ಬೆಂಗಳೂರು: ರಾಷ್ಟ್ರೀಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಬೆಂಗಳೂರಿಗೆ ಆಗಮಿಸಲಿದ್ದು, ರಾಜ್ಯದಲ್ಲಿ ಎರಡು ದಿನ ವಾಸ್ತವ್ಯ ಹೂಡಿ ಕಾಂಗ್ರೆಸ್ ನಾಯಕರ ಜೊತೆ ಸಭೆ, ಸಮಾಲೋಚನೆ ನಡೆಸಲಿದ್ದಾರೆ. ಮಧ್ಯಾಹ್ನ 12.30ಕ್ಕೆ ಬೆಂಗಳೂರಿಗೆ ಆಗಮಿಸುವ ರಾಹುಲ್ ಮಧ್ಯಾಹ್ನದವರೆಗೆ ನಗರದ ಖಾಸಗಿ ಹೋಟೆಲ್ನಲ್ಲಿ ತಂಗಲಿದ್ದಾರೆ. ನಂತರ ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಲಿದ್ದಾರೆ.
ಅಲ್ಲಿಂದ ಪುನಃ ಸಂಜೆ ಬೆಂಗಳೂರಿಗೆ ಆಗಮಿಸಿ ವಾಸ್ತವ್ಯ ಹೂಡಲಿದ್ದು, ನಾಳೆ(ಏ.1) ಕೆಪಿಸಿಸಿ ಕಚೇರಿ ಹಿಂಭಾಗದಲ್ಲಿರುವ ಪಕ್ಷದ ಹೊಸ ಕಟ್ಟಡದಲ್ಲಿ ಬಿಬಿಎಂಪಿ ಭಾಗದ ಕಾಂಗ್ರೆಸ್ ನಾಯಕರ ಜೊತೆ ಸಭೆ ನಡೆಸಲಿದ್ದಾರೆ. ಪ್ರಮುಖವಾಗಿ ಮುಂಬರುವ ಬಿಬಿಎಂಪಿ ಚುನಾವಣೆ ಹಾಗೂ ನಗರದಲ್ಲಿ ಕಾಂಗ್ರೆಸ್ ಸದಸ್ಯತ್ವ ಅಭಿಯಾನದ ಪ್ರಗತಿಯ ವಿವರ ಪಡೆಯಲಿದ್ದಾರೆ. ಅಲ್ಲದೇ ಕಾಂಗ್ರೆಸ್ ನಾಯಕರ ಜೊತೆ ಸಮಾಲೋಚಿಸಿ, ಸಲಹೆ ಸೂಚನೆ ನೀಡಲಿದ್ದಾರೆ.
ಮಹತ್ವದ ಸಭೆ: ನಾಳೆ ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಆಡಿಟೋರಿಯಂನಲ್ಲಿ ರಾಹುಲ್ ಗಾಂಧಿ ಕಾಂಗ್ರೆಸ್ ಮುಖಂಡರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್, ರಾಜ್ಯಸಭಾ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷರುಗಳು, ಎಐಸಿಸಿ ಪದಾಧಿಕಾರಿಗಳು ಹಾಗೂ ಮುಂಖಡರುಗಳು ಭಾಗವಹಿಸಲಿದ್ದಾರೆ.
ನಾಳೆ ಮಧ್ಯಾಹ್ನ 3.30ಕ್ಕೆ ಕೆಪಿಸಿಸಿ ಕಚೇರಿಯಿಂದ ಹೊರಟು ಬೆಂಗಳೂರು ವಿಮಾನ ನಿಲ್ದಾಣ ತಲುಪುವ ರಾಹುಲ್ ಗಾಂಧಿ, 5 ಗಂಟೆಯ ವಿಮಾನದ ಮೂಲಕ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.
ಸಿದ್ಧತೆ ವೀಕ್ಷಣೆ: ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ನಾಳೆ ರಾಜ್ಯ ಕಾಂಗ್ರೆಸ್ ನಾಯಕರೊಂದಿಗೆ ಸಭೆ ನಡೆಸಲಿರುವ ಕ್ವೀನ್ಸ್ ರಸ್ತೆಯ ರಾಜೀವ್ ಗಾಂಧಿ ಭವನಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಸಲೀಂ ಅಹ್ಮದ್, ಧ್ರುವನಾರಾಯಣ್, ಮಾಜಿ ಸಚಿವ ಹೆಚ್.ಎಂ ರೇವಣ್ಣ ಮತ್ತಿತರ ಮುಖಂಡರು ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ರೈಲಿನಲ್ಲಿ ಮಹಿಳೆಯ ಕೆನ್ನೆಗೆ ಮುತ್ತು: ಏಳು ವರ್ಷ ವಿಚಾರಣೆ, ಈಗ ಶಿಕ್ಷೆ ಪ್ರಕಟ