ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ವತಿಯಿಂದ ನಗರದ ವಿವಿಧೆಡೆ ರಾಹುಲ್ ಗಾಂಧಿ ಜನ್ಮದಿನಾಚರಣೆ ಆಚರಿಸಲಾಯಿತು. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಲವು ಸೇವಾ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು. ಕರ್ನಾಟಕ ಕಿಸಾನ್ ಕಾಂಗ್ರೆಸ್ ವತಿಯಿಂದ ಆಯೋಜನೆಗೊಂಡ ರೈತರಿಗೆ ಉಚಿತ ಬಿತ್ತನೆ ಬೀಜ ವಿತರಣೆ ಕಾರ್ಯಕ್ರಮವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಚೇರಿಯಲ್ಲಿ ಚಾಲನೆ ನೀಡಿದರು.
ಜಿಲ್ಲೆ, ತಾಲೂಕು, ಹೋಬಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ರೈತರಿಗೆ ಪ್ರಾದೇಶಿಕವಾಗಿ ಅನುಕೂಲವಾಗುವ ಬಿತ್ತನೆ ಬೀಜಗಳನ್ನು ಕಿಸಾನ್ ಕಾಂಗ್ರೆಸ್ ನಾಯಕರು ವಿತರಿಸುವ ಮುಖಾಂತರ ರಾಹುಲ್ ಗಾಂಧಿ ಹುಟ್ಟುಹಬ್ಬವನ್ನು ಕಿಸಾನ್ ಕಾಂಗ್ರೆಸ್ ವತಿಯಿಂದ ಆಚರಿಸಲಾಗಿದೆ ಎಂದು ಕರ್ನಾಟಕ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಮೀಗಾ ತಿಳಿಸಿದರು.
ರೇಸ್ ಕೋರ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಸೇವಾದಳ ಕಾರ್ಯಕರ್ತರಿಗೆ ಕೋವಿಡ್ ಲಸಿಕೆ ವಿತರಿಸುವ ಕಾರ್ಯಕ್ರಮವನ್ನು ಮಾಜಿ ಸಚಿವ ಜಮೀರ್ ಅಹಮದ್ ಖಾನ್ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು. ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸ್ವತಃ ವೈದ್ಯರೂ ಆಗಿರುವ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕ ಡಾ. ಅಜಯ್ ಸಿಂಗ್ ಕಾರ್ಯಕರ್ತರಿಗೆ ಲಸಿಕೆ ಹಾಕಿದರು.
ಮಧ್ಯಾಹ್ನ ನಡೆದ ಮತ್ತೊಂದು ಕಾರ್ಯಕ್ರಮದಲ್ಲಿ ಹುಟ್ಟುಹಬ್ಬದ ಪ್ರಯುಕ್ತ ಕರ್ನಾಟಕದ ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ನೇತೃತ್ವದಲ್ಲಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ ಸಚಿವ ಸೀತಾರಾಮ್ ಹಾಗೂ ಇತರ ನಾಯಕರು ಉಪಸ್ಥಿತರಿದ್ದರು. ಆಟೋಚಾಲಕರು, ಪೂಜಾರಿಗಳು, ಮೌಲ್ವಿಗಳು, ಆಶಾ ಕಾರ್ಯಕರ್ತೆಯರಿಗೆ ಸರ್ಕಲ್ ಮಾರಮ್ಮ ದೇವಸ್ಥಾನದ ಬಳಿ ಇರುವ ಮಲ್ಲೇಶ್ವರಂ ಮೈದಾನದಲ್ಲಿ ಫುಡ್ ಕಿಟ್ ವಿತರಿಸಲಾಯಿತು.