ಬೆಂಗಳೂರು: ನಗರ ವ್ಯಾಪ್ತಿಯಲ್ಲಿ ಅಕ್ರಮ ಹಾಗೂ ಅನಧಿಕೃತ ಕಟ್ಟಡ ನಿರ್ಮಾಣಕ್ಕೆ ಕಾರಣರಾಗುವ ಅಧಿಕಾರಿಗಳಿಗೆ ಶಿಕ್ಷೆ ವಿಧಿಸಲು ಅಗತ್ಯವಿರುವ ಕರಡನ್ನು ಸಿದ್ಧಪಡಿಸಲಾಗಿದ್ದು, ನಿಯಮಗಳನ್ನು ಅಂತಿಮಗೊಳಿಸಲು ಮೂರು ತಿಂಗಳ ಕಾಲಾವಕಾಶ ನೀಡುವಂತೆ ಹೈಕೋರ್ಟ್ಗೆ ರಾಜ್ಯ ಸರ್ಕಾರ ಮನವಿ ಮಾಡಿದೆ.
ನಗರ ವ್ಯಾಪ್ತಿಯಲ್ಲಿ ಅಕ್ರಮ ಕಟ್ಟಡಗಳನ್ನು ನಿರ್ಮಿಸಲು ಪರೋಕ್ಷವಾಗಿ ಕಾರಣವಾಗುವ ಅಧಿಕಾರಿಗಳಿಗೆ ಶಿಕ್ಷೆ ಜಾರಿಗೊಳಿಸುವ ಸಂಬಂಧ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ಕೋರಿ ವಕೀಲ ಎಸ್. ಉಮಾಪತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಸರ್ಕಾರದ ಪರ ವಕೀಲರು ಈ ಮಾಹಿತಿ ನೀಡಿದ್ದಾರೆ.
ನಗರ ಪಾಲಿಕೆ, ನಗರಸಭೆ ಸೇರಿದಂತೆ ಮುನ್ಸಿಪಲ್ ಕಾರ್ಪೋರೇಷನ್‌ಗಳ ವ್ಯಾಪ್ತಿಯಲ್ಲಿ ನಡೆಯುವ ಅಕ್ರಮ ಹಾಗೂ ಅನಧಿಕೃತ ಕಟ್ಟಡ ನಿರ್ಮಾಣ ತಡೆಗಟ್ಟಲು ಮತ್ತು ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಕರಡು ನಿಯಮಗಳನ್ನು ಈಗಾಗಲೇ ರೂಪಿಸಲಾಗಿದೆ. ಅವುಗಳನ್ನು ಅಂತಿಮಗೊಳಿಸಲು ಮೂರು ತಿಂಗಳು ಕಾಲಾವಕಾಶ ನೀಡಬೇಕೆಂದು ಪೀಠಕ್ಕೆ ಸರ್ಕಾರದ ಪರ ವಕೀಲರು ಪೀಠಕ್ಕೆ ಕೋರಿದ್ದಾರೆ.
ಮುನ್ಸಿಪಲ್ ಕಾರ್ಪೋರೇಷನ್‌ಗಳ ವ್ಯಾಪ್ತಿಯಲ್ಲಿ ನಿರ್ಮಾಣವಾಗುವ ಅಕ್ರಮ ಹಾಗೂ ಅನಧಿಕೃತ ಕಟ್ಟಡಗಳ ವಿರುದ್ಧ ಕ್ರಮ ಕೈಗೊಳ್ಳಲು ವಿಫಲರಾದ ಮತ್ತು ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು 'ಕರ್ನಾಟಕ ನಗರ ಹಾಗೂ ಗ್ರಾಮಾಂತರ ಯೋಜನಾ ಕಾಯ್ದೆ - 1961’ರ ಸೆಕ್ಷನ್ 76ರಲ್ಲಿ ಅವಕಾಶವಿದೆ. ಈ ನಿಯಮವನ್ನು 2007ರಲ್ಲಿ ಸೇರಿಸಲಾಗಿದೆ. ಆದರೆ, ತಪ್ಪಿತಸ್ಥ ಅಧಿಕಾರಿಗಳಿಗೆ ಶಿಕ್ಷೆಯ ಸ್ವರೂಪ ನಿಗದಿಪಡಿಸಿಲ್ಲ. ಈ ಬಗ್ಗೆ 2019ರ ನ.2 ರಂದು ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಆದರೆ, ಈವರೆಗೆ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು.