ಬೆಂಗಳೂರು: ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಜುಲೈ 15ರಿಂದ 19ರವರೆಗೆ ಗುಡುಗಿನಿಂದ ಕೂಡಿದ ಭಾರಿ ಮಳೆಯಾಗುವ ಸಾಧ್ಯತೆ ಹೆಚ್ಚಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ. ಎಸ್. ಪಾಟೀಲ್ ತಿಳಿಸಿದ್ದಾರೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳ ಕೆಲವೆಡೆ ಭಾರಿ ಮತ್ತು ಅತೀ ಹೆಚ್ಚು ಮಳೆಯನ್ನು ನಿರೀಕ್ಷಿಸಲಾಗಿದೆ. ಈ ಹಿನ್ನೆಲೆ ಜುಲೈ 15ರಿಂದ 18ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಮಾಹಿತಿ ನೀಡಿದರು.
ದಾವಣಗೆರೆ, ಚಾಮರಾಜನಗರ, ಬೆಳಗಾವಿ, ಧಾರವಾಡ, ಹಾವೇರಿ, ಬೀದರ್, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿಯೂ ಭಾರಿ ಮಳೆ ನಿರೀಕ್ಷಿಸಲಾಗಿದೆ. ಹೀಗಾಗಿ ಜುಲೈ 16 ಮತ್ತು 17ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಸಿ.ಎಸ್. ಪಾಟೀಲ್ ಹೇಳಿದರು.
ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ:
ನೈರುತ್ಯ ಮುಂಗಾರು ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಗುರುವಾರ ಸಾಮಾನ್ಯವಾಗಿತ್ತು. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಿದೆ. ಮುಖ್ಯವಾಗಿ, ಮಡಿಕೇರಿಯಲ್ಲಿ 15 ಸೆಂ.ಮೀ, ಶಿವಮೊಗ್ಗ ಜಿಲ್ಲೆಯ ತಾಳಗುಪ್ಪದಲ್ಲಿ 14 ಸೆಂ.ಮೀ, ಕಾರವಾರದಲ್ಲಿ 13 ಸೆಂ.ಮೀ. ಮಳೆಯಾಗಿದೆ ಎಂದು ಅವರು ವಿವರಿಸಿದರು.