‌ಸ್ಪೆಕ್ಟರ್(ಪಿಎಸ್ಐ) ನೇಮಕಾತಿ ಹಗರಣದ ಆರೋಪಿ, ಕಲಬುರಗಿಯ ಜ್ಞಾನಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಸ್ಥೆ ದಿವ್ಯಾ ಹಾಗರಗಿ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ಸಂಬಂಧ ಸರ್ಕಾರಕ್ಕೆ ಕಲಬುರಗಿ ಹೈಕೋರ್ಟ್ ಪೀಠ ನೋಟಿಸ್ ಜಾರಿ ಮಾಡಿದೆ.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ಜಿ ಉಮಾ ಅವರ ನೇತೃತ್ವದ ಕಲಬುರಗಿಯ ಏಕಸದಸ್ಯ ಪೀಠ, ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಸೂಚನೆ ನೀಡಿ ವಿಚಾರಣೆ ಮುಂದೂಡಿದೆ.
ಕಲಬುರಗಿಯ ಜ್ಞಾನಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪಿಎಸ್ಐ ಪರೀಕ್ಷೆ ವೇಳೆ ಕೆಲ ಅಭ್ಯರ್ಥಿಗಳ ಓಎಂಆರ್ ಶೀಟ್ ತಿದ್ದಿಸಿದ್ದಲ್ಲದೇ, ಇನ್ನು ಕೆಲ ಅಭ್ಯರ್ಥಿಗಳಿಗೆ ಬ್ಲೂಟೂತ್ ಮೂಲಕ ಉತ್ತರ ನೀಡಿ ಅಕ್ರಮ ಎಸಗಿರುವ ಆರೋಪ ದಿವ್ಯಾ ಮೇಲಿದೆ. ಏಪ್ರಿಲ್ 29ರಂದು ದಿವ್ಯಾ ಹಾಗರಗಿ ಸೇರಿದಂತೆ ಐವರನ್ನು ಸಿಐಡಿ ಪೊಲೀಸರು ಮಹಾರಾಷ್ಟ್ರದ ಪುಣೆಯಲ್ಲಿ ಬಂಧಿಸಿದ್ದರು. ದಿವ್ಯಾ ಹಾಗರಗಿ ಅವರು ಪ್ರಕರಣದಲ್ಲಿ 18ನೇ ಆರೋಪಿಯಾಗಿದ್ದಾರೆ.
ಜ್ಞಾನಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿನ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆದಿದ್ದ ವೀರೇಶ ನಿಡಗುಂದ ಎಂಬ ಅಭ್ಯರ್ಥಿ ಬಂಧನದೊಂದಿಗೆ ಅಕ್ರಮ ಬಯಲಿಗೆ ಬಂದಿತ್ತು. ಆರೋಪಿಗಳ ವಿರುದ್ಧ ಕಲಬುರಗಿಯ ಚೌಕ್ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳಡಿ ಅಡಿ ಪ್ರಕರಣ ದಾಖಲಾಗಿದೆ.