ಬೆಂಗಳೂರು/ಮೈಸೂರು: ಪುತ್ತೂರು ಪ್ರಕರಣದ ಅತ್ಯಾಚಾರಿಗಳನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸುವಂತೆ ಆಗ್ರಹಿಸಿ ಬೆಂಗಳೂರು ನಗರದ ಮೈಸೂರು ಬ್ಯಾಂಕ್ ಸರ್ಕಲ್ನಲ್ಲಿ ಕರ್ನಾಟಕ ಪ್ರದೇಶ ವಿದ್ಯಾರ್ಥಿ ಜನತಾದಳ ಸಂಘಟನೆ ಪ್ರತಿಭಟನೆ ನಡೆಸಿತು.
ಈ ವೇಳೆ ಮಾತನಾಡಿದ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಹರಿಪ್ರಸಾದ್, ವಿದ್ಯಾರ್ಥಿ ಸಂಘಟನೆವೊಂದರ ವಿದ್ಯಾರ್ಥಿ ಪುತ್ತೂರಿನ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿದ್ದಾನೆ. ಹೀಗಾಗಿ ಸಂಘಟನೆಯನ್ನು ನಿಷೇಧಿಸಬೇಕು. ತನಿಖೆಗೆ ಸ್ಥಳೀಯ ಬಿಜೆಪಿ ಮುಖಂಡರು ಅಡ್ಡಿಪಡಿಸುತ್ತಿದ್ದಾರೆ ಎಂದು ಆರೋಪಿಸಿದರು.
ಪುತ್ತೂರು ಅತ್ಯಾಚಾರ ಖಂಡಿಸಿ ಮೈಸೂರಿನಲ್ಲಿ ಮಹಿಳಾ ಸಂಘಟನೆಗಳ ಪ್ರತಿಭಟನೆ:
ಪುತ್ತೂರಿನ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಮಾಡಿರುವ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿ ಕೆಪಿಸಿಸಿ ಮಹಿಳಾ ಘಟಕದೊಂದಿಗೆ ವಿವಿಧ ಮಹಿಳಾ ಸಂಘಟನೆಗಳು ಪ್ರತಿಭಟನೆ ನಡೆಸಿದವು.
ನಗರದ ಗಾಂಧಿವೃತ್ತದ ಮುಂದೆ ಜಮಾಯಿಸಿದ ಪ್ರತಿಭಟನಾಕಾರರು, ಪುತ್ತೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು. ಇಂತಹ ಹೇಯ ಕೃತ್ಯಗಳು ಸಮಾಜದಲ್ಲಿ ಮರುಕಳಿಸದಂತೆ ಕಾನೂನಿನಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.