ಬೆಂಗಳೂರು : ಕಾಂಗ್ರೆಸ್ ಪಕ್ಷ ಮೊದಲಿನಿಂದಲೂ ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡುತ್ತಾ ಬಂದಿದೆ. ನಾನೂ ಕೂಡ ವಿಧಾನ ಪರಿಷತ್ ಚುನಾವಣೆಯ ಟಿಕೆಟ್ ಆಕಾಂಕ್ಷಿ ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪ ಅಮರನಾಥ್ ಹೇಳಿದ್ದಾರೆ.
ಈಟಿವಿ ಭಾರತದ ಜೊತೆ ಮಾತನಾಡಿದ ಅವರು, ಪಕ್ಷ ಸಂಘಟನೆ ಸದ್ಯದ ಪರಿಸ್ಥಿತಿಯಲ್ಲಿ ಅತ್ಯಂತ ಅನಿವಾರ್ಯ, ನಾವೆಲ್ಲರೂ ಸೇರಿ ತಳಮಟ್ಟದಿಂದ ಪಕ್ಷ ಸಂಘಟಿಸಲು ಮುಂದಾಗಿದ್ದೇವೆ. ನಮಗೆಲ್ಲ ಶಕ್ತಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿಂತಿದ್ದು, ಅವರ ಬೆಂಬಲಕ್ಕೆ ನಾವು ನಿಂತಿದ್ದೇವೆ. ಬಿಜೆಪಿ ವೈಫಲ್ಯಗಳನ್ನು ತೋರಿಸುವ ಜೊತೆಗೆ ನಮ್ಮ ಸಾಮರ್ಥ್ಯವನ್ನು ಕೂಡ ತಿಳಿಸುವ ಕಾರ್ಯ ಮಾಡುತ್ತಿದ್ದೇವೆ ಎಂದರು.
ಕೋವಿಡ್ ಆತಂಕದ ಸಂದರ್ಭದಲ್ಲಿ ನಾವು ಚೆನ್ನಾಗಿ ಕಾರ್ಯನಿರ್ವಹಿಸುವ ಜೊತೆಗೆ ಜನಸೇವೆಯನ್ನು ಮಾಡುತ್ತಿದ್ದೇವೆ. ಕಾಂಗ್ರೆಸ್ ಪಕ್ಷ ಮೊದಲಿನಿಂದಲೂ ಮಹಿಳೆಯರಿಗೆ ಆದ್ಯತೆ ನೀಡುತ್ತಾ ಬಂದಿದ್ದು, ಪ್ರಸ್ತುತ ವಿಧಾನ ಪರಿಷತ್ನಲ್ಲಿ ಎರಡು ಮಹಿಳಾ ಸ್ಥಾನಗಳು ಖಾಲಿಯಾಗುತ್ತಿದೆ. ಪಕ್ಷದಿಂದ ಇಬ್ಬರನ್ನು ಆಯ್ಕೆ ಮಾಡುವ ಅವಕಾಶ ಇದೆ. ಇದರಲ್ಲಿ ಕನಿಷ್ಠ ಒಂದು ಸ್ಥಾನವನ್ನು ಮಹಿಳೆಯರಿಗೆ ನೀಡಬೇಕೆಂದು ಕೋರಿದ್ದೇವೆ. ನಾನು ಕೂಡ ಪರಿಷತ್ ಟಿಕೆಟ್ ಆಕಾಂಕ್ಷಿ. ಪಕ್ಷ ಯಾರಿಗೆ ಅವಕಾಶ ನೀಡಿದರೂ ಸಹಕಾರ ನೀಡುತ್ತೇನೆ ಎಂದು ತಿಳಿಸಿದರು.