ಬೆಂಗಳೂರು: ಎಫ್‌ಐಆರ್ ದಾಖಲಾದ 24 ಗಂಟೆಗಳ ಅವಧಿಯಲ್ಲಿ ವೆಬ್‌ಸೈಟ್‌ನಲ್ಲಿ ದಾಖಲಿಸಲು ಲೋಕಾಯುಕ್ತಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.
ಈ ಕುರಿತು ವಕೀಲ ಎಸ್. ಉಮಾಪತಿ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಮತ್ತು ಲೋಕಾಯುಕ್ತ ಎಡಿಜಿಪಿ ಅವರನ್ನು ಪ್ರತಿವಾದಿಯನ್ನಾಗಿ ಮಾಡಲಾಗಿದೆ. ಎಫ್‌ಐಆರ್ ದಾಖಲಾದ 24 ಗಂಟೆಗಳಲ್ಲಿ ಅದನ್ನು ಸಂಬಂಧಪಟ್ಟ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು ಎಂದು 2016ರಲ್ಲಿ ಸುಪ್ರೀಂಕೋರ್ಟ್ ಆದೇಶ ನೀಡಿತ್ತು. ಇದನ್ನು ಸಿಬಿಐ ಸೇರಿದಂತೆ ಉಳಿದ ತನಿಖಾ ಸಂಸ್ಥೆಗಳು ಪಾಲಿಸುತ್ತಿವೆ. ಸುಪ್ರೀಂಕೋರ್ಟ್ ಆದೇಶವನ್ನು ಕಡ್ಡಾಯವಾಗಿ ಪಾಲಿಸುವಂತೆ 2018ರಲ್ಲಿ ಎಸಿಬಿ ಮತ್ತು ಬಿಎಂಟಿಎಫ್‌ಗೆ ಹೈಕೋರ್ಟ್ ನಿರ್ದೇಶನ ನೀಡಿದೆ. ಅದನ್ನು ಎಸಿಬಿ ಪಾಲಿಸುತ್ತ ಬಂದಿತ್ತು.
ಇದನ್ನೂ ಓದಿ: ಕರ್ನಾಟಕ ಹೈಕೋರ್ಟ್ ಸಿಜೆಯಾಗಿ ಪಿಬಿ ವರಾಲೆ ನೇಮಕ: ಕೇಂದ್ರದ ಅಧಿಸೂಚನೆ
ಈ ನಡುವೆ ಎಸಿಬಿಯನ್ನು ರದ್ದುಗೊಳಿಸಿ 2022ರ ಆ.11ರಂದು ತೀರ್ಪು ನೀಡಿದ ಹೈಕೋರ್ಟ್, ಲೋಕಾಯುಕ್ತದ ಅಧಿಕಾರವನ್ನು ಮರುಸ್ಥಾಪಿಸಿ ಆದೇಶಿಸಿದೆ. ಆದರೆ, ಎಫ್‌ಐಆರ್ ದಾಖಲಾದ 24 ಗಂಟೆಗಳಲ್ಲಿ ಅದನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು ಎಂದು ಸುಪ್ರೀಂಕೋರ್ಟ್ ಆದೇಶವನ್ನು ಲೋಕಾಯುಕ್ತ ಪೊಲೀಸರು ಪಾಲಿಸುತ್ತಿಲ್ಲ. ಇದರಿಂದ ಮುಂದಿನ ಕಾನೂನು ಪ್ರಕ್ರಿಯೆಗೆ ದೂರುದಾರರು, ಕಕ್ಷಿದಾರರು ಮತ್ತು ವಕೀಲರಿಗೆ ಸಾಕಷ್ಟು ಅನಾನೂಕೂಲವಾಗುತ್ತಿದೆ. ಈ ಬಗ್ಗೆ ಅರ್ಜಿದಾರರು 2022ರ ಸೆ.16ರಂದು ದೂರು ಕೊಟ್ಟಿದ್ದರೂ ಯಾವುದೇ ಕ್ರಮ ಆಗಿಲ್ಲ ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ಮಗು ನೋಡಲು ಬಯಸುವ ವಿಚ್ಛೇದಿತ ಪತಿಗೆ ಆತಿಥ್ಯ ನೀಡುವ ಅವಶ್ಯಕತೆ ಇಲ್ಲ: ಹೈಕೋರ್ಟ್ ಮಹತ್ವದ ತೀರ್ಪು
ಆದ್ದರಿಂದ ಎಫ್‌ಐಆರ್ ದಾಖಲಾದ 24 ಗಂಟೆಗಳಲ್ಲಿ ಅದನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸುವಂತೆ ಲೋಕಾಯುಕ್ತಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.