ಬೆಂಗಳೂರು: 2016ರಲ್ಲಿ ನಡೆದ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ ರಸಾಯನ ಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಮೊದಲ ಆರೋಪಿ ಕುಮಾರಸ್ವಾಮಿಗೆ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿದ್ದು, ಜಾಮೀನು ಅರ್ಜಿ ವಜಾಗೊಳಿಸಿದೆ.
ಜಾಮೀನು ಕೋರಿ ತುಮಕೂರು ಮೂಲದ ಆರೋಪಿ ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯು ನ್ಯಾಯಮೂರ್ತಿ ಬಿ.ಎ.ಪಾಟೀಲ್ ಅವರಿದ್ದ ಏಕಸದಸ್ಯ ಪೀಠದಲ್ಲಿ ನಡೆಯಿತು. ಇದೇ ಪ್ರಕರಣದಲ್ಲಿ ಬಂಧಿತರಾಗಿದ್ದ ಇತರ ಆರೋಪಿಗಳಿಗೆ ಜಾಮೀನು ನೀಡಲಾಗಿದೆ, ನಾನು ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದೇನೆ. ಪೊಲೀಸರು ತನಿಖೆಯನ್ನು ವಿಳಂಬ ಮಾಡುತ್ತಿದ್ದಾರೆ. ಹೀಗಾಗಿ, ಜಾಮೀನು ನೀಡಬೇಕೆಂದು ಅರ್ಜಿದಾರ ಕುಮಾರಸ್ವಾಮಿ ನ್ಯಾಯಾಲಯವನ್ನು ಕೋರಿದ್ದರು.
ಆರೋಪಿಗೆ ಜಾಮೀನು ನೀಡಿದರೆ ಶಿಕ್ಷಣದ ವ್ಯವಸ್ಥೆಗೆ ಮತ್ತೆ ಧಕ್ಕೆ ತರುವ ಸಾಧ್ಯತೆ ಇದೆ. ಅಲ್ಲದೆ, ಆರೋಪಿಯನ್ನು ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ(ಕೋಕಾ) ಅಡಿ ತನಿಖೆ ನಡೆಸಲಾಗುತ್ತಿದೆ ಎಂದಿರುವ ನ್ಯಾಯಪೀಠ ಜಾಮೀನು ನೀಡಲು ನಿರಾಕರಿಸಿ, ಅರ್ಜಿಯನ್ನು ವಜಾಗೊಳಿಸಿದೆ.