ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮುಂಗಾರು ಚುರುಕಾಗಿದ್ದು, ಬೆಂಗಳೂರಿನಲ್ಲಿಯೂ ವ್ಯಾಪಕ ಮಳೆಯಾಗುತ್ತಿದೆ. ಮಧ್ಯಾಹ್ನದ ನಂತರ ದಟ್ಟ ಮೋಡ ಕವಿದ ವಾತಾವರಣವಿದ್ದು, ಮಲ್ಲೇಶ್ವರಂ, ಕಾರ್ಪೋರೇಷನ್, ಮೆಜೆಸ್ಟಿಕ್, ಶೇಷಾದ್ರಿಪುರಂ, ಇಂದಿರಾನಗರ, ಕೋರಮಂಗಲ, ಹೆಬ್ಬಾಳ ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ.
ಮತ್ತೆ ಚುರುಕಾದ ಮುಂಗಾರು ಮಳೆ ಬಗ್ಗೆ ಮಾತನಾಡಿದ ಹವಾಮಾನ ಮುನ್ಸೂಚನೆ ನಿರ್ದೇಶಕ ಸಿ.ಎಸ್. ಪಾಟೀಲ, ಬೆಂಗಳೂರಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಸೆ. 2 ರಿಂದ 6 ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದರು.
ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಕೆಲವೆಡೆ ಮಾತ್ರ ಮಳೆಯಾಗಿದ್ದು ಮಾನ್ಸೂನ್ ದುರ್ಬಲವಾಗಿದೆ. ಕರಾವಳಿಯ ಕೆಲ ಜಿಲ್ಲೆಗಳಲ್ಲಿ ಸೆ. 2 ರಿಂದ 6 ರವರೆಗೆ ವ್ಯಾಪಕ ಮಳೆಯಾಗಲಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸೆ. 2, 3 ಹಾಗೂ 5 ರಂದು ಭಾರಿ ಮಳೆಯಾಗುವ ನಿರೀಕ್ಷೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇನ್ನು ಉತ್ತರ ಒಳನಾಡಿನಲ್ಲಿ ಸೆ. 2 ರಿಂದ 6 ರವರೆಗೆ ಎಲ್ಲಾ ಕಡೆ ಮಳೆಯಾಗುವ ನಿರೀಕ್ಷೆಯಿದ್ದು, ಬೆಳಗಾವಿ, ಧಾರವಾಡ, ಹಾವೇರಿ, ಧಾರವಾಡ, ಕೊಪ್ಪಳ ಜಿಲ್ಲೆಗಳಲ್ಲಿಯೂ ಭಾರಿ ಮಳೆಯಾಗುವ ನಿರೀಕ್ಷೆ ಇರುವುದರಿಂದ ಇಂದು ಮತ್ತೆ ನಾಳೆ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದರು.
ದಕ್ಷಿಣ ಒಳನಾಡಿನಲ್ಲಿ ಸೆ. 2 ರಿಂದ 6 ರವರೆಗೆ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದ್ದು, ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳ ಕೆಲವು ಕಡೆ ಭಾರಿ ಹಾಗೂ ಅತಿ ಭಾರಿ ಮಳೆಯಾಗುವುದರಿಂದ ಇಂದು ಮತ್ತು ನಾಳೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮಲೆನಾಡಿನ ಜಿಲ್ಲೆಗಳು ಸೇರಿದಂತೆ ರಾಮನಗರ, ಬೆಂಗಳೂರು, ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ, ಚಾಮರಾಜನಗರ, ರಾಮನಗರ, ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಸೆ. 2 ರಿಂದ ಸೆ. 6 ರವರೆಗೆ ಎಲ್ಲೋ ಅಲರ್ಟ್ ನೀಡಲಾಗಿದೆ ಎಂದರು.