ಬೆಂಗಳೂರು : ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದಿಂದ ಜಾರಿಗೆ ಬರುವಂತೆ ರಾಜ್ಯ ಪಠ್ಯಕ್ರಮ ಅಳವಡಿಸಿಕೊಂಡಿರುವ ಸರ್ಕಾರಿ ಅನುದಾನಿತ ಮತ್ತು ಅನುದಾನಿತ ಶಾಲಾ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 9ನೇ ತರಗತಿ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಮಾಪನ-2(SA-2)ಹಾಗು 11 ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯಿಂದಲೇ ನಡೆಸುವಂತೆ 12 ಷರತ್ತುಗಳೊಂದಿಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈಗಾಗಲೇ 5, 8ನೇ ತರಗತಿಗೆ ಮೌಲ್ಯಾಂಕನ ಹಾಗು ಎಸ್.ಎಸ್.ಎಲ್.ಸಿ, ದ್ವಿತೀಯ ಪಿಯುಸಿಗೆ ವಾರ್ಷಿಕ ಪರೀಕ್ಷೆಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ನಡೆಸಲಾಗುತ್ತಿದೆ. ಇದೀಗ 9 ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೂ ಈ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಇದರಿಂದಾಗಿ ವಿದ್ಯಾರ್ಥಿಗಳ ಕಲಿಕಾ ಮಟ್ಟ ಪರಿಶೀಲಿಸಿ ಉತ್ತಮಗೊಳಿಸಲು ಸಹಾಯಕವಾಗಲಿದೆ ಎಂದು ಅಭಿಪ್ರಾಯಪಟ್ಟು 9 ನೇ ತರಗತಿ ಮತ್ತು ಪ್ರಥಮ ಪಿಯುಸಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ಷರತ್ತುಗಳನ್ನು ವಿಧಿಸಿ ಶಿಕ್ಷಣ ಇಲಾಖೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಗೆ ಆದೇಶ ನೀಡಿದೆ.
ಷರತ್ತುಗಳು :
- 9ನೇ ತರಗತಿ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಮಾಪನ-2(SA-2)ಹಾಗು 11ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ವತಿಯಿಂದ ಶಾಲಾ ಕಾಲೇಜು ಹಂತದಲ್ಲೇ ನಡೆಸಬೇಕು.
- 9ನೇ ತರಗತಿ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಮಾಪನ-2(SA-2) ಕ್ಕೆ ಸಂಬಂಧಿಸಿದ ಪ್ರಶ್ನೆ ಪತ್ರಿಕೆಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಕೆ.ಎಸ್.ಕ್ಯು.ಎ.ಎ.ಸಿ ವತಿಯಿಂದ ರಾಜ್ಯಮಟ್ಟದಲ್ಲಿ ಸಿದ್ದಪಡಿಸಿ ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಲಾಗಿನ್ ನಲ್ಲಿ ಲಭ್ಯ ಮಾಡಬೇಕು.
- 11ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಗೆ ಸಂಬಂಧಿಸಿದಂತೆ ಪ್ರಶ್ನೆ ಪತ್ರಿಕೆಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಪಿಯು ಪರೀಕ್ಷಾ ವಿಭಾಗದಿಂದ ರಾಜ್ಯಮಟ್ಟದಲ್ಲಿ ಸಿದ್ದಪಡಿಸಿ ಸಂಬಂಧಿಸಿದ ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕರ ಲಾಗಿನ್ ನಲ್ಲಿ ಲಭ್ಯ ಮಾಡಬೇಕು.
- 9ನೇ ತರಗತಿ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಮಾಪನ-2(SA-2)ಹಾಗು 11 ನೇ ತರಗತಿಯ ವಾರ್ಷಿಕ ಪರೀಕ್ಷೆಗೆ ಆಯಾ ಶಾಲಾ ಕಾಲೇಜುಗಳೇ ಪರೀಕ್ಷಾ ಕೇಂದ್ರಗಳಾಗಿರುತ್ತವೆ.
- 9ನೇ ತರಗತಿ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಮಾಪನ-2(SA-2) ನಡೆಯುವ ವೇಳೆ ಸಮೀಪದ ಶಾಲೆಗಳ ಶಿಕ್ಷಕರನ್ನು ಕೊಠಡಿ ಮೇಲ್ವಿಚಾರಕರನ್ನಾಗಿ ನೇಮಿಸಬೇಕು.
- 11ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಯುವ ವೇಳೆ ಆಯಾ ಕಾಲೇಜುಗಳ ಉಪನ್ಯಾಸಕರನ್ನೇ ಕೊಠಡಿ ಮೇಲ್ವಿಚಾರಕರನ್ನಾಗಿ ನೇಮಿಸಬೇಕು.
- 9ನೇ ತರಗತಿ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಮಾಪನ-2(SA-2)ರ ಉತ್ತರ ಪತ್ರಿಕೆ ಮೌಲ್ಯಮಾಪನ ತಾಲ್ಲೂಕು ಹಂತದಲ್ಲಿ ಹಾಗು 11ನೇ ತರಗತಿಯ ವಾರ್ಷಿಕ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನವನ್ನು ಸಂಬಂಧಿಸಿದ ಕಾಲೇಜುಗಳಲ್ಲೇ ನಿರ್ವಹಿಸಬೇಕು.
- ಮೌಲ್ಯಮಾಪನ ಪೂರ್ಣಗೊಂಡ ತಕ್ಷಣವೇ ವಿದ್ಯಾರ್ಥಿಗಳ ಫಲಿತಾಂಶವನ್ನು ಸಂಬಂಧಿಸಿದ ಮುಖ್ಯಶಿಕ್ಷಕರು ಮತ್ತು ಪ್ರಾಂಶುಪಾಲರು ಎಸ್.ಎ.ಟಿ.ಎಸ್ ನಲ್ಲಿ ಅಪ್ಲೋಡ್ ಮಾಡಬೇಕು.
- 9ನೇ ತರಗತಿ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಮಾಪನ-2(SA-2)ರಲ್ಲಿ ಯಾವುದೇ ವಿದ್ಯಾರ್ಥಿಯನ್ನು ಅನುತ್ತೀರ್ಣ ಮಾಡುವಂತಿಲ್ಲ ಹಾಗು ಫಲಿತಾಂಶವನ್ನು ಸಂಬಂಧಿಸಿದ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಮಾತ್ರ ನೀಡಬೇಕು.
- 11 ನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಅನುರ್ತೀರ್ಣರಾದರೆ ಪೂರಕ ಪರೀಕ್ಷೆಯನ್ನು ಆಯಾ ಕಾಲೇಜುಗಳ ಹಂತದಲ್ಲೇ ನಡೆಸಬೇಕು.
- 9ನೇ ತರಗತಿ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಮಾಪನ-2(SA-2) ಕ್ಕೆ ತಗುಲುವ ವೆಚ್ಚವನ್ನು ಪ್ರಸ್ತುತ ವರ್ಷಕ್ಕೆ ಮಾತ್ರ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯಲ್ಲಿ ಲಭ್ಯವಿರುವ ಅನುದಾನದಲ್ಲಿ ಭರಿಸಲು ಅನುಮತಿ ನೀಡಿದೆ.
- 11 ನೇ ತರಗತಿ ವಾರ್ಷಿಕ ಪರೀಕ್ಷೆಯ ಪ್ರಶ್ನೆಪತ್ರಿಕೆಗಳ ರಚನೆ ಮತ್ತು ಡಿಟಿಪಿ ಕಾರ್ಯಕ್ಕೆ ತಗುಲುವು ವೆಚ್ಚವನ್ನು ಪ್ರಸ್ತುತ ವರ್ಷಕ್ಕೆ ಮಾತ್ರ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯಲ್ಲಿ ಲಭ್ಯವಿರುವ ಅನುದಾನದಲ್ಲಿ ಭರಿಸಲು ಅನುಮತಿ ನೀಡಿದೆ.
- ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯ ವೃದ್ಧಿಸಲು ಪ್ರಸಕ್ತ ಸಾಲಿನಿಂದಲೇ 9 ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೂ ಪಬ್ಲಿಕ್ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿ ಈ ಆದೇಶ ಹೊರಡಿಸಿದೆ. ಹಾಗಾಗಿ 2023-24ನೇ ಸಾಲಿನಿಂದಲೇ 9ನೇ ತರಗತಿ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಮಾಪನ-2 ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಯಲಿದೆ.
- ಪಬ್ಲಿಕ್ ಪರೀಕ್ಷೆಯಿಂದಾಗುವ ಬದಲಾವಣೆಗಳು : ಇಷ್ಟು ದಿನ ಪ್ರೌಢಶಾಲೆ, ಪಿಯು ಕಾಲೇಜು ಮಟ್ಟದಲ್ಲೇ ನಡೆಯುತ್ತಿದ್ದ ಪರೀಕ್ಷೆ ಈ ವರ್ಷದಿಂದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಉಸ್ತುವಾರಿಯಲ್ಲಿ ನಡೆಯಲಿದೆ. ಡಿಡಿಪಿಐ ಮಟ್ಟದಲ್ಲಿ ತಯಾರಾಗುತ್ತಿದ್ದ ಪ್ರಶ್ನೆ ಪತ್ರಿಕೆ ಇನ್ನು ಮುಂದೆ ಮಂಡಳಿಯಿಂದಲೇ ತಯಾರಾಗಲಿದೆ. 9ನೇ ತರಗತಿ ಮೌಲ್ಯಮಾಪನ ತಾಲೂಕು ಮಟ್ಟದಲ್ಲಿ ಮತ್ತು ಪ್ರಥಮ ಪಿಯು ಮೌಲ್ಯಮಾಪನ ಆಯಾ ಕಾಲೇಜಿನಲ್ಲಿ ನಡೆಯಲಿದೆ. 9 ನೇ ತರಗತಿಯಲ್ಲಿ ಯಾರನ್ನೂ ಫೇಲ್ ಮಾಡುವಂತಿಲ್ಲ. ಪ್ರಥಮ ಪಿಯುಸಿಯಲ್ಲಿ ಫೇಲ್ ಮಾಡಬಹುದು. ನಂತರ ವಿದ್ಯಾರ್ಥಿಗಳು ಪೂರಕ ಪರೀಕ್ಷೆ ಬರೆಯಬೇಕು.
ಇದನ್ನೂ ಓದಿ : ಶಾಲಾ ಮಕ್ಕಳ ಬ್ಯಾಗ್ ಹೊರೆ ಕಡಿಮೆ ಮಾಡಲು ಪ್ರಯತ್ನ- ಸಚಿವ ಮಧು ಬಂಗಾರಪ್ಪ