ಬೆಂಗಳೂರು: ರಾಜ್ಯದಲ್ಲಿ ಅ.15ರ ವರೆಗೂ ಮಳೆ ಮುಂದಿವರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ವರೆಗೂ ವ್ಯಾಪಕ ಮಳೆ ಬೀಳುವ ಸಾಧ್ಯತೆಯಿದ್ದು, ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದ ಬಹುತೇಕ ಕಡೆ ಮಂಗಳವಾರ ಸಹ ವ್ಯಾಪಕ ಮಳೆಯಾಗಿ ಬಹುತೇಕ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಮುಂದುವರೆಯಲಿದೆ. ಉತ್ತರ ಅಂಡಮಾನ್ ಸಮುದ್ರದಲ್ಲಿ ವಾಯುಭಾರ ಕುಸಿತದ ಕಾರಣದಿಂದಾಗಿ ಮಳೆಯಾಗುವ ಸಂಭವವಿದೆ.
ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಮುಂದಿನ ಮೂರು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜೊತೆಗೆ ಮೈಸೂರು, ಮಂಡ್ಯ, ತುಮಕೂರು ಸಾಧಾರಣ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಜ್ಞ ಸದಾನಂದ ಅಡಿಗ ಮಾಹಿತಿ ನೀಡಿದ್ದಾರೆ.
ಜೊತೆಗೆ ಅಂಡಮಾನ್ ಸಮುದ್ರದ ಉತ್ತರ ಭಾಗಕ್ಕೆ ಚಂಡಮಾರುತ ಅಪ್ಪಳಿಸಿದ್ದು, ಮುಂದಿನ 48 ಗಂಟೆಗಳಲ್ಲಿ ಪೂರ್ವ-ಮಧ್ಯ ಬಂಗಾಳ ಕೊಲ್ಲಿ ಮತ್ತು ಉತ್ತರ ಅಂಡಮಾನ್ ಸಮುದ್ರದಲ್ಲಿ ವಾಯುಭಾರ ಕುಸಿತ ಸಂಭವಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ ವಾಲಿದ ಮತ್ತೊಂದು ಕಟ್ಟಡ, ಬೇರೆ ಕಟ್ಟಡಕ್ಕೆ ಹಾನಿಯಾಗದಂತೆ ತೆರವು ಕಾರ್ಯ: ಸಚಿವ ಕೆ.ಗೋಪಾಲಯ್ಯ